ಬೆಂಗಳೂರು: ಕೋಗಿಲು ಬಡಾವಣೆಯ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ನೆಲೆಸಿದ್ದ ನಿವಾಸಿಗಳಿಂದ ಹಣ ಪಡೆದು ಅನಧಿಕೃತವಾಗಿ ನಿವೇಶನ ಹಂಚಿರುವ ಆರೋಪದಡಿ ಇಬ್ಬರು ಆರೋಪಿಗಳನ್ನು ಯಲಹಂಕ ಠಾಣೆ ಪೊಲೀಸರು ಬಂಧಿಸಿದ್ಧಾರೆ.
ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಲಿಮಿಟೆಡ್ (BSWML)ನ ಇಂಜಿನಿಯರ್ ಸಂತೋಷ್ ಕುಮಾರ್ ಎಂಬವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ವಿಜಯ್ ಹಾಗೂ ವಾಸೀಂ ಬೇಗ್ ಎಂಬವರನ್ನು ಬಂಧಿಸಿರುವ ಪೊಲೀಸರು, ನ್ಯಾಯಾಲಯಕ್ಕೆ ಹಾಜರುಪಡಿಸಿ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆಗೊಳಪಡಿಸಿದ್ದಾರೆ. ಪ್ರಕರಣದಲ್ಲಿ ಮತ್ತಿಬ್ಬರು ಆರೋಪಿಗಳಾದ ರಾಬಿನ್ ಹಾಗೂ ಮುನಿ ಆಂಜಿನಪ್ಪ ಎಂಬವರ ಪತ್ತೆಗೆ ಶೋಧ ಚುರುಕುಗೊಳಿಸಿದ್ದಾರೆ.![]()
ಸರ್ಕಾರಿ ಜಾಗವನ್ನು ಅತಿಕ್ರಮಣ ಸಹಾಯ ಮಾಡುವುದಲ್ಲದೆ ನಕಲಿ ದಾಖಲಾತಿ ಸೃಷ್ಟಿಸಿ ಜನರಿಗೆ ನಿವೇಶನಗಳನ್ನು ಹಂಚಿ ಆರೋಪಿಗಳು ಹಣ ಪಡೆದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಆರೋಪಿಗಳ ವಿರುದ್ಧ ಭೂ ಕಬಳಿಕೆ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಲಾಗಿದೆ. ನಿವೇಶನ ಕೊಡಿಸುವುದಾಗಿ ಹೇಳಿ ಅವರಿಂದ ಹಣ ಪಡೆದು ಸರ್ಕಾರಿ ಜಾಗದಲ್ಲಿ ಸೈಟು ನೀಡಿದ್ದರು. ಇದುವರೆಗೆ ಎಷ್ಟು ಮಂದಿಗೆ ನಿವೇಶನ ಹಂಚಿಕೆ ಮಾಡಿದ್ದಾರೆ?, ಇದರ ಹಿಂದೆ ಬೇರೆ ಯಾರಿದ್ದಾರೆ ಎಂಬುದರ ಬಗ್ಗೆ ವಿಚಾರಣೆ ನಡೆಸಿದ ಬಳಿಕ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ನಗರ ಪೂರ್ವ ವಿಭಾಗದ ಜಂಟಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್, “ಕೋಗಿಲು ಬಡಾವಣೆ ಬಳಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಮನೆಗಳನ್ನು ಡಿ.20ರಂದು ತೆರವುಗೊಳಿಸಲಾಗಿತ್ತು. ಪರಿಶೀಲನೆ ವೇಳೆ ಕೆಲವರು ಜಾಗ ಕೊಡಿಸುವುದಾಗಿ ಹೇಳಿ ಜನರಿಂದ ಹಣ ಪಡೆದು ಮೋಸ ಮಾಡಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿ ಇಬ್ಬರನ್ನು ಬಂಧಿಸಲಾಗಿದೆ. ನಿವೇಶನ ಹಂಚಲು ಸಂಬಂಧ ಕೆಲ ಮಂದಿಗೆ ಕೆಲ ದಾಖಲಾತಿ ನೀಡಿರುವ ಬಗ್ಗೆ ಮಾಹಿತಿ ಇದ್ದು, ಪರಿಶೀಲಿಸಲಾಗುತ್ತಿದೆ. ಎಷ್ಟು ಜನರಿಂದ ಹಣ ತೆಗೆದುಕೊಂಡಿದ್ದಾರೆ? ಏನೆಲ್ಲಾ ದಾಖಲೆಗಳನ್ನು ಪೋರ್ಜರಿ ಮಾಡಲಾಗಿದೆ ಎಂಬುದರ ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ. ಹಣ ನೀಡಿ ವಂಚನೆಗೊಳಗಾದವರಿಗೆ ದೂರು ನೀಡುವಂತೆ ತಿಳಿಸಲಾಗಿದೆ. ಎಲ್ಲ ಆಯಾಮಗಳಿಂದಲೂ ತನಿಖೆ ನಡೆಯುತ್ತಿದೆ” ಎಂದು ಮಾಹಿತಿ ನೀಡಿದರು.
Laxmi News 24×7