Breaking News
Home / ಜಿಲ್ಲೆ / ಬೆಳಗಾವಿ / ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ: ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್

ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ: ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್

Spread the love

ಬೆಳಗಾವಿ: ಕೋವಿಡ್-೧೯ ಮತ್ತೆ ವ್ಯಾಪಕವಾಗಿ ಹರಡುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ನೆರೆಯ ಮಹಾರಾಷ್ಟ್ರದಿಂದ ಆಗಮಿಸುವ ಎಲ್ಲ ಪ್ರಯಾಣಿಕರು ಕೋವಿಡ್ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

ರಾಜ್ಯದಾದ್ಯಂತ ಕೋವಿಡ್ ಹರಡುವಿಕೆ ತಡೆಗಟ್ಟಲು ಅಂತರ್ ರಾಜ್ಯ ಗಡಿಗಳಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ. ನೆರೆಯ ರಾಜ್ಯದಿಂದ ಜಿಲ್ಲೆಗೆ ಆಗಮಿಸುವ ಪ್ರಯಾಣಿಕರು ಕಡ್ಡಾಯವಾಗಿ ತಪಾಸಣಾ ವರದಿಯನ್ನು ನೀಡಬೇಕು ಎಂದು ಅವರು ಹೇಳಿದರು.

ಸಾರ್ವಜನಿಕ ಸ್ಥಳಗಳಲ್ಲಿ ಹಬ್ಬ/ಉತ್ಸವಗಳ ನಿರ್ಬಂಧ:

ಕೋವಿಡ್ ಹರಡುವಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ಸಾರ್ವಜನಿಕ ಸ್ಥಳಗಳಲ್ಲಿ ಹಬ್ಬ/ಉತ್ಸವಗಳ ಆಚರಣೆಯನ್ನು ನಿರ್ಬಂಧಿಸಿ ಸರ್ಕಾರ ಆದೇಶ ಹೊರಡಿಸಿದ್ದು, ಅದನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಪಾಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಸ್ಪಷ್ಟಪಡಿಸಿದರು.

ಎಲ್ಲ ರೀತಿಯ ಹಬ್ಬ ಮತ್ತಿತರ ಧಾರ್ಮಿಕ ಆಚರಣೆಗಳನ್ನು ಮನೆಯಲ್ಲಿ ಆಚರಿಸಬೇಕು. ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ನಿಗದಿತ ಜನರಿಗಿಂತ ಹೆಚ್ಚು ಜನರು ಸೇರಿದರೆ ಆಯೋಜಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರತಿದಿನ 25 ಸಾವಿರ ಲಸಿಕೆ ನೀಡಲು ಕ್ರಮ:

ಲಸಿಕಾಕರಣ ಚುರುಕುಗೊಳಿಸಲು ನಿರ್ಧರಿಸಲಾಗಿದ್ದು, ಇನ್ನು ಮುಂದೆ ಜಿಲ್ಲೆಯ 600 ಉಪ ಕೇಂದ್ರಗಳಲ್ಲೂ ಲಸಿಕೆ ನೀಡಲಾಗುವುದು. ಪ್ರತಿದಿನ 25 ಸಾವಿರ ಜನರಿಗೆ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಹರೀಶ್ ಕುಮಾರ್ ವಿವರಿಸಿದರು.

ಹೆಚ್ಚು ಹೆಚ್ಚು ಜನರಿಗೆ ಲಸಿಕೆ ನೀಡುವುದಕ್ಕಾಗಿ ಮುಂಬರುವ ದಿನಗಳಲ್ಲಿ ಜನರ ಬಳಿಗೆ ಹೋಗಿಯೇ ಲಸಿಕೆ ನೀಡಲು ಚಿಂತನೆ ನಡೆಸಲಾಗುತ್ತಿದೆ. ಜಿಲ್ಲೆಯಲ್ಲಿ ಲಸಿಕೆ ಕೊರತೆ ಇಲ್ಲ. ಒಂದು ವೇಳೆ ಲಸಿಕೆಗೆ ಬೇಡಿಕೆ ಸಲ್ಲಿಸಿದರೆ ತಕ್ಷಣವೇ ಲಸಿಕೆ ಪೂರೈಕೆಗೆ ಸರ್ಕಾರ ಸಿದ್ಧವಿದೆ ಎಂದು ತಿಳಿಸಿದರು.

ದಂಡ ಪ್ರಕ್ರಿಯೆ ಚುರುಕುಗೊಳಿಸಲು ನಿರ್ಧಾರ:

ಕೋವಿಡ್ ಮಾರ್ಗಸೂಚಿ ಪಾಲಿಸುವಂತೆ ಸಾರ್ವಜನಿಕರಲ್ಲಿ ನಿರಂತರವಾಗಿ ಮನವಿ ಮಾಡಿಕೊಳ್ಳಲಾಗುತ್ತಿದೆ. ಆದಾಗ್ಯೂ ಕೆಲವೆಡೆ ಮಾರ್ಗಸೂಚಿ ಉಲ್ಲಂಘನೆ ಕಂಡುಬರುತ್ತಿರುವುದರಿಂದ ದಂಡ ವಿಧಿಸುವ ಪ್ರಕ್ರಿಯೆಯನ್ನು ಚುರುಕುಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಗಡಿ ಭಾಗದಲ್ಲಿ ಕೋವಿಡ್ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲನೆ ಮಾಡಲಾಗುತ್ತಿದ್ದು, ಇನ್ನೂ ಹೆಚ್ಚಿನ ನಿಯಂತ್ರಣಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು.

ಕೋವಿಡ್-೧೯ ಪರೀಕ್ಷಾ ವರದಿ ಪರಿಶೀಲನೆಯ ಜವಾಬ್ದಾರಿಯನ್ನು ಸಾರಿಗೆ ಸಂಸ್ಥೆಯ ನಿರ್ವಾಹಕರು ಮತ್ತು ಚಾಲಕರಿಗೆ ನೀಡಲಾಗುವುದು. ಲಸಿಕೆ ಅಭಿಯಾನವನ್ನು ಇನ್ನಷ್ಟು ಚುರುಕುಗೊಳಿಸಲು ಇಂದಿನಿಂದಲೇ ಕ್ರಮ ಕೈಗೊಳ್ಳಲಾಗುವುದು.

ರಾಜಕೀಯ ಪಕ್ಷಗಳು ಸೇರಿದಂತೆ ಯಾರೇ ಆಗಲಿ ಕೋವಿಡ್ ಮಾರ್ಗಸೂಚಿ ಮತ್ತು ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು.

ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಪ್ರೀತಂ ನಸಲಾಪುರೆ, ಪ್ರಾಧಿಕಾರದ ಭೂಸ್ವಾಧೀನ ಅಧಿಕಾರಿ ರವೀಂದ್ರ ಕರಲಿಂಗಣ್ಣವರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕ ಗುರುನಾಥ ಕಡಬೂರ ಉಪಸ್ಥಿತರಿದ್ದರು .


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ