ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ಅವರು ಜೈಲಿನಲ್ಲಿ ತಮಗೆ ಕನಿಷ್ಠ ಸೌಲಭ್ಯ ನೀಡುತ್ತಿಲ್ಲವೆಂದು ಆರೋಪಿಸಿ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿರುವ ನ್ಯಾಯಾಲಯ, ಕಾರಾಗೃಹಕ್ಕೆ ಭೇಟಿ ನೀಡಿ ಪರಿಶೀಲಿಸುವಂತೆ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿಗೆ ಶುಕ್ರವಾರ ಸೂಚಿಸಿದೆ.
ನಟ ದರ್ಶನ್ ಅವರ ಅರ್ಜಿ ವಿಚಾರಣೆ ನಡೆಸಿರುವ 57ನೇ ಸೆಷನ್ಸ್ ನ್ಯಾಯಾಲಯ ಬೆಂಗಳೂರು ನಗರ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗೆ ಸೂಚಿಸಿದ್ದು, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ ಪರಿಶೀಲಿಸುವಂತೆ ನಿರ್ದೇಶನ ನೀಡಿದೆ. ನ್ಯಾಯಾಲಯದ ಸೂಚನೆಯಂತೆ ದರ್ಶನ್ ಅವರಿಗೆ ಕನಿಷ್ಠ ಸವಲತ್ತು ನೀಡಲಾಗುತ್ತಿದೆಯೇ? ಜೈಲು ಕೈಪಿಡಿಯಂತೆ ಸವಲತ್ತು ನೀಡಲಾಗಿದೆಯೇ ಎಂಬುದನ್ನು ಸಹ ಪರಿಶೀಲಿಸಬೇಕು ಎಂದಿರುವ ನ್ಯಾಯಾಲಯ ಅಕ್ಟೋಬರ್ 18 ರೊಳಗೆ ಸಮಗ್ರ ವರದಿ ನೀಡುವಂತೆ ಸೂಚಿಸಿದೆ.
ದರ್ಶನ್‌ಗೆ ಜೈಲಿನಲ್ಲಿ ಕನಿಷ್ಠ ಸೌಲಭ್ಯಗಳನ್ನು ನಿರಾಕರಿಸಲಾಗಿದೆ ಎಂದು ದರ್ಶನ್ ಅವರ ಪರ ವಕೀಲರು ಆರೋಪಿಸಿದ್ದರು. ಈ ಸಂಬಂಧ ನ್ಯಾಯಾಧೀಶರೇ ಪರಿಶೀಲಿಸಬೇಕು ಎಂದು ಮನವಿ ಮಾಡಿದ್ದರು. ಅರ್ಜಿ ವಿಚಾರಣೆ ವೇಳೆ, ನ್ಯಾಯಾಲಯದ ಆದೇಶದಂತೆ ದರ್ಶನ್ ಅವರಿಗೆ ಸೌಲಭ್ಯಗಳನ್ನು ನೀಡಲಾಗಿದೆ ಎಂದು ಜೈಲು ಅಧಿಕಾರಿಗಳ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಪ್ರಸನ್ನ ಕುಮಾರ್ ಅವರು ವಾದ ಮಂಡಿಸಿದ್ದರು.
ಈ ಹಿಂದೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ನಿರಾಕರಿಸಿದ್ದ ನ್ಯಾಯಾಲಯ, ಹೆಚ್ಚುವರಿ ಹಾಸಿಗೆ, ದಿಂಬು ನೀಡುವಂತೆ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ, ಜೈಲಿನ ಕೈಪಿಡಿಯಲ್ಲಿರುವ ನಿಯಮಗಳನ್ನು ಅನುಸರಿಸುವಂತೆ ಸೂಚನೆ ನೀಡಿತ್ತು.
Laxmi News 24×7