ಬೆಂಗಳೂರು: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಏರಿಕೆ ಒಂದು ವರ್ಷದ ಸಂಭ್ರಮದಲ್ಲಿರುವಾಗಲೇ ಹೈಕಮಾಂಡ್ ನಾಯಕರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಶಾಕ್ ನೀಡಿದ್ದಾರೆ.
ಬಿಜೆಪಿ ಹೈಕಮಾಂಡ್, ರಾಜ್ಯ ಬಿಜೆಪಿ ಘಟಕಕ್ಕೆ ಗೊತ್ತಿಲ್ಲದೆ ನಿಗಮ ಮಂಡಳಿಗೆ ಶಾಸಕರನ್ನು ಯಡಿಯೂರಪ್ಪ ನೇಮಕ ಮಾಡಿದ್ದಾರೆ. ಈಗ ಪಕ್ಷ, ಸಂಘದ ನಿಷ್ಠಾವಂತ ಕಾರ್ಯಕರ್ತರಿಗೂ ಮಣೆ ಹಾಕದೇ ನೇಮಿಸಿದ್ದು ಸರಿಯಲ್ಲ ಎಂದು ಬಿಜೆಪಿ ರಾಜ್ಯ ಘಟಕ ಅಸಮಾಧಾನ ವ್ಯಕ್ತಪಡಿಸಿದೆ.
ಪಕ್ಷಕ್ಕೆ ಸಂಬಂಧಿಸಿದ ಯಾವುದೇ ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಮುನ್ನ ಪಕ್ಷದ ನಾಯಕರ ಜೊತೆ ಚರ್ಚಿಸಲಾಗುತ್ತದೆ. ಆದರೆ ಪಕ್ಷದ ಕೋರ್ ಕಮಿಟಿಯಲ್ಲೂ ಚರ್ಚಿಸದೇ ನಿಗಮ ಮಂಡಳಿಗೆ ಯಡಿಯೂರಪ್ಪ ನೇಮಕ ಮಾಡಿದ್ದು ಹಿರಿಯ ನಾಯಕರ ಅಸಮಾಧಾನಕ್ಕೆ ಕಾರಣವಾಗಿರುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ.ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಮುಖ್ಯಮಂತ್ರಿ ಯಡಿಯೂರಪ್ಪನವರ ಪಕ್ಕದಲ್ಲೇ ಕುಳಿತಿದ್ದರು. ಆಗಲೂ ನಿಗಮ ಮಂಡಳಿ ನೇಮಕ ವಿಚಾರ ನಳೀನ್ ಕುಮಾರ್ ಕಟೀಲ್ ಅವರಿಗೆ ಗೊತ್ತಿರಲಿಲ್ಲ. ಆದರೆ ವಿಧಾನಸೌಧದಿಂದ ಹೊರಡುವ ಮೊದಲು ಯಡಿಯೂರಪ್ಪ ನಿಗಮ ಮಂಡಳಿಯ ಪಟ್ಟಿಯನ್ನು ಬಿಡುಗಡೆ ಮಾಡಿ ನಾಯಕರಿಗೆ ಶಾಕ್ ನೀಡಿದ್ದಾರೆ.