ಬೆಂಗಳೂರು: ವಿಶೇಷಚೇತನರ ಕೋಟಾದಡಿ ನಕಲಿ ಪ್ರಮಾಣಪತ್ರಗಳನ್ನು ಸೃಷ್ಟಿಸಿ, ವೈದ್ಯಕೀಯ ವಿದ್ಯಾರ್ಥಿಗಳಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸುತ್ತಿದ್ದ ಇಬ್ಬರು ಸರ್ಕಾರಿ ವೈದ್ಯರು ಸೇರಿ ಐವರನ್ನು ಮಲ್ಲೇಶ್ವರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಮುಖ್ಯ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ್ ಅವರು ನೀಡಿದ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಆರೋಪಿಗಳಾದ ಶಿಕ್ಷಕ ಭರಮಪ್ಪ, ವಿಜಯನಗರದ ಹೊಸಪೇಟೆಯ ಸರ್ಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಹರಿಪ್ರಸಾದ್, ಮಕ್ಕಳ ತಜ್ಞ ಡಾ.ಶ್ರೀನಿವಾಸ್, ಕೊಪ್ಪಳದ ಕುಕನೂರು ತಾಲೂಕಿನ ಮಂಗಳೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಾಯಕ ಸುಧಾಕರ್, ಪ್ರಥಮ ದರ್ಜೆ ಸಹಾಯಕ ಉಮೇಶ್ ಚೌಧರಿ ಎಂಬವರನ್ನು ಬಂಧಿಸಿದ್ದಾರೆ.
ಪ್ರಸ್ತಕ ಶೈಕ್ಷಣಿಕ ಸಾಲಿನ ಯುಜಿ ಸಿಇಟಿ ಹಾಗೂ ಯುಜಿ ನೀಟ್ಗಳಲ್ಲಿ ಮೆಡಿಕಲ್ ಸೀಟು ಕೋರಿ 21 ಅಭ್ಯರ್ಥಿಗಳು ತಮಗೆ ಶ್ರವಣದೋಷವಿದೆ ಎಂದು ಹೇಳಿ ವಿಶೇಷಚೇತನರ ಕೋಟಾದಡಿ ಪ್ರಮಾಣಪತ್ರ ಸಲ್ಲಿಸಿದ್ದರು. ಪರಿಶೀಲನೆಯ ವೇಳೆ ಅಭ್ಯರ್ಥಿಗಳು ಸಲ್ಲಿಸಿದ ಪ್ರಮಾಣಪತ್ರ ನಕಲಿ ಎಂದು ಕಂಡುಬಂದ ಹಿನ್ನೆಲೆಯಲ್ಲಿ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕೆಇಎ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದರು.
ಪ್ರಮುಖ ಆರೋಪಿ ಭರಮಪ್ಪ, ಮೂಲತಃ ಚಿತ್ರದುರ್ಗದ. ಬೆಂಗಳೂರಿನ ನಂದಿನಿ ಲೇಔಟ್ನ ಶಾಲೆಯೊಂದರಲ್ಲಿ ಶಿಕ್ಷಕನಾಗಿದ್ದ. ಅಕ್ರಮವಾಗಿ ಹಣ ಸಂಪಾದಿಸಲು ವಿಶೇಷಚೇತನ ಕೋಟಾದಡಿ ವೈದ್ಯಕೀಯ ಸೀಟು ಕೊಡಿಸುವುದಾಗಿ ಅಭ್ಯರ್ಥಿಗಳನ್ನು ನಂಬಿಸಿ ಅವರಿಂದ 5 ಲಕ್ಷ ರೂ ಹಣ ಪಡೆಯುತ್ತಿದ್ದ. ಬಳಿಕ ತನ್ನ ಸಂಪರ್ಕದಲ್ಲಿದ್ದ ಇತರೆ ಆರೋಪಿಗಳೊಂದಿಗೆ ಸೇರಿಕೊಂಡು ನಕಲಿ ಪ್ರಮಾಣಪತ್ರಗಳನ್ನು ಸೃಷ್ಟಿಸುತ್ತಿದ್ದ. ಈ ವರ್ಷ 21 ಮಂದಿ ಅಭ್ಯರ್ಥಿಗಳಿಂದ ಲಕ್ಷಾಂತರ ಹಣ ಪಡೆದು ನಕಲಿ ದಾಖಲಾತಿ ಸೃಷ್ಟಿಸಿದ್ದ ಎಂದು ಪೊಲೀಸರು ತಿಳಿಸಿದ್ಧಾರೆ.
Laxmi News 24×7