ಹಾಸನ: ಮೊಸಳೆ ಹೊಸಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಗಣೇಶ ನಿಮಜ್ಜನ ಮೆರವಣಿಗೆಯ ವೇಳೆ ಸಂಭವಿಸಿದ ಭೀಕರ ಅಪಘಾತದಲ್ಲಿನ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿದೆ. ಗಂಭೀರವಾಗಿ ಗಾಯಗೊಂಡು ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿವಯ್ಯನ ಕೊಪ್ಪಲು ಗ್ರಾಮದ ಚಂದನ್ (26) ಇಂದು ಸಾವನ್ನಪ್ಪಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ ಏರಿದೆ. ಹಲವು ಗಾಯಾಳುಗಳು ಇನ್ನೂ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿಯ ಕುರಿತು ವೈದ್ಯರು ನಿಗಾ ವಹಿಸಿದ್ದಾರೆ.
ದೇವೇಗೌಡರಿಂದ ಪರಿಹಾರ ಘೋಷಣೆ: ಇನ್ನು ಈ ಮಧ್ಯೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಹಾಸನದ ಹಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿದರು.
ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಜೆಡಿಎಸ್ ಪಕ್ಷದ ವತಿಯಿಂದ ತಲಾ 1 ಲಕ್ಷ ರೂ., ಗಂಭೀರವಾಗಿ ಗಾಯಗೊಂಡವರಿಗೆ 25 ಸಾವಿರ ರೂ., ಅಲ್ಪ ಪ್ರಮಾಣದಲ್ಲಿ ಗಾಯಗೊಂಡವರಿಗೆ 20 ಸಾವಿರ ರೂ., ಚಿಕ್ಕಪುಟ್ಟ ಗಾಯಾಳುಗಳಿಗೆ ತಲಾ 15 ಸಾವಿರ ರೂ. ಪರಿಹಾರ ನೀಡುವುದಾಗಿ ದೇವೇಗೌಡರು ಘೋಷಿಸಿದರು.
ಇದೇ ವೇಳೆ ಮಾತನಾಡಿದ ದೇವೇಗೌಡರು, ಸಂತ್ರಸ್ತರಿಗೆ ಸರ್ಕಾರ ಪರಿಹಾರದ ಮೊತ್ತವನ್ನು ಹೆಚ್ಚಿಸಬೇಕು. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡುತ್ತೇನೆ ಎಂದರು. ಅದೇ ರೀತಿ ಘಟನಾ ಸ್ಥಳಕ್ಕೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಭೇಟಿ ನೀಡಿ ಸಾಂತ್ವನ ಹೇಳಿದರು. ‘
ಇಂತಹ ಘಟನೆ ನಡೆಯಬಾರದಿತ್ತು. ಇಡೀ ರಾಜ್ಯದ ಜನ ದಿಗ್ಭ್ರಾಂತರಾಗಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೂಡಲೇ ಘಟನೆಗೆ ಸ್ಪಂದಿಸಿವೆ.
ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ್ದಾರೆ. ಮೃತಪಟ್ಟವರಲ್ಲಿ ಯುವಕರೇ ಹೆಚ್ಚಿದ್ದಾರೆ. ಅವರ ಕುಟುಂಬಗಳು ಬಡತನದಲ್ಲಿವೆ. ನಾನು ಪರಿಹಾರ ವಿಚಾರದಲ್ಲಿ ರಾಜಕೀಯ ಮಾಡಲ್ಲ. ಇಲ್ಲಿಗೆ ರಾಜಕೀಯ ಮಾಡಲು ಬಂದಿಲ್ಲ. ನಾನು ರಾಜ್ಯ ಸರ್ಕಾರದ ಜೊತೆ ಮಾತನಾಡುತ್ತೇನೆ’ ಎಂದರು.
Laxmi News 24×7