ಜನತಾ ಕರ್ಫ್ಯೂ ವಿಫಲವಾಗಿದೆ ಎಂದು ಸಚಿವರು, ಆರೋಗ್ಯ ತಜ್ಞರು ಹೇಳಿಕೆಗಳ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಚಿವರ ಸಭೆ ಕರೆದಿದ್ದು ಲಾಕ್ ಡೌನ್ ವಿಧಿಸುವ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.
ಶುಕ್ರವಾರ ಸಂಜೆ ಮುಖ್ಯಮಂತ್ರಿ ಬಿಎಸ್ ವೈ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಮಹತ್ವದ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ಸಚಿವರು, ಹಿರಿಯ ಅಧಿಕಾರಿಗಳು ಭಾಗಿಯಾಗಲಿದ್ದು, ಕೋವಿಡ್ ನಿಯಂತ್ರಣ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ 300ಕ್ಕೂ ಅಧಿಕ ಕೊರೊನಾ ಸಾವು ಪ್ರಕರಣಗಳು ವರದಿಯಾಗುತ್ತಿವೆ. ಅಲ್ಲದೇ 50 ಸಾವಿರ ಮೇಲ್ಪಟ್ಟು ಸೋಂಕು ಪ್ರಕರಣಗಳು ವರದಿಯಾಗುತ್ತಿವೆ.
ಈ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆ 6 ಗಂಟೆಗೆ ಸಿಎಂ ನಿವಾಸ ಕಾವೇರಿಯಲ್ಲಿ ಗಂಭೀರ ಚರ್ಚೆ ನಡೆಯಲಿದ್ದು, ಸಭೆಯಲ್ಲಿ ಸಂಪೂರ್ಣ ಲಾಕ್ ಡೌನ್ ವಿಧಿಸುವ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.
ಕೇಂದ್ರ ಸಚಿವ ಸದಾನಂದ ಗೌಡ ಸಂಪೂರ್ಣ ಲಾಕ್ ಡೌನ್ ಬಗ್ಗೆ ಒಲವು ವ್ಯಕ್ತಪಡಿಸಿದ್ದಾರೆ. ಸ್ವತಃ ಆರೋಗ್ಯ ಸಚಿವ ಸುಧಾಕರ್ ಜನತಾ ಲಾಕ್ ಡೌನ್ ವಿಫಲವಾಗಿರುವುದನ್ನು ಒಪ್ಪಿಕೊಂಡಿದ್ದಾರೆ. ಸಚಿವ ಎಸ್.ಟಿ. ಸೋಮಶೇಖರ್ ಬೆಳಿಗ್ಗೆ 6ರಿಂದ 10 ಗಂಟೆಯವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ ಕೊಟ್ಟಿರುವುದು ಎಡವಟ್ಟಾಗಿದೆ ಎಂದು ಹೇಳಿದ್ದಾರೆ.