ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರ ಅಡಿ ಸ್ವಾಧೀನಕ್ಕೊಳಪಡುವ ಭೂಮಿಗಳಿಗೆ ದರ ನಿಗದಿಯನ್ನು ಇಂದು ನಡೆಯುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗುತ್ತಿದೆ.
ಈ ಬಗ್ಗೆ ಬುಧವಾರ ವಿಧಾನಸೌಧದಲ್ಲಿ ಕೃಷ್ಣಾ ನದಿ ನೀರು ಹಂಚಿಕೆ ಸಂಬಂಧ ನಡೆದ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಭೂಸ್ವಾಧೀನ ಪರಿಹಾರ ವಿಚಾರವನ್ನೇ ವಿವಾದ ಮಾಡಿಕೊಳ್ಳುವುದರಲ್ಲಿ ಅರ್ಥವಿಲ್ಲ. ಮುಂದೆ ತೀರ್ಮಾನ ಮಾಡಲಿರುವ ಸೂಚಿತ ಪರಿಹಾರಕ್ಕೆ ಸರ್ವಪಕ್ಷಗಳೂ ಒಪ್ಪಿಗೆ ಸೂಚಿಸಬೇಕು ಎಂದು ಮನವಿ ಮಾಡುತ್ತಿದ್ದೇನೆ ಎಂದರು.
ದರ ನಿಗದಿ ಎಂದು ಅಂತಿಮವಾಗಬಹುದು ಹಾಗೂ ಕಾನೂನಾತ್ಮಕ ತೊಡಕುಗಳ ನಿವಾರಣೆಯ ಕ್ರಮದ ಬಗ್ಗೆ ಎಂದು ಕೇಳಿದಾಗ, ಈ ವಿಚಾರ ತುಂಬಾ ತಡವಾಗಬಾರದು ಎಂದು ನಾನು ತೀರ್ಮಾನ ತೆಗೆದುಕೊಂಡಿರುವೆ. ಸಚಿವ ಸಂಪುಟದಲ್ಲಿ ಇದರ ಬಗ್ಗೆ ತೀರ್ಮಾನ ಮಾಡಲಾಗುವುದು. ನಾನು ಅಫಿಡವಿಟ್ಗೆ ಸಹಿ ಹಾಕಿದ್ದು, ಎಸಿಎಸ್ ಅವರು ಗುರುವಾರ ನ್ಯಾಯಾಲಯಕ್ಕೆ ಇದನ್ನು ಸಲ್ಲಿಸಲಿದ್ದಾರೆ ಎಂದು ಹೇಳಿದರು.
ಆಲಮಟ್ಟಿ ಅಣೆಕಟ್ಟು ಎತ್ತರವನ್ನು 524 ಮೀ. ಹೆಚ್ಚಳ ಮಾಡಿದರೆ ಎಷ್ಟು ಭೂಮಿ ಬೇಕಾಗಬಹುದು ಎಂದು ಮುಖ್ಯಮಂತ್ರಿಯವರು ಹಾಗೂ ನಾನು ಸಂಬಂಧಪಟ್ಟವರಿಂದ ಮಾಹಿತಿ ಪಡೆದುಕೊಂಡಿದ್ದೇವೆ. ಇದರ ಬಗ್ಗೆ ಕಾನೂನು ತಜ್ಞರ ಬಳಿ ಚರ್ಚೆ ನಡೆಸಲಾಗುತ್ತಿದೆ. ಇದರ ಬಗ್ಗೆ ಕಾನೂನು ತಂಡ ಗುರುವಾರ ಬೆಳಗ್ಗೆ ಅಭಿಪ್ರಾಯ ನೀಡಲಿದ್ದು, ಇದನ್ನು ಸಚಿವ ಸಂಪುಟದ ಮುಂದೆ ಮಂಡಿಸಲಾಗುವುದು ಎಂದು ತಿಳಿಸಿದರು.
5.94 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ: ಇದಕ್ಕೂ ಮುನ್ನ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೃಷ್ಣಾ ಜಲ ವಿವಾದ ನ್ಯಾಯಾಧಿಕರಣ-2 ತೀರ್ಪಿನ ಅನ್ವಯ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಅನುಷ್ಠಾನಕ್ಕಾಗಿ 130 ಟಿಎಂಸಿ ನೀರು ಹಂಚಿಕೆ ಮಾಡಲಾಗಿದೆ. ಇದರಿಂದ 5.94 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಸಾಧ್ಯವಾಗಲಿದೆ ಎಂದು ತಿಳಿಸಿದ್ದಾರೆ.