ಬೆಂಗಳೂರು: ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಅವರನ್ನು ಅಹ್ವಾನಿಸುವುದನ್ನು ಖಂಡಿಸುವ ಭರದಲ್ಲಿ ದಲಿತ ಮಹಿಳೆಗೆ ಅವಮಾನ ಮಾಡಿದ್ದ ಆರೋಪದಲ್ಲಿ ಬಿಜೆಪಿಯ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ನಿರ್ದೇಶನ ನೀಡಿದೆ. ಜೊತೆಗೆ ಈ ಕುರಿತು ತನಿಖೆಗೆ ಸಹಕರಿಸಲು ಸೂಚನೆ ನೀಡಿದೆ.
ಪ್ರಕರಣ ಸಂಬಂಧ ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ದಲಿತ ಮುಖಂಡ ಬಸವರಾಜ ಪೂಜಾರ ಎಂಬುವರು ದಾಖಲಿಸಿದ್ದ ಪ್ರಕರಣದ ರದ್ದುಕೋರಿ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ.ಅರುಣ್ ಅವರಿದ್ದ ನ್ಯಾಯಪೀಠ ಈ ಸೂಚನೆ ನೀಡಿದೆ.
ಇದೇ ವೇಳೆ ಒಂದು ಸಮುದಾಯವನ್ನು ಓಲೈಸಲು ಪ್ರಯತ್ನ ಮಾಡುವುದರಿಂದಲೇ ಇಂತಹ ಘಟನೆಗಳು ನಡೆಯುತ್ತವೆ. ಭಾರತೀಯರು ಭಾರತೀಯರಾಗಿ ನೋಡಬೇಕು. ಜಾತಿ, ಧರ್ಮದ ಮೇಲೆ ಗುರುತಿಸಬಾರದು ಎಂದು ಪೀಠ ಮೌಖಿಕವಾಗಿ ತಿಳಿಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಯತ್ನಾಳ್ ಅವರು ನೀಡಿರುವ ಹೇಳಿಕೆಯನ್ನು ತಿರುಚಲಾಗಿದೆ. ತಪ್ಪಾಗಿ ಭಾವಿಸಿ ಪ್ರಕರಣ ದಾಖಲಿಸಲಾಗಿದೆ. ಆದ್ದರಿಂದ ಎಫ್ಐಆರ್ ರದ್ದು ಪಡಿಸಬೇಕು ಎಂದು ಕೋರಿದರು.
ಇದಕ್ಕೆ ಆಕ್ಷೇಪಿಸಿದ ಸರ್ಕಾರಿ ವಕೀಲರು, ಅರ್ಜಿದಾರರು ಒಂದು ಸಮುದಾಯವನ್ನು ಟೀಕಿಸುವ ಭರದಲ್ಲಿ ದಲಿತ ಮಹಿಳೆಗೆ ಅವಮಾನಿಸಿದ್ದಾರೆ. ಅವರ ವಿರುದ್ಧ ತನಿಖೆ ನಡೆಸಬೇಕು. ಈ ರೀತಿಯ ಹೇಳಿಕೆಗಳನ್ನು ನೀಡದಂತೆ ಮಾಡಬೇಕಾಗಿದೆ ಎಂದು ಪೀಠಕ್ಕೆ ಮನವಿ ಮಾಡಿದರು. ವಾದ ಆಲಿಸಿದ ನ್ಯಾಯಪೀಠ, ಯತ್ನಾಳ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಸೂಚನೆ ನೀಡಿ ವಿಚಾರಣೆಯನ್ನು ಮುಂದೂಡಿತು.