ನವದೆಹಲಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ವಾಪಸ್ ಪಡೆದ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠದ ಮುಂದೆ ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ಸುಪ್ರೀಂಕೋರ್ಟ್ ಸೋಮವಾರ ತಿಳಿಸಿದೆ.
ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಅವರು ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದಾರೆ. ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ, ನ್ಯಾಯಮೂರ್ತಿ ಕೆ.ವಿನೋದ್ ಚಂದ್ರನ್ ಅವರ ನೇತೃತ್ವದ ಪೀಠವು ಇಂದು ಇವುಗಳ ವಿಚಾರಣೆ ನಡೆಸಿತು.
ಇದೇ ಪ್ರಕರಣವನ್ನು ಈ ಹಿಂದೆ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ನೇತೃತ್ವದ ಪೀಠವು ವಿಚಾರಣೆ ನಡೆಸಿತ್ತು. ಈಗ ಅವರ ಪೀಠಕ್ಕೆ ವಿಚಾರಣೆ ನಡೆಸುವಂತೆ ಅರ್ಜಿಗಳನ್ನು ಪಟ್ಟಿ ಮಾಡಲಾಗುವುದು ಎಂದು ಸುಪ್ರೀಂಕೋರ್ಟ್ ತಿಳಿಸಿತು.
ಈ ವೇಳೆ ಡಿ.ಕೆ.ಶಿವಕುಮಾರ್ ಅವರ ಪರ ಹಿರಿಯ ವಕೀಲರಾದ ಅಭಿಷೇಕ್ ಎಂ. ಸಿಂಘ್ವಿ ಅವರು, ರಾಜಕೀಯ ವಿಷಯಗಳು ಕೋರ್ಟಿನ ಆಚೆಗೆ ಇತ್ಯರ್ಥಪಡಿಸಿಕೊಳ್ಳಬೇಕು ಎಂದು ಎಂದು ಸಿಜೆಐ ಈ ಹಿಂದೆ ಹೇಳಿದ್ದರು ಎಂದು ಪೀಠದ ಗಮನಕ್ಕೆ ತಂದರು.
ಆದರೆ, ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠವು ಅರ್ಜಿಗಳನ್ನು ವಿಚಾರಣೆ ನಡೆಸುವುದು ನ್ಯಾಯದ ದೃಷ್ಟಿಯಿಂದ ಒಳಿತು ಎಂದು ಸಿಜೆಐ ಗವಾಯಿ ನೇತೃತ್ವದ ಪೀಠ ಅಭಿಪ್ರಾಯಪಟ್ಟಿತು. ಜೊತೆಗೆ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಈ ಹಿಂದೆಯೂ ಈ ವಿಷಯವನ್ನು ವಿಚಾರಣೆ ನಡೆಸಿದ್ದರು ಎಂದಿತು.
Laxmi News 24×7