ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಕೈದಿಗಳಿಗೆ ವಿಶೇಷ ಆತಿಥ್ಯ ಖಂಡಿಸಿ ಇಂದು ಸಿಎಂ ಮನೆಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದರು.
ಬಿಜೆಪಿ ಯುವ ಮೋರ್ಚಾ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಪ್ರತಿಪಕ್ಷ ನಾಯಕ ಆರ್.ಅಶೋಕ್, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕರಾದ ಗೋಪಾಲಯ್ಯ, ಅಶ್ವತ್ಥ ನಾರಾಯಣ್, ಪರಿಷತ್ ಸದಸ್ಯ ಸಿ.ಟಿ.ರವಿ ಸೇರಿ ಶಾಸಕರು, ಮುಖಂಡರು ಪಾಲ್ಗೊಂಡಿದ್ದರು.
ಉಗ್ರರಿಗೆ, ರೇಪಿಸ್ಟ್ಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಪ್ಲಕಾರ್ಡ್‌ಗಳನ್ನು ಹಿಡಿದು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಪರಮೇಶ್ವರ್ ವಿರುದ್ಧ ಘೋಷಣೆಗಳನ್ನು ಕೂಗಿದರು.

ಸಿಎಂ, ಗೃಹ ಸಚಿವರು ರಾಜೀನಾಮೆ ನೀಡಲಿ: ಇದೇ ವೇಳೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವರು ರಾಜೀನಾಮೆ ಕೊಡಬೇಕು. ಪರಪ್ಪನ ಅಗ್ರಹಾರ ಜೈಲು ಒಂದು ರೀತಿ ನೈಟ್ ಕ್ಲಬ್, ಮನರಂಜನಾ ಕ್ಲಬ್ ಆಗಿ ಪರಿವರ್ತನೆಗೊಂಡಿದೆ. ಭಯೋತ್ಪಾದಕರು, ಐಎಸ್‍ಐ ಏಜೆಂಟರು, ಮುಸ್ಲಿಂ ಮೂಲಭೂತವಾದಿಗಳು ಇವರೆಲ್ಲರಿಗೂ ಜೈಲು ಮನರಂಜನಾ ಕ್ಲಬ್ ಆಗಿದೆ. ಇಂಥ ದೇಶದ್ರೋಹಿಗಳಿಗೆ ಟಿ.ವಿ., ಮೊಬೈಲ್ ಫೋನ್, ಗುಂಡು- ತುಂಡುಗಳ ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು, ಎಲ್ಲವೂ ಸರಾಗವಾಗಿ ನಡೆಯುತ್ತಿದೆ ಎಂದು ಕಿಡಿ ಕಾರಿದರು.
Laxmi News 24×7