ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿನ ಭೀತಿಯ ನಡುವೆಯೂ ಏಪ್ರಿಲ್ 28ರಿಂದ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಮಾರ್ಗಸೂಚಿಯಲ್ಲಿ ತಿಳಿಸಿತ್ತು. ಆದ್ರೇ ಕೊರೋನಾ ಸೋಂಕಿನ 2ನೇ ಅಲೆಯ ಹೆಚ್ಚಳದ ಹಿನ್ನಲೆಯಲ್ಲಿ, ಇದೀಗ 2020-21ನೇ ಸಾಲಿನ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷಾ ದಿನಾಂಕವನ್ನು ಮುಂದೂಡಿಕೆ ಮಾಡಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶಿಸಿದೆ.
ಈ ಕುರಿತಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಪದವಿ ಪೂರ್ವ ಶಿಕ್ಷಣ ಇಲಾಖೆಯು 2020-21ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಯನ್ನು ದಿನಾಂಕ 28-04-2021 ರಿಂದ ದಿನಾಂಕ 18-05-2021ರವರೆಗೆ ನಡೆಸಲು ತೀರ್ಮಾನಿಸಿ, ಸುತ್ತೋಲೆಯನ್ನು ಹೊರಡಿಸಲಾಗಿತ್ತು. ಕೋವಿಡ್-19ರ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಪ್ರಾಯೋಗಿಕ ಪರೀಕ್ಷೆಯನ್ನು ಆಯಾ ಕಾಲೇಜುಗಳ ಹಂತದಲ್ಲಿಯೇ ನಡೆಸಲು ಸೂಚಿಸಲಾಗಿತ್ತು.
ಆದ್ರೇ.. ಕೋವಿಡ್-19ರ ಸಾಂಕ್ರಾಮಿಕ ರೋಗವು ಪ್ರತಿನಿತ್ಯ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಪ್ರಾಯೋಗಿಕ ಪರೀಕ್ಷೆಯನ್ನು ಮುಂದೂಡಬೇಕೆಂದು ಕೆಲವು ಪೋಷಕರು, ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳಿಂದ ಮನವಿಗಳು ಸ್ವೀಕೃತವಾದವು.
ಸದರಿ ಮನವಿಗಳ ಕುರಿತು ಇಲಾಖೆಯ ಹಿರಿಯ ಅಧಿಕಾರಿಗಳು, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರೊಂದಿಗೆ ಸುಧೀರ್ಘವಾಗಿ ಚರ್ಚಿಸಿ, ಪ್ರಾಯೋಗಿಕ ಪರೀಕ್ಷೆಯನ್ನು ಮುಂದೂಡಲು ತೀರ್ಮಾನಿಸಲಾಯಿತು. ಮುಂದುವರೆದು, 2020-21ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳನ್ನು ಉಲ್ಲೇಖ-2ರ ಸುತ್ತೋಲೆಯಲ್ಲಿ ನೀಡಿದ ನಿರ್ದೇಶನದಂತೆ ಆಯಾ ಕಾಲೇಜುಗಳಲ್ಲೇ ತಾತ್ವಿಕ ಪರೀಕ್ಷೆಗಳು ಮುಕ್ತಾಯಗೊಂಡ ಕೂಡಲೇ 2 ದಿನಗಳ ನಂತ್ರ ಪ್ರಾರಂಭಿಸಲು ಆದೇಶಿಸಿದ್ದಾರೆ.