Breaking News
Home / ಜಿಲ್ಲೆ / ಬೆಂಗಳೂರು / ಕೋವಿಡ್‌ 2ನೇ ಅಲೆ ಮುನ್ಸೂಚನೆ: ರಾತ್ರಿ ಕರ್ಫ್ಯೂ ಬಗ್ಗೆ ಮಾ.17ರ ಬಳಿಕ ತೀರ್ಮಾನ

ಕೋವಿಡ್‌ 2ನೇ ಅಲೆ ಮುನ್ಸೂಚನೆ: ರಾತ್ರಿ ಕರ್ಫ್ಯೂ ಬಗ್ಗೆ ಮಾ.17ರ ಬಳಿಕ ತೀರ್ಮಾನ

Spread the love

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ಎರಡನೇ ಅಲೆಯ ಮುನ್ಸೂಚನೆ ಖಚಿತವಾಗಿದ್ದು, ಇದಕ್ಕೆ ಕಡಿವಾಣ ಹಾಕಲು ಸಾರ್ವಜನಿಕರು ಸಹಕರಿಸದಿದ್ದರೆ, ದಂಡ ವಿಧಿಸುವುದು ಅನಿವಾರ್ಯ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಸೋಮವಾರ ತಜ್ಞರ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರು ಕೋವಿಡ್‌ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಮನವಿ ಮಾಡಿದರು.

ಕೋವಿಡ್‌ ಮತ್ತೆ ಹೆಚ್ಚುತ್ತಿರುವುದರಿಂದ ಇದೇ 17 ರಂದು ಪ್ರಧಾನಿ ನರೇಂದ್ರಮೋದಿ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಸಮಾಲೋಚನೆ ನಡೆಸಲಿದ್ದಾರೆ. ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಿರುವ ಕಡೆಗಳಲ್ಲಿ ರಾತ್ರಿ ಕರ್ಫ್ಯೂ ವಿಧಿಸಬೇಕೆ ಎಂಬ ಬಗ್ಗೆ ಆ ಬಳಿಕ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಬೀದರ್‌, ಕಲಬುರ್ಗಿಗಳಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಾಗಿವೆ. ಪಾಸಿಟಿವ್‌ ಪ್ರಕರಣಗಳು ಹೆಚ್ಚು ಇರುವ ಜಿಲ್ಲೆಗಳಲ್ಲಿ ಕೋವಿಡ್‌ ಲಸಿಕೆ ನೀಡಲು ಸಲಹೆ ನೀಡಲಾಗಿದೆ ಎಂದು ಯಡಿಯೂರಪ್ಪ ತಿಳಿಸಿದರು.

ಸಾರ್ವಜನಿಕರು ಕೋವಿಡ್‌ ಮಾರ್ಗಸೂಚಿಯನ್ನು ಎಷ್ಟು ಕಟ್ಟುನಿಟ್ಟಾಗಿ ಪಾಲಿಸುತ್ತಾರೆ ಎನ್ನುವುದನ್ನು ಇನ್ನು ಒಂದು ವಾರ ಕಾಲ ಗಮನಿಸುತ್ತೇವೆ. ಮಾಸ್ಕ್‌ ಧರಿಸುವುದೂ ಸೇರಿದಂತೆ ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗಸೂಚಿಯನ್ನು ಪಾಲಿಸಬೇಕು. ಇಲ್ಲವಾದರೆ ದಂಡ ವಿಧಿಸಲಾಗುವುದು. ಜಾತ್ರೆಗಳು, ಸಾರ್ವಜನಿಕ ಸಮಾರಂಭಗಳಲ್ಲಿ ಜನರು ಮಾಸ್ಕ್‌ ಹಾಕುತ್ತಿಲ್ಲ. ಅಂತರ ಕಾಯ್ದುಕೊಳ್ಳುತ್ತಿಲ್ಲ ಎಂದು ಯಡಿಯೂರಪ್ಪ ಬೇಸರ ವ್ಯಕ್ತಪಡಿಸಿದರು.

ಲಸಿಕೆ ಪ್ರಮಾಣ ಹೆಚ್ಚಳಕ್ಕೆ ಕ್ರಮ:

ಕಳೆದ 14 ದಿನಗಳಿಂದ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ. ಹೆಚ್ಚು ಪಾಸಿಟಿವ್‌ ಪ್ರಕರಣಗಳು ಇರುವ ಜಿಲ್ಲೆಗಳಲ್ಲಿ ಲಸಿಕೆ ನೀಡಿಕೆ ಪ್ರಮಾಣ ಹೆಚ್ಚಿಸಲು ಸಭೆಯಲ್ಲಿ ಅಧಿಕಾರಿಗಳು ಸಲಹೆ ನೀಡಿದರು. ಇದಕ್ಕೆ ಒಪ್ಪಿಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.

ಸಭೆಯಲ್ಲಿ ತಾಂತ್ರಿಕ ಸಲಹಾ ಸಮಿತಿ ಸದಸ್ಯರಾದ ಡಾ.ಸಿ.ಎನ್‌.ಮಂಜುನಾಥ್, ಡಾ.ಸುದರ್ಶನ್‌, ಡಾ.ರವಿ, ಪ್ರೊ.ಗಿರಿಧರ್‌ಬಾಬು, ವಿಶ್ವ ಆರೋಗ್ಯ ಸಂಸ್ಥೆಯ ಪ್ರತಿನಿಧಿಗಳು, ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಮತ್ತು ಹಿರಿಯ ಅಧಿಕಾರಿಗಳು ಹಾಜರಿದ್ದರು.

ಮುನ್ನೆಚ್ಚರಿಕೆ ಕ್ರಮಗಳು

* ಮಾಸ್ಕ್‌ ಧರಿಸುವುದು, ಅಂತರ ಕಾಯ್ದುಕೊಳ್ಳುವಿಕೆ ನಿಯಮ ಉಲ್ಲಂಘಿಸಿದರೆ ದಂಡ

* ಕೌಟುಂಬಿಕ, ಧಾರ್ಮಿಕ, ರಾಜಕೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವವರ ಸಂಖ್ಯೆ ಕುರಿತು ಮಾರ್ಗಸೂಚಿ ಪ್ರಕಾರ ಕಟ್ಟುನಿಟ್ಟಿನ ನಿಯಂತ್ರಣ

* ದೊಡ್ಡ ಅಪಾರ್ಟ್‌ಮೆಂಟ್ ಸಮುಚ್ಚಯಗಳಲ್ಲಿ ಲಸಿಕೆ ಹಾಕಲು ತುರ್ತು ಕ್ರಮ

* ಮತದಾರರ ಪಟ್ಟಿ ಆಧರಿಸಿ, ಹಿರಿಯ ನಾಗರಿಕರನ್ನು ಗುರುತಿಸಿ ಲಸಿಕೆ ಹಾಕುವುದು

* ಗ್ರಾಮೀಣ ಪ್ರದೇಶ ಹಾಗೂ ಕೊಳೆಗೇರಿಗಳಲ್ಲಿ ಲಸಿಕೆ ಪ್ರಮಾಣ ಹೆಚ್ಚಿಸುವುದು.

* ಎಲ್ಲ ಇಲಾಖೆಗಳು ಹಾಗೂ ರೋಟರಿ, ಲಯನ್ಸ್‌ ಕ್ಲಬ್‌ಗಳಂತಹ ಸೇವಾ ಸಂಸ್ಥೆಗಳ ಸಹಯೋಗ ಪಡೆದು ಲಸಿಕೆ ಕಾರ್ಯಕ್ರಮ

* ಕೋವಿಡ್‌ ಪರೀಕ್ಷೆ ಪ್ರಮಾಣ ಹೆಚ್ಚಿಸುವುದು.

* ಸಂಪರ್ಕಿತರನ್ನು ಪತ್ತೆ ಹಚ್ಚುವ ಕಾರ್ಯವನ್ನು ಚುರುಕುಗೊಳಿಸುವುದು

* ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ನಿಗದಿತ ಸಂಖ್ಯೆ ಮೀರಿ ಪ್ರಯಾಣಿಕರನ್ನು ಕರೆದೊಯ್ಯಲು ನಿರ್ಬಂಧ

ಒಂದೇ ದಿನ 26 ಸಾವಿರಕ್ಕೂ ಹೆಚ್ಚು ಪ್ರಕರಣ

ನವದೆಹಲಿ: ದೇಶದಾದ್ಯಂತ ಸೋಮವಾರ ಒಂದೇ ದಿನ 26,291 ಕೋವಿಡ್‌-19 ಪ್ರಕರಣಗಳು ದೃಢಪಟ್ಟಿವೆ. ಇದು ಕಳೆದ 85 ದಿನಗಳಲ್ಲೇ ಗರಿಷ್ಠ ಪ್ರಕರಣಗಳಾಗಿವೆ. ಮಹಾರಾಷ್ಟ್ರದಲ್ಲೇ 16,620 ಪ್ರಕರಣಗಳು ಪತ್ತೆಯಾಗಿವೆ. ಕೇರಳದಲ್ಲಿ 1,792 ಮತ್ತು ಪಂಜಾಬ್‌ನಲ್ಲಿ 1,492 ಪ್ರಕರಣಗಳು ದೃಢಪಟ್ಟಿವೆ. ಇದರಿಂದ ದೇಶದಲ್ಲಿ ಸೋಂಕಿತರ ಸಂಖ್ಯೆ 1.13 ಕೋಟಿ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಸೋಮವಾರ 118 ಮಂದಿ ಸಾವಿಗೀಡಾಗಿದ್ದಾರೆ. ಇವರಲ್ಲಿ ಮಹಾರಾಷ್ಟ್ರದ 50 ಮಂದಿ, ಪಂಜಾಬ್‌ನ 20 ಮತ್ತು ಕೇರಳದ 15 ಮಂದಿ ಸೇರಿದ್ದಾರೆ. ಇದರಿಂದ, ಸಾವಿಗೀಡಾದವರ ಸಂಖ್ಯೆ 1.58 ಲಕ್ಷ ದಾಟಿದೆ. ಕಳೆದ ಐದು ದಿನಗಳಿಂದ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆಯೂ 2.19 ಲಕ್ಷ ದಾಟಿದೆ ಎಂದು ತಿಳಿಸಿದೆ.

ಮಹಾರಾಷ್ಟ್ರ, ಪಂಜಾಬ್‌, ಕರ್ನಾಟಕ, ಗುಜರಾತ್‌ ಮತ್ತು ತಮಿಳುನಾಡಿನಲ್ಲಿ ಪ್ರತಿ ದಿನ ಕೋವಿಡ್‌-19 ಪ್ರಕರಣಗಳು ಹೆಚ್ಚುತ್ತಿವೆ. ಹೊಸ ಪ್ರಕರಣಗಳಲ್ಲಿ ಶೇಕಡ 78.14ರಷ್ಟು ಈ ಐದು ರಾಜ್ಯಗಳಲ್ಲಿ ಪತ್ತೆಯಾಗಿವೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ