ಬೆಂಗಳೂರು: ಬೆಂಬಲ ಬೆಲೆಯಲ್ಲಿ ಅಕ್ಟೋಬರ್ 28ರಿಂದ (ಮಂಗಳವಾರ) ಸೋಯಾಬಿನ್, ಸೂರ್ಯಕಾಂತಿ ಮತ್ತು ಹೆಸರುಕಾಳು ಖರೀದಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ರೈತರಿಗೆ ಸಿಹಿ ಸುದ್ದಿಯನ್ನು ತಿಳಿಸಿದ್ದಾರೆ.
ಎಲ್ಲೆಡೆ ಈಗಾಗಲೇ ಖರೀದಿ ಕೇಂದ್ರಗಳನ್ನು ತೆರೆದು ನೋಂದಣಿ ಪ್ರಕ್ರಿಯೆ ಆರಂಭಿಸಲಾಗಿದೆ. ಸೋಯಾಬಿನ್ ಖರೀದಿಗೆ ಒಟ್ಟು 206 ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, 19,325 ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.
ಬೀದರ್ ಜಿಲ್ಲೆಯಲ್ಲಿ 116 ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದ್ದು, 13,033 ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ 3,047, ಧಾರವಾಡ ಜಿಲ್ಲೆಯಲ್ಲಿ 2,164 ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಹೆಸರುಕಾಳು ಖರೀದಿಗೆ ಒಟ್ಟು 211 ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದ್ದು, 16,578 ರೈತರು ನೋಂದಣಿ ಮಾಡಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಅತಿ ಹೆಚ್ಚು (6362) ರೈತರು ನೋಂದಣಿ ಮಾಡಿಸಿದ್ದಾರೆ.
ಸೂರ್ಯಕಾಂತಿ ಖರೀದಿಗೆ 120 ಖರೀದಿ ಕೇಂದ್ರಗಳನ್ನು ಆರಂಭಿಸಿದ್ದು, 5,341 ರೈತರು ನೋಂದಣಿ ಮಾಡಿಸಿದ್ದಾರೆ. ಉದ್ದಿನಕಾಳು ಖರೀದಿಗೆ 134 ಖರೀದಿ ಕೇಂದ್ರಗಳನ್ನು ಆರಂಭಿಸಿದ್ದು, 5,274 ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಇತ್ತೀಚಿಗಷ್ಟೇ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಗಳಿಗೆ ಸೂಚಿಸಿದ್ದ ಸಚಿವರು: ಬೆಂಬಲ ಬೆಲೆಯಲ್ಲಿ ಸೋಯಾಬಿನ್ ಮತ್ತು ಶೇಂಗಾ ಖರೀದಿ ಮಾಡಲು ಖರೀದಿ ಕೇಂದ್ರ ಆರಂಭಕ್ಕೆ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ಹಾಗೂ ನೋಂದಣಿ ಮತ್ತು ಖರೀದಿ ಪ್ರಕ್ರಿಯೆಯನ್ನು ಏಕಕಾಲಕ್ಕೆ ಆರಂಭಿಸುವಂತೆ ಸಚಿವ ಶಿವಾನಂದ ಪಾಟೀಲ್ ಅವರು ಜಿಲ್ಲಾ ಟಾಸ್ಕ್‌ಪೋರ್ಸ್ ಸಮಿತಿಗಳಿಗೆ ಸೂಚಿಸಿದ್ದರು.
ಸೋಯಾಬಿನ್‌ಗೆ ಕ್ವಿಂಟಾಲ್‌ಗೆ 5,328 ರೂ. ಹಾಗೂ ಶೇಂಗಾಗೆ 7,623 ರೂ. ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ಬೀದರ್, ಬೆಳಗಾವಿ, ಧಾರವಾಡ, ಹಾವೇರಿ, ಯಾದಗಿರಿ, ಕಲಬುರಗಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಸೋಯಾಬಿನ್ ಹಾಗೂ ಕೊಪ್ಪಳ, ಧಾರವಾಡ, ಹಾವೇರಿ, ವಿಜಯನಗರ, ಬಳ್ಳಾರಿ, ಚಿತ್ರದುರ್ಗ, ಗದಗ, ಬಾಗಲಕೋಟೆ, ದಾವಣಗೆರೆ, ರಾಯಚೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಶೇಂಗಾ ಖರೀದಿ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದರು.
ನಾಫೆಡ್, ಎನ್‌ಸಿಸಿಎಫ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳವನ್ನು ಖರೀದಿಗೆ ಏಜನ್ಸಿಯಾಗಿ ನೇಮಕ ಮಾಡಲಾಗಿದೆ. ನೋಂದಣಿಗೆ 80 ದಿನ ಹಾಗೂ ಖರೀದಿಗೆ 90 ದಿನ ನಿಗದಿಪಡಿಸಲಾಗಿದೆ ಎಂದು ಅವರು ಹೇಳಿದ್ದರು.
Laxmi News 24×7