ಬೆಂಗಳೂರು: ರಾಜ್ಯದಲ್ಲಿ ಎಸ್ಸಿ – ಎಸ್ಟಿ ವರ್ಗಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕರ್ನಾಟಕ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳು ಮತ್ತು ಸರ್ಕಾರದ ಅಧೀನ ಸೇವೆಗಳಲ್ಲಿನ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ಕಾಯ್ದೆ-2022 ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ಸಂಬಂಧ ಕೋರ್ಟ್ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಅಲ್ಲದೇ, ಈ ಕಾಯಿದೆ ಆಧರಿಸಿ ಬಿಬಿಎಂಪಿಯಲ್ಲಿನ 92 ಸಹಾಯಕ ಸಿವಿಲ್ ಇಂಜಿನಿಯರ್‌ಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗ 2024ರ ಜುಲೈ 13ರಂದು ಹೊರಡಿಸಿದ ನೇಮಕಾತಿ ಅಧಿಸೂಚನೆಯಂತೆ ನೇಮಕ ಪ್ರಕ್ರಿಯೆ ಮುಂದುವರೆಸಬಹುದು. ಆದರೆ, ನ್ಯಾಯಾಲಯದ ಅನುಮತಿಯಿಲ್ಲದೇ ನೇಮಕಾತಿಯ ಅಂತಿಮ ಫಲಿತಾಂಶ ಪ್ರಕಟಿಸುವಂತಿಲ್ಲ ಎಂದ ಸ್ಪಷ್ಟಪಡಿಸಿದೆ.
ಸಹಾಯಕ ಸಿವಿಲ್ ಎಜಿನಿಯರ್ ಹುದ್ದೆಗೆ ಅರ್ಹರಾಗಿರುವ ಬಿ.ಇ ಸಿವಿಲ್ ಪದವೀಧರರಾದ ತುಮಕೂರು ಜಿಲ್ಲೆಯ ಹೆಚ್.ಆರ್. ಸಾಗರ್, ಮೈಸೂರಿನ ಡಿ. ಪ್ರಜ್ವಲ್ ಕುಮಾರ್ ಮತ್ತು ಜಿ.ಎಂ. ಪುರುಷೋತ್ತಮಗೌಡ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೆಚ್.ಟಿ. ನರೇಂದ್ರಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.
ಅಲ್ಲದೆ, ಅರ್ಜಿಯ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಪ್ರಧಾನ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಮತ್ತು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.