Home / ರಾಜ್ಯ / ಕುರುಬ ಸಮುದಾಯಕ್ಕೆ ಎಸ್‍ಟಿ ಮೀಸಲಾತಿಗೆ ಒತ್ತಾಯ ವಿಧಾನಸಭೆಯಲ್ಲಿ ಧರಣಿ

ಕುರುಬ ಸಮುದಾಯಕ್ಕೆ ಎಸ್‍ಟಿ ಮೀಸಲಾತಿಗೆ ಒತ್ತಾಯ ವಿಧಾನಸಭೆಯಲ್ಲಿ ಧರಣಿ

Spread the love

ಬೆಂಗಳೂರು,ಫೆ.2-ಪಂಚಮಸಾಲಿ ಸಮುದಾಯಕ್ಕೆ 2ಎ ಹಾಗೂ ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲಾತಿ ಕಲ್ಪಿಸಬೇಕು ಎಂಬ ವಿಚಾರ ವಿಧಾನಸಭೆಯಲ್ಲಿಂದು ಪ್ರತಿಧ್ವನಿಸಿ ಪಕ್ಷ ಬೇಧ ಮರೆತು ಕೆಲ ಕಾಲ ಧರಣಿ ನಡೆಸಿದ ಘಟನೆ ಜರುಗಿತು. ಶೂನ್ಯವೇಳೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಪ್ರಸ್ತಾಪಿಸಿದ ವಿಚಾರಕ್ಕೆ ಪಕ್ಷ ಬೇಧ ಮರೆತು ಶಾಸಕರು ಧ್ವನಿಗೂಡಿಸಿ ಸರ್ಕಾರದಿಂದ ಸ್ಪಷ್ಟ ಉತ್ತರಕ್ಕೆ ಆಗ್ರಹಿಸಿ ಸಭಾಧ್ಯಕ್ಷರ ಪೀಠದ ಮುಂದಿನ ಬಾವಿಗಿಳಿದು ಧರಣಿ ನಡೆಸಿದರು.

ಇದಕ್ಕೂ ಮುನ್ನ ವಿಷಯ ಪ್ರಸ್ತಾಪಿಸಿದ ಬಸವನಗೌಡ ಪಾಟೀಲ್ ಯತ್ನಾಳ್ ಅವರು, ರಾಜ್ಯದಲ್ಲಿ 80 ಲಕ್ಷದಷ್ಟು ಜನಸಂಖ್ಯೆ ಇರುವ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಕೂಡಲ ಸಂಗಮದಿಂದ 400 ಕಿ.ಮೀ ಪಾದ ಯಾತ್ರೆ ನಡೆಸಲಾಗುತ್ತಿದೆ. ಆರ್ಥಿಕ ಹಾಗೂ ಶೈಕ್ಷಣಿಕ ಮೀಸಲಾತಿ ಯನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಈಗಾಗಲೇ ಮುಖ್ಯಮಂತ್ರಿಗಳು ಭರವಸೆ ನೀಡಿದ್ದರೂ, ಪಂಚಮಸಾಲಿ ಸಮುದಾಯವನ್ನು 2ಎ ಮೀಸಲಾತಿಗೆ ಸೇರ್ಪಡೆ ಮಾಡುವ ಕೆಲಸವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಅದೇ ರೀತಿ ಕುರುಬ ಸಮುದಾಯ ದವರು ಎಸ್ಟಿಗೆ ಸೇರಿಸಬೇಕೆಂದು ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ, ಈಶ್ವರಾನಂದ ಸ್ವಾಮೀಜಿ ನೇತೃತ್ವದಲ್ಲಿ ಕಾಗಿನೆಲೆಯಿಂದಲೂ ಬೆಂಗಳೂರಿಗೆ ಪಾದಯಾತ್ರೆ ನಡೆಸಲಾಗುತ್ತಿದೆ.

ಗಂಗಾಮತಸ್ಥರಿಗೆ ಎಸ್ಟಿ ಪ್ರಮಾಣ ಪತ್ರ ಕೊಡುತ್ತಿಲ್ಲ. ಈ ಸಮುದಾಯಕ್ಕೆ ಯಾವಾಗ ಮೀಸಲಾತಿ ಸೌಲಭ್ಯ ಕಲ್ಪಿಸಲಾಗುತ್ತದೆ ಎಂಬುದನ್ನು ಖಚಿತವಾಗಿ ಹೇಳಬೇಕು, ನಿರ್ಧಿಷ್ಟ ಗಡುವಿನೊಳಗೆ ಮೀಸಲಾತಿ ಸೇರ್ಪಡೆ ಆಗಬೇಕು ಎಂದು ಪಟ್ಟು ಹಿಡಿದರು. ಇದಕ್ಕೆ ಧ್ವನಿಗೂಡಿಸಿದ ಜೆಡಿಎಸ್‍ನ ಬಂಡೆಪ್ಪ ಕಾಂಶಂಪುರ್, ಫೆ.7ರಂದು ಬೃಹತ್ ಸಮಾವೇಶ ನಡೆಯುತ್ತಿದ್ದು, ಅಷ್ಟರೊಳಗೆ ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲಾತಿ ಘೋಷಿಸಬೇಕೆಂದು ಆಗ್ರಹಿಸಿದರು.

ಈ ಹಂತದಲ್ಲಿ ಮಧ್ಯಪ್ರವೇಶಿಸಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಸದಸ್ಯರು ಪ್ರಸ್ತಾಪಿಸಿರುವ ವಿಚಾರವನ್ನು ಸರ್ಕಾರ ಪರಿಶೀಲನೆ ಮಾಡಲಿದೆ. ಶೂನ್ಯವೇಳೆಯಲ್ಲಿ ಹೆಚ್ಚಿನ ಚರ್ಚೆಗೆ ಅವಕಾಶವಿಲ್ಲ ಎಂದರು. ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪ ಮಾತನಾಡಿ, ಸದಸ್ಯರು ಪ್ರಸ್ತಾಪಿಸಿರುವ ವಿಷಯ ಗಂಭೀರವಾಗಿದ್ದು, ಅರ್ಧ ಗಂಟೆ ಚರ್ಚೆಗೆ ಅವಕಾಶ ಮಾಡಿಕೊಡಿ ಎಂದು ಸಭಾಧ್ಯಕ್ಷರಲ್ಲಿ ಮನವಿ ಮಾಡಿದರು.

ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಮಾತನಾಡಿ, ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಶ್ರೀ ಈಶ್ವರಾನಂದ ಪುರಿ ಸ್ವಾಮಿ ಜ.14ರಿಂದ ಪಾದಯಾತ್ರೆ ಪ್ರಾರಂಭ ಮಾಡಿದ್ದಾರೆ. ಮೀಸಲಾತಿ ಸೇರ್ಪಡೆ ಮಾಡಬೇಕೆಂಬುದು ಮುಖ್ಯಮಂತ್ರಿಗಳ ಗಮನದಲ್ಲಿದೆ. ಆದಷ್ಟು ಶೀಘ್ರದಲ್ಲಿ ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಅದಕ್ಕೆ ಒಪ್ಪದಿದ್ದಾಗ ಕಾನೂನಾತ್ಮಕವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದರೂ ಇದಕ್ಕೆ ತೃಪ್ತರಾಗದ ಬಸವನಗೌಡ ಪಾಟೀಲ್ ಯತ್ನಾಳ್, ಬಂಡೆಪ್ಪ ಕಾಶಂಪುರ್, ತುಕಾರಾಂ, ಯತೀಂದ್ರ ಸಿದ್ದರಾಮಯ್ಯ ಮೊದಲಾದ ಸದಸ್ಯರು ಸಭಾಧ್ಯಕ್ಷರ ಮುಂದಿನ ಬಾವಿಗಿಳಿದು ಧರಣಿ ನಡೆಸಲು ಪ್ರಾರಂಭಿಸಿದರು.

ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಶೂನ್ಯವೇಳೆಯಲ್ಲಿ ವಿಷಯ ಚರ್ಚೆಗೆ ಅವಕಾಶವಿಲ್ಲ. ವಿಷಯ ಗಂಭೀರವಾಗಿರುವುದರಿಂದ ಪ್ರತ್ಯೇಕ ಚರ್ಚೆಗೆ ಅವಕಾಶ ಮಾಡಿ ಕೊಡಲಾಗುವುದು. ನಿಯಮಾವಳಿ ಪ್ರಕಾರ ಲಿಖಿತವಾಗಿ ಬರೆದುಕೊಡಿ ಎಂದು ಸಮಾಧಾನಪಡಿಸಿದಾಗ ಧರಣಿ ಕೈಬಿಟ್ಟು ಸ್ವಸ್ಥಾನಗಳಿಗೆ ಮರಳಿದರು.


Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ