ಬೆಂಗಳೂರು: ಕೊರೊನಾ ನಿಯಂತ್ರಣದ ವಿಷಯದಲ್ಲಿ ಆರೋಗ್ಯ ಸಚಿವ ಡಾ. ಸುಧಾಕರ್ ಹಾಗೂ ಕಂದಾಯ ಸಚಿವ ಆರ್. ಅಶೋಕ್ ನಡುವೆ ಶೀತಲ ಸಮರ ಆರಂಭವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕೊರೊನಾ ನಿರ್ವಹಣೆ ವಿಚಾರದಲ್ಲಿ ಶನಿವಾರ ಸಚಿವ ಆರ್. ಅಶೋಕ್, ಬಸವರಾಜ ಬೊಮ್ಮಾಯಿ ಜೊತೆ ಸೇರಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸಭೆ ನಡೆಸಿರುವುದಕ್ಕೆ ಸಚಿವ ಡಾ. ಸುಧಾಕರ್ ತಮ್ಮ ಆಪ್ತರ ಬಳಿ ಬೇಸರ ವ್ಯಕ್ತಪಡಿಸಿದ್ದಾರೆಂದು ತಿಳಿದು ಬಂದಿದೆ.
ಅಲ್ಲದೇ ಭಾನುವಾರ ಬೆಂಗಳೂರಿನ ಕೊರೊನಾ ನಿಯಂತ್ರಣದ ಕುರಿತು ಮಾಹಿತಿ ತಿಳಿದುಕೊಳ್ಳಲು ಅಶೋಕ್, ಬಸವರಾಜ ಬೊಮ್ಮಾಯಿ ಜೊತೆ ಸೇರಿ ಸಭೆ ನಡೆಸಿರುವ ಬಗ್ಗೆಯೂ ಸುಧಾಕರ್ ಅಸಮಾಧಾನ ಹೊಂದಿದ್ದಾರೆ ಎನ್ನಲಾಗಿದೆ. ಅಲ್ಲದೇ ಭಾನುವಾರ ನಡೆದ ಸಭೆಯಲ್ಲಿ ಅಶೋಕ್, ಅಧಿಕಾರಿಗಳು ಅನಗತ್ಯವಾಗಿ ಮಾಧ್ಯಮಗಳಿಗೆ ಮಾಹಿತಿ ನೀಡುತ್ತಿರುವುದರಿಂದ ಮಾಧ್ಯಮಗಳು ಅದನ್ನು ವೈಭವೀಕರಿಸುತ್ತಿರುವುದರಿಂದ ಜನರು ಮತ್ತಷ್ಟು ಆತಂಕಕ್ಕೆ ಒಳಗಾಗುತ್ತಿದ್ದಾರೆ. ಪ್ರತಿ ದಿನ ಅನಗತ್ಯ ಹೇಳಿಕೆ ನೀಡುವುದು ಸರಿಯಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಆದರೆ, ಆರ್. ಅಶೋಕ್ ಪರೋಕ್ಷವಾಗಿ ಸುಧಾಕರ್ ತಮ್ಮನ್ನು ಗುರಿಯಾಗಿಟ್ಟುಕೊಂಡು ಹೇಳಿದ್ದಾರೆ ಎನ್ನುವ ಲೆಕ್ಕಾಚಾರದಲ್ಲಿ ಮಾಧ್ಯಮಗಳಿಗೆ ಮಾಹಿತಿ ಕೊಡುವುದನ್ನು ಸಮರ್ಥಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದ್ದು, ಈ ವಿಚಾರದಲ್ಲಿ ಇಬ್ಬರ ನಡುವೆಯೂ ಮುಸುಕಿನ ಗುದ್ದಾಟ ಆರಂಭವಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
Laxmi News 24×7