ಹೊಸಕೋಟೆ: ಸಾಲಬಾಧೆಯಿಂದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಮೂವರು ಸಾವನ್ನಪ್ಪಿದ್ದಾರೆ. ಅದೃಷ್ಟವಶಾತ್ ಓರ್ವ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೊಸಕೋಟೆ ತಾಲೂಕಿನ ಗೊಣಕನಹಳ್ಳಿ ಗ್ರಾಮದಲ್ಲಿ ಭಾನುವಾರ ಈ ಘಟನೆ ನಡೆದಿದೆ.
ಸಾಲಬಾಧೆಯಿಂದ ಹೆದರಿ ದಂಪತಿಯು ಇಬ್ಬರು ಮಕ್ಕಳನ್ನು ಸಾಯಿಸಿ ತಾವೂ ಆತ್ಮಹತ್ಯೆಯ ನಿರ್ಧಾರ ಮಾಡಿದ್ದರು. ಅಂತೆಯೇ ಇಬ್ಬರು ಮಕ್ಕಳನ್ನು ಸಾಯಿಸಿ ತಾವೂ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಪತಿ, ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಮಹಿಳೆ ಬದುಕುಳಿದಿದ್ದಾರೆ.
ಶಿವು (32), ಮಗಳು ಚಂದ್ರಕಳಾ (11), ಮಗ ಉದಯ್ ಸೂರ್ಯ (07) ಮೃತರಾಗಿದ್ದಾರೆ. ಶಿವು ಪತ್ನಿ ಮಂಜುಳಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಹಿಳೆಗೆ ಹೊಸಕೋಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ಸಂಬಂಧ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವು ಅಪಘಾತದಲ್ಲಿ ಗಾಯಗೊಂಡಿದ್ದರು, ಅವರ ಚಿಕಿತ್ಸೆಗಾಗಿ ಸಾಲ ಮಾಡಿಕೊಂಡಿದ್ದರು. ಸಾಲ ಹೆಚ್ಚಾಗಿ ಸಾಲಬಾಧೆ ತಾಳಲಾರದೆ ಆತ್ಮಹತ್ಯೆಗೆ ನಿರ್ಧಾರ ಮಾಡಿದ್ದಾರೆ. ನಾವು ಸತ್ತರೆ ಮಕ್ಕಳು ತಬ್ಬಲಿಗಳಾಗುತ್ತಾರೆ ಅಂತ ಮಕ್ಕಳನ್ನು ಸಾಯಿಸುವ ನಿರ್ಧಾರ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.