Breaking News
Home / ರಾಜ್ಯ / “ಕೊರೊನಾವೈರಸ್‌ಗೆ ಲಸಿಕೆ ಉಂಟು, ಬಿಜೆಪಿಯ ಭ್ರಷ್ಟಾಚಾರದ ವೈರಸ್‌ಗೆ ಲಸಿಕೆ ಇಲ್ಲ”

“ಕೊರೊನಾವೈರಸ್‌ಗೆ ಲಸಿಕೆ ಉಂಟು, ಬಿಜೆಪಿಯ ಭ್ರಷ್ಟಾಚಾರದ ವೈರಸ್‌ಗೆ ಲಸಿಕೆ ಇಲ್ಲ”

Spread the love

ಬೆಂಗಳೂರು, ಮಾರ್ಚ್ 19: ”ಕರ್ನಾಟಕದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿಗೆ ನಿಯಂತ್ರಣವೇ ತಪ್ಪಿ ಹೋಗಿದೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಸೋಂಕು ಹರಡುವಿಕೆಗೆ ಕಡಿವಾಣ ಹಾಕುವುದರಲ್ಲಿ ಸೋತಿದೆ” ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

ರಾಜ್ಯದಲ್ಲಿ ಪ್ರತಿನಿತ್ಯ ಸೋಂಕಿತ ಪ್ರಕರಣಗಳ ಸಂಖ್ಯೆ ಸಾವಿರದ ಗಡಿ ದಾಟುತ್ತಿದೆ. ನಾಲ್ಕು ತಿಂಗಳಿನಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ 1400ಕ್ಕೂ ಹೆಚ್ಚು ಹೊಸ ಪ್ರಕರಣಗಳು ಪತ್ತೆಯಾಗಿವೆ. ಕಳೆದ 24 ಗಂಟೆಗಳಲ್ಲಿ 1488 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ಕರ್ನಾಟಕದಲ್ಲಿ ಒಂದೇ ದಿನ 8 ಮಂದಿ ಮಹಾಮಾರಿಗೆ ಬಲಿಯಾಗಿದ್ದು, ಈವರೆಗೂ 12,415 ಮಂದಿ ಪ್ರಾಣ ಬಿಟ್ಟಿದ್ದಾರೆ. ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 965102ಕ್ಕೆ ಏರಿಕೆಯಾಗಿದ್ದು, ಈ ಪೈಕಿ 9,41,309 ಸೋಂಕಿತರು ಗುಣಮುಖರಾಗಿದ್ದಾರೆ. 11,359 ಸಕ್ರಿಯ ಪ್ರಕರಣಗಳಿರುವ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಈ ಅಂಕಿ-ಅಂಶಗಳ ಕುರಿತು ಸರ್ಕಾರವನ್ನು ಸಿದ್ದರಾಮಯ್ಯ ತಮ್ಮ ಟ್ವೀಟ್ ಮೂಲಕ ಟೀಕಿಸಿದ್ದಾರೆ.

ಕೊರೊನಾ ಉಲ್ಬಣದ ಕಾರಣ ಪ್ರಶ್ನಿಸಿದ ಸಿದ್ದರಾಮಯ್ಯ

“ಕೊರೊನಾ ನಿಯಂತ್ರಣದ ಹೆಸರಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ನಮ್ಮ ಆರೋಪಕ್ಕೆ ಸಾಕ್ಷಿ ಹೇಳುವಂತಿದೆ ಮತ್ತೆ ಅವತರಿಸಿ ಕೇಕೆ ಹಾಕುತ್ತಿರುವ ಕೊರೊನಾ ವೈರಸ್. ಕರ್ನಾಟಕದ ಮುಖ್ಯಮಂತ್ರಿ ಅವರೇ, ನಿಯಂತ್ರಣಕ್ಕೆ ಸರ್ಕಾರ ಖರ್ಚು ಮಾಡಿದ್ದರೆ ಮತ್ತೆ ಯಾಕೆ ಕೊರೊನಾ ಸೋಂಕು ಉಲ್ಬಣಗೊಳ್ಳುತ್ತಿದೆ?” ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಕರ್ನಾಟಕದಲ್ಲಿ ಕೊರೊನಾ ನಿಯಂತ್ರಣ ತಪ್ಪಿದ್ದೇಕೆ?

“ಕೊರೊನಾ ನಿಯಂತ್ರಣಕ್ಕಾಗಿ ಸಂಪನ್ಮೂಲ ವ್ಯಯಮಾಡಬೇಕಾಗಿದೆ ಎಂಬ ಕುಂಟುನೆಪ ಹೇಳಿ ಅಭಿವೃದ್ಧಿ ಚಟುವಟಿಕೆಗಳಿಗೆ ಅನುದಾನಗಳನ್ನು ಕಡಿತಗೊಳಿಸಿದ ಕರ್ನಾಟಕದ ಮುಖ್ಯಮಂತ್ರಿ ಅವರು ಈಗ ಏನು ಹೇಳುತ್ತಾರೆ?. ಅಷ್ಟೊಂದು ಆದ್ಯತೆ ನೀಡಿದ್ದರೆ ಕೊರೊನಾ ನಿಯಂತ್ರಣಕ್ಕೆ ಬರಬೇಕಿತ್ತಲ್ಲಾ? ಯಾಕೆ ನಿಯಂತ್ರಣ ತಪ್ಪಿದೆ?” ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

5372 ಕೋಟಿ ರೂ. ಹಣದಲ್ಲಿ ಕೊರೊನಾ ನಿರ್ವಹಣೆ

“ಕೊರೊನಾ ನಿರ್ವಹಣೆಗಾಗಿ ರೂ.5,372 ಕೋಟಿ ಖರ್ಚು ಮಾಡಲಾಗಿದೆ ಎಂದು ಮೊನ್ನೆ ಮಂಡಿಸಿದ್ದ ಬಜೆಟ್ ನಲ್ಲಿ ಹೇಳಿರುವ ಕರ್ನಾಟಕದ ಮುಖ್ಯಮಂತ್ರಿ ಮಾಡಿರುವ ಖರ್ಚಿನ ವಿವರ ಮಾತ್ರ ತಿಳಿಸಿಲ್ಲ. ಈಗಲಾದರೂ ಆ ಹಣ ಯಾವ ಉದ್ದೇಶಗಳಿಗೆ ಖರ್ಚು ಮಾಡಿದ್ದೀರಿ ಎಂಬ ಲೆಕ್ಕದ ವಿವರವನ್ನು ಜನರ ಮುಂದಿಡಿ” ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ರಾಜ್ಯ ಸರ್ಕಾರದ ಭ್ರಷ್ಟಾಚಾರಕ್ಕೆ ಯಾವ ಲಸಿಕೆ?

“ಕೊರೊನಾ ವೈರಸ್‌ಗೆ ಲಸಿಕೆ ಬಂದಿದೆ, ನಿಮ್ಮ ಸರ್ಕಾರಕ್ಕೆ ತಗಲಿರುವ ಭ್ರಷ್ಟಾಚಾರದ ವೈರಸ್‌ಗೆ ಎಲ್ಲಿಂದ ಲಸಿಕೆ ತರುವುದು? ಕೊರೊನಾ ಮೊದಲ ಅಲೆಯ ನಿಯಂತ್ರಣದಲ್ಲಿನ ಲೋಪ-ದೋಷವನ್ನು ಎರಡನೇ ಅಲೆಯಲ್ಲಿಯಾದರೂ ತಿದ್ದಿಕೊಂಡು, ಕೊರೊನಾವನ್ನು ಭ್ರಷ್ಟಾಚಾರಕ್ಕೆ ದುರ್ಬಳಕೆ ಮಾಡಿಕೊಳ್ಳದೆ ಕೆಲಸ ಮಾಡಿ ಜನರನ್ನು ಉಳಿಸಿ” ಎಂದು ಕಿಡಿ ಕಾರಿದ್ದಾರೆ.


Spread the love

About Laxminews 24x7

Check Also

ಕೇಂದ್ರ ಸರ್ಕಾರ ರಾಜ್ಯಕ್ಕೆ 2.30 ಲಕ್ಷ ಸಾವಿರ ಕೋಟಿ ರೂ. ನೀಡಿದೆ;ಜೋಶಿ

Spread the loveಕರ್ನಾಟಕದಲ್ಲಿ ಬರಗಾಲ ಆವರಿಸಿದ್ದು, ಪರಿಹಾರ ನೀಡುವಂತೆ ಮನವಿ ಸಲ್ಲಿಸಿದರೂ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಇನ್ನೂ ಕೂಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ