ಬೆಳಗಾವಿ ಜಿಲ್ಲೆ, ಕಾಗವಾಡ ತಾಲೂಕಿನ ಬಸವೇಶ್ವರ (ಕೆಂಪವಾಡ) ಹಾಗೂ ರಾಮದುರ್ಗಾ ತಾಲೂಕಿನ ವೀರಭದ್ರೇಶ್ವರ ಮತ್ತು ಸಾಲಾಪುರ ಏತ ನೀರಾವರಿ ಯೋಜನೆಗಳ ಪ್ರಗತಿ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸುವರ್ಣಸೌಧದಲ್ಲಿ ನಡೆಸಿದ ಸಭೆಯ ಮುಖ್ಯಾಂಶಗಳು:

• ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ (ಕಾಗವಾಡ) 22ಬರಪೀಡಿತ ಗ್ರಾಮಗಳ 27,462 ಹೆಕ್ಟೇರ್ ಪ್ರದೇಶಗಳಿಗೆ ನೀರು ಒದಗಿಸುವ ಬಸವೇಶ್ವರ ಏತ ನೀರಾವರಿ ಯೋಜನೆಗೆ 2017ರಲ್ಲಿ ಈ ಹಿಂದೆ ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ಚಾಲನೆ ನೀಡಲಾಗಿತ್ತು.

• ಈ ಯೋಜನೆಗೆ ಇದುವರೆಗೆ ರೂ. 1158 ಕೋಟಿ ವೆಚ್ಚ ಮಾಡಲಾಗಿದ್ದು, ಶೇ.90ರಷ್ಟು ಕಾಮಗಾರಿಗಳು ಪೂರ್ಣಗೊಂಡಿವೆ. ಜೂನ್ ಅಂತ್ಯದವರೆಗೆ ಕಾಮಗಾರಿಯನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು.

• ಯೋಜನೆ ಪೂರ್ಣಗೊಳಿಸಲು 652 ಎಕ್ರೆ ಜಮೀನು ಭೂ ಸ್ವಾಧೀನಪಡಿಸಿಕೊಳ್ಳಬೇಕಾಗಿದ್ದು, ಭೂ ಸ್ವಾಧೀನ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ಯೋಜನೆಯನ್ನು ಪೂರ್ಣಗೊಳಿಸಿ ರೈತರ ಹೊಲಗಳಿಗೆ ನೀರು ಹರಿಸಲು ಅಗತ್ಯವಿರುವ ಅನುದಾನವನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಅವರು ಹೇಳಿದರು.
• ರಾಮದುರ್ಗಾ ತಾಲೂಕು, ಮುಧೋಳ ತಾಲೂಕು ಹಾಗೂ ಬಾದಾಮಿ ತಾಲೂಕಿನ ಒಟ್ಟು 22 ಗ್ರಾಮಗಳ ಬರಪೀಡಿತ ಗ್ರಾಮಗಳಿಗೆ ನೀರು ಪೂರೈಸುವ ಸಾಲಾಪುರ ಏತ ನೀರಾವರಿ ಯೋಜನೆ ಶೇ.80ರಷ್ಟು ಕಾಮಗಾರಿ ಪೂರ್ಣಗೊಂಡಿದ್ದು, ಇದನ್ನು ಪೂರ್ಣಗೊಳಿಸಲು ಅನುದಾನ ಒದಗಿಸಲಾಗುವುದು.

• ಇದೇ ರೀತಿ ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಗಳ ಒಟ್ಟು 34 ಬರಪೀಡಿತ ಗ್ರಾಮಗಳಿಗೆ ನೀರು ಒದಗಿಸುವ ವೀರಭದ್ರೇಶ್ವರ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.
Laxmi News 24×7