Breaking News

ಕಾಂಗ್ರೆಸ್ ಹಿರಿಯ ಶಾಸಕ ಹೆಚ್.ವೈ. ಮೇಟಿ ನಿಧನ

Spread the love

ಬಾಗಲಕೋಟೆ/ಬೆಂಗಳೂರು: ಕಾಂಗ್ರೆಸ್ ಹಿರಿಯ ಶಾಸಕ, ಮಾಜಿ ಸಚಿವ ಹೆಚ್.ವೈ. ಮೇಟಿ (79) ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರು ಇಂದು ಆಸ್ಪತ್ರೆಯಲ್ಲೇ ಅಸುನೀಗಿದ್ದಾರೆ.‌

ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಮೇಟಿ ಕಳೆದ ಒಂದು ವಾರದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಂಗಳವಾರ ಆರೋಗ್ಯ ಸ್ಥಿತಿ ಬಿಗಡಾಯಿಸಿದ ಕಾರಣ ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಹೆಚ್.ವೈ. ಮೇಟಿ ಮೃತಪಟ್ಟಿದ್ದಾರೆ. ಇತ್ತೀಚೆಗಷ್ಟೇ ಮೇಟಿ ಅವರನ್ನು ಸಿಎಂ ಸಿದ್ದರಾಮಯ್ಯ ಆಸ್ಪತ್ರೆಯಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು. ಇದೀಗ ಮೇಟಿ ಕೊನೆಯುಸಿರೆಳೆದಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ ಕಾಂಗ್ರೆಸ್ ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ

ಎಕ್ಸ್ ಪೋಸ್ಟ್ ಮೂಲಕ ಸಂತಾಪ ಸೂಚಿಸಿರುವ ಸಿಎಂ ಸಿದ್ದರಾಮಯ್ಯ, ಮಾಜಿ ಸಚಿವರು, ಉತ್ತರ ಕರ್ನಾಟಕ ಭಾಗದ ಹಿರಿಯ ನಾಯಕರು, ಹಾಲಿ ಶಾಸಕರೂ ಆದ ಹೆಚ್.ವೈ. ಮೇಟಿ ಅವರ ನಿಧನವಾರ್ತೆ ನೋವುಂಟುಮಾಡಿದೆ. ಕಳೆದ ಗುರುವಾರವಷ್ಟೇ ಆಸ್ಪತ್ರೆಗೆ ಭೇಟಿ ನೀಡಿ, ಅವರ ಆರೋಗ್ಯ ವಿಚಾರಿಸಿದ್ದೆ. ಈ ವೇಳೆ ಗುಣಮುಖರಾಗಿ ಮತ್ತೆ ನಮ್ಮನ್ನು ಕೂಡಿಕೊಳ್ಳುತ್ತಾರೆ ಎನ್ನುವ ಭರವಸೆಯಿತ್ತು. ನನ್ನ ಭರವಸೆ, ಹಾರೈಕೆಗಳೆರೆಡೂ ಹುಸಿಯಾಗಿದೆ. ಬಹುದೀರ್ಘ ಕಾಲ ಸಾರ್ವಜನಿಕ ಬದುಕಿನಲ್ಲಿದ್ದ ಮೇಟಿಯವರು ಜನಪರವಾಗಿ, ಕ್ಷೇತ್ರದ ಅಭಿವೃದ್ಧಿಯ ಬಗ್ಗೆಯಷ್ಟೇ ಚಿಂತಿಸುತ್ತಿದ್ದ ಮುತ್ಸದ್ದಿ ನಾಯಕರು. ಅವರ ನಿಧನದಿಂದ ಸಮಾಜ ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ. ಮೇಟಿಯವರ ಕುಟುಂಬಸ್ಥರು ಹಾಗೂ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸಿದ್ದಾರೆ.

ಗುಳೇದಗುಡ್ಡ ಕ್ಷೇತ್ರದಿಂದ ಎರಡು ಬಾರಿ, ಬಾಗಲಕೋಟೆ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿದ್ದ ಹೆಚ್.ವೈ. ಮೇಟಿ ಬಾಗಲಕೋಟೆ ಲೋಕಸಭೆ ಕ್ಷೇತ್ರದಿಂದ ಸಂಸದರಾಗಿಯೂ ಕಾರ್ಯನಿರ್ವಹಿಸಿದ್ದರು‌. ಹೆಚ್.ವೈ. ಮೇಟಿ ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಹುಲ್ಲಪ್ಪ ಯಮನಪ್ಪ ಮೇಟಿ ಬಾಗಲಕೋಟೆ ಕಾಂಗ್ರೆಸ್ ಹಾಲಿ ಶಾಸಕರಾಗಿದ್ದಾರೆ. ಬಾಗಲಕೋಟೆ ಜಿಲ್ಲೆಯ ತಿಮ್ಮಾಪುರದಲ್ಲಿ 9-10-1946 ರಲ್ಲಿ ಜನಿಸಿದ್ದರು.‌


Spread the love

About Laxminews 24x7

Check Also

25 ಸಾವಿರ ಲಂಚ ಪಡೆದು ರೆಡ್ ಹ್ಯಾಂಡಾಗಿ ಲೋಕಾ ಬಲೆಗೆ  ಸಿಕ್ಕಿಬಿದ್ದ ಪಿಡಿಓ

Spread the loveಬಾಕಿ ಸಂಬಳ ನೀಡಲು ಲಂಚ ಪಡೆದ ಪಿಡಿಓ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಹುಣಸೂರು ತಾಲೂಕು ಮುಳ್ಳೂರು ಗ್ರಾಮ ಪಂಚಾಯ್ತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ