ಭೀಮಾನದಿಯ ಪ್ರವಾಹ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ; ಸಚಿವರ ಸಾಥ್
ಭೀಮಾನದಿ ತೀರದಲ್ಲಿ ಸುರಿದ ಭಾರಿ ಮಳೆಯಿಂದಾದ ಪ್ರವಾಹದ ಪರಿಣಾಮವಾಗಿ ರಾಜ್ಯದ ಕಲಬುರಗಿ, ಬೀದರ್, ಯಾದಗಿರಿ, ವಿಜಯಪುರ ಜಿಲ್ಲೆಗಳು ತತ್ತರಿಸಿ ಹೋಗಿದೆ.
ಲಕ್ಷಾಂತರ ಎಕರೆ ಪ್ರದೇಶದಲ್ಲಿ ಬೆಳೆದ ಬೆಳೆ ಹಾನಿಯಾಗಿದ್ದು, ರೈತರು ತಲ್ಲಣಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕ ಸಚಿವರು, ಜನಪ್ರತಿನಿಧಿಗಳು ಮುಖ್ಯಮಂತ್ರಿಗಳಿಗೆ ಸಮೀಕ್ಷೆ ನಡೆಸಿ, ಪರಿಹಾರ ಕಲ್ಪಿಸಿಕೊಡುವಂತೆ ಸಲ್ಲಿಸಿದ್ದ ಮನವಿಗೆ ಸ್ಪಂದಿಸಿದ್ದಾರೆ.
ಇಂದು ಸಿದ್ದರಾಮಯ್ಯ, ಸಚಿವ ಸಂಪುಟದ ಸಹೋದ್ಯೋಗಿಗಳಾದ ಕೃಷ್ಣಭೈರೇಗೌಡರು, ಪ್ರಿಯಾಂಕ್ ಖರ್ಗೆ ಅವರೊಂದಿಗೆ ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದರು.
ಸಮೀಕ್ಷೆಗೂ ಮುನ್ನ ಭೀಮಾ ತೀರದ ಪ್ರದೇಶಗಳಲ್ಲಿ ಉಂಟಾಗಿರುವ ಹಾನಿಯ ಬಗ್ಗೆ ಕಲಬುರಗಿ ವಿಮಾನ ನಿಲ್ದಾಣದಲ್ಲಿಯೇ ಕಲಬುರಗಿ, ಬೀದರ್, ಯಾದಗಿರಿ ಹಾಗೂ ವಿಜಯಪುರ ಜಿಲ್ಲಾ ಅಧಿಕಾರಿಗಳು ಮತ್ತು ಉಸ್ತುವಾರಿ ಕಾರ್ಯದರ್ಶಿಗಳ ಜೊತೆ ಪ್ರಾಥಮಿಕ ಸಭೆ ನಡೆಸಿ, ವಿವರವಾದ ಮಾಹಿತಿ ಪಡೆದರು.
ಮುಖ್ಯಮಂತ್ರಿಗಳು ವಿಜಯಪುರ ಜಿಲ್ಲೆ ಸೇರಿದಂತೆ ಭೀಮಾ ತೀರದ ಎಲ್ಲ ಜಿಲ್ಲೆಗಳ ಸಂತ್ರಸ್ತ ರೈತರಿಗೆ ಸೂಕ್ತ ಪರಿಹಾರ ಕಲ್ಪಿಸಿಕೊಡಲಿದ್ದಾರೆಯೇ ಎಂದು ಕಾದು ನೋಡಬೇಕಿದೆ.
Laxmi News 24×7