ಹಾವೇರಿ: ಹಾನಗಲ್ ಸಾಮೂಹಿಕ ಅತ್ಯಾಚಾರ ಪ್ರಕರಣದ 7 ಮಂದಿ ಆರೋಪಿಗಳನ್ನು ಹಾವೇರಿ ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ. ಆರೋಪಿಗಳನ್ನು ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಸವಣೂರು ಉಪ ವಿಭಾಗಾಧಿಕಾರಿ ಶುಭಂ ಶುಕ್ಲಾ ಆದೇಶ ಹೊರಡಿಸಿದ್ದಾರೆ.
ಪ್ರಕರಣದಲ್ಲಿ, ಅಪ್ತಾಬ್ ಚಂದನಕಟ್ಟಿ, ಮದರ್ ಸಾಬ್ ಮಂಡಕ್ಕಿ, ಮಹ್ಮಮದ್ ಸಾದಿಕ್ ಅಗಸಿಮನಿ, ರಿಯಾಜ್ ಸಾವಿಕೇರಿ, ಸಮಿವುಲ್ಲಾ ಲಾಲನವರ, ಶೋಯಿಬ್ ಮುಲ್ಲಾ ಹಾಗೂ ತೌಸಿಪ್ ಅಹ್ಮದ್ ಚೌಟಿ ಎಂಬವರು ಗಡಿಪಾರಾದವರು ಎಂದು ಗುರುತಿಸಲಾಗಿದೆ. ಗ್ಯಾಂಗ್ ರೇಪ್ ಆರೋಪಿಗಳನ್ನು ಗಡಿಪಾರು ಮಾಡುವಂತೆ ಕೋರಿ ಹಾವೇರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಎಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಉಪ ವಿಭಾಗಾಧಿಕಾರಿ ಶುಭಂ ಶುಕ್ಲಾ ಈ ಆದೇಶ ಹೊರಡಿಸಿದ್ದಾರೆ. ಆರೋಪಿಗಳಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಂಭವ ಇರುವ ಹಿನ್ನೆಲೆಯಲ್ಲಿ, ಒಂದು ವರ್ಷ ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಆದೇಶಿಸಲಾಗಿದೆ. ನ್ಯಾಯಾಲಯಕ್ಕೆ ಹಾಜರಾಗುವ ವೇಳೆಗೆ ಆರೋಪಿಗಳು ಕಡ್ಡಾಯವಾಗಿ ಗಡಿಪಾರು ಕಾನೂನನ್ನು ಪಾಲಿಸಬೇಕಿದೆ. ಈ ಸಂದರ್ಭದಲ್ಲಿ ಮುದ್ದೇಬಿಹಾಳ, ಹುನಗುಂದ, ಗದಗ, ಹುಬ್ಬಳ್ಳಿ ಮಾರ್ಗದ ಮೂಲಕವೇ ಹಾವೇರಿ ಜಿಲ್ಲೆಗೆ ಪ್ರವೇಶಿಸಬೇಕು ಎಂಬ ಷರತ್ತುಗಳನ್ನು ವಿಧಿಸಿ ಸವಣೂರು ಎಸಿ ಆದೇಶಿಸಿದ್ದಾರೆ.
ಪ್ರಕರಣದ ಹಿನ್ನೆಲೆ: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿಆಲೂರು ಸಮೀಪದ ನಾಲ್ಕರ ಕ್ರಾಸ್ ಬಳಿ 2024ರ ಜನವರಿ 8ರಂದು ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಸಂತ್ರಸ್ತೆ ನೀಡಿದ ದೂರಿನ ಆಧಾರದ ಮೇಲೆ ಗ್ಯಾಂಗ್‌ರೇಪ್ ಮಾಡಿರುವ ಬಗ್ಗೆ ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು 19 ಮಂದಿ ಆರೋಪಿಗಳನ್ನು ಬಂಧಿಸಿ, ತನಿಖೆ ನಡೆಸಿದ್ದರು. ಈ ಪೈಕಿ 12 ಆರೋಪಿಗಳು 10 ತಿಂಗಳ ಹಿಂದೆಯೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಉಳಿದ ಏಳು ಆರೋಪಿಗಳ ಜಾಮೀನು ಅರ್ಜಿಯನ್ನು ನ್ಯಾಯಾಲಯ ಹಲವು ಬಾರಿ ತಿರಸ್ಕರಿಸಿತ್ತು.
ಬಳಿಕ, 2025ರ ಮೇ 20ರಂದು ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು. ಈ ವೇಳೆ, ಆರೋಪಿಗಳು ಹಾವೇರಿ ಜಿಲ್ಲಾ ಕಾರಾಗೃಹದಿಂದ ಅಕ್ಕಿಆಲೂರಿನವರೆಗೆ ತೆರೆದ ಜೀಪಿನಲ್ಲಿ ಕೇಕೆ ಹಾಕುತ್ತ ಮೆರವಣಿಗೆ ಮಾಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಸಂಬಂಧ ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು.
ಅಲ್ಲದೇ, ಪ್ರಕರಣದ ಸಾಕ್ಷಿದಾರರಿಗೆ ಜೀವ ಬೆದರಿಕೆ ಒಡ್ಡುವ ರೀತಿ ವರ್ತಿಸಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದರು. ಇದೀಗ ಆರೋಪಿಗಳಿಗೆ ಗಡಿಪಾರು ಶಿಕ್ಷೆ ವಿಧಿಸಿ ಉಪ ವಿಭಾಗಾಧಿಕಾರಿ ಶುಭಂ ಶುಕ್ಲಾ ಆದೇಶ ಹೊರಡಿಸಿದ್ದಾರೆ.
Laxmi News 24×7