ಬೆಂಗಳೂರು: ಮೂರು ಬಾರಿ ಮುಂದೂಡಲಾಗಿದ್ದ ಕೆಪಿಸಿಸಿ ಅಧ್ಯಕ್ಷ, ಕಾರ್ಯಾಧ್ಯಕ್ಷರ ಪದಗ್ರಹಣ ಸಮಾರಂಭಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಅಧಿಕೃತವಾಗಿ ನಾಳೆ ಪ್ರತಿಜ್ಞಾ ವಿಧಿ ಸ್ವೀಕರಿಸಲಿದ್ದಾರೆ.
ವಿನೂತನ ಕಾರ್ಯಕ್ರಮಕ್ಕೆ ಕೆಪಿಸಿಸಿ ಹೊಸ ಕಚೇರಿಯಲ್ಲಿ ಸಕಲ ಸಿದ್ಧತೆ ನಡೆದಿದೆ. ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕಾರ ಮಾಡುವ ಸಮಾರಂಭ ರಾಜ್ಯದ 7,800 ಗ್ರಾಮ ಪಂಚಾಯ್ತಿಗಳಲ್ಲಿ ನೇರಪ್ರಸಾರವಾಗಲಿದೆ. ನೇರ ಪ್ರಸಾರಕ್ಕೆ ಕಾಂಗ್ರೆಸ್ ಮುಖಂಡರು ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಕೊರೊನಾದಿಂದಾಗಿ ಕಾರ್ಯಕ್ರಮ ಸರಳವಾಗಿ ನಡೆಯಲಿದೆ.
ಕೆಪಿಸಿಸಿ ಕಚೇರಿಯಲ್ಲಿ ನಡೆಯಲಿರುವ ಈ ಸಮಾರಂಭದಲ್ಲಿ 150 ಜನರಿಗೆ ಮಾತ್ರ ಪಾಲ್ಗೊಳ್ಳಲು ಅವಕಾಶ ನೀಡಲಾಗಿದೆ. ಕೇವಲ ಹಿರಿಯ ಮುಖಂಡರಿಗಷ್ಟೇ ಅವಕಾಶ ಕಲ್ಪಿಸಲಾಗಿದ್ದು, ಕಾರ್ಯಕರ್ತರು, ಬೆಂಬಲಿಗರಿಗೆ ಪ್ರವೇಶವಿಲ್ಲ. ಈಗಾಗಲೇ ಡಿಕೆಶಿ ಕೂಡ ಹೆಚ್ಚು ಜನರು ಬರದಂತೆ ಮನವಿ ಮಾಡಿಕೊಂಡಿದ್ದಾರೆ.
ನಾಳಿನ ಕಾರ್ಯಕ್ರಮದಲ್ಲಿ ಕರ್ನಾಟಕದ ಹೊರಗಿನಿಂದ 7 ಗಣ್ಯರು ಪಾಲ್ಗೊಳ್ಳಲಿದ್ದಾರೆ. ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಕೇರಳದ ಪ್ರತಿಪಕ್ಷ ನಾಯಕ ರಮೇಶ್ ಚೆನ್ನಿತಾಲ್, ಕೇರಳ ಪಿಸಿಸಿ ಅಧ್ಯಕ್ಷ ಮುಲ್ಲಪಳ್ಳಿ ರಾಮಚಂದ್ರನ್, ಸೀಮಾಂಧ್ರದ ಸಾಕೆ ಶೈಲಜನಾಥ್, ಉತ್ತಮ್ ಕುಮಾರ್ ರೆಡ್ಡಿ ನಾಳೆಯ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.