ಲಖನೌ: ಕರೊನಾ ಮಹಾಮಾರಿಯಿಂದ ಮೃತಪಡುತ್ತಿರುವವರ ಸಂಖ್ಯೆ ಕ್ಷಣಕ್ಷಣಕ್ಕೂ ಏರುತ್ತಲೇ ಸಾಗಿದೆ. ಇದೀಗ ಉತ್ತರ ಪ್ರದೇಶದ ಲಖನೌ ಪಶ್ಚಿಮ ಕ್ಷೇತ್ರದ ಶಾಸಕ ಸುರೇಶ್ ಶ್ರೀವಾತ್ಸವ್ ಅವರು ಕರೊನಾಕ್ಕೆ ಬಲಿಯಾಗಿದ್ದಾರೆ. ಇವರಿಗೆ 76 ವರ್ಷ ವಯಸ್ಸಾಗಿತ್ತು.15 ದಿನಗಳ ಹಿಂದೆ ಇವರಿಗೆ ಕರೊನಾ ಸೋಂಕು ತಗುಲಿರುವುದು ತಿಳಿದಿತ್ತು. ಪರಿಸ್ಥಿತಿ ಬಿಗಡಾಯಿಸಿದ್ದರಿಂದ ಕಳೆದ ವಾರ ವೆಂಟಿಲೇಟರ್‌ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿ ಆಸ್ಪತ್ರೆ ಮೂಲಗಳು ಹೇಳಿವೆ.
ಇವರ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವೀಟ್ ಮಾಡಿ ಇವರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಆರ್‍ಎಸ್‍ಎಸ್ ಹಿನ್ನೆಲೆಯುಳ್ಳವರಾಗಿದ್ದ ಸುರೇಶ್ ಶ್ರೀವಾತ್ಸವ್ ಅನುಭವಿ ರಾಜಕಾರಣಿ. ಸುರೇಶ್ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ ಎಂದು ಉತ್ತರ ಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷ ಸ್ವತಂತ್ರ ದೇವ್ ಸಂತಾಪ ಸೂಚಿಸಿದ್ದಾರೆ.
