ಬೆಳಗಾವಿ: ವಿರೋಧ ಪಕ್ಷದವರ ಒತ್ತಡದಿಂದ ಮತ್ತು ಜನರಿಗೆ ಪ್ಯಾಕೇಜ್ ಕೊಟ್ಟಿದ್ದೇವೆ ಎಂದು ಬಿಂಬಿಸಿಕೊಳ್ಳುವುದಕ್ಕಾಗಿ ಮಾತ್ರ ರಾಜ್ಯ ಸರ್ಕಾರ ಪ್ಯಾಕೇಜ್ ಘೋಷಣೆ ಮಾಡಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆರೋಪಿಸಿದರು.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಘೋಷಣೆ ಮಾಡಿರುವ ಕೋವಿಡ್ ಪ್ಯಾಕೇಜ್ ನಲ್ಲಿ ಜನರಿಗೆ ಅನುಕೂಲವಾಗುವ ಯೋಜನೆಗಳು ಇಲ್ಲ. ಕೇವಲ ಕಾಟಾಚಾರಕ್ಕಾಗಿ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ತಮಿಳುನಾಡಿನಲ್ಲಿ ಪ್ರತಿಯೊಬ್ಬರಿಗೂ 4,000 ರೂ. ಘೋಷಣೆ ಮಾಡಿದ್ದಾರೆ. ಆಂಧ್ರಪ್ರದೇಶದಲ್ಲಿ ಸರ್ಕಾರಿ ಹಾಗೂ ಖಾಸಗಿ ಸೇರಿ ಎಲ್ಲ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡುವ ಘೋಷಣೆ ಮಾಡಿದ್ದಾರೆ. ಇಲ್ಲಿಯೂ ಅದೇ ರೀತಿಯ ಸೌಲಭ್ಯ ಕೊಡಬೇಕು ಎಂದರು.
ಬೆಳಗಾವಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಸಾಕಷ್ಟು ಬೆಡ್ ಗಳಿವೆ. ಆದರೆ, ಸಿಬ್ಬಂದಿ ಹಾಗೂ ಆಕ್ಸಿಜನ್ ಕೊರತೆ ಇದ್ದು, ಸರ್ಕಾರ ತಕ್ಷಣ ಸಿಬ್ಬಂದಿ ನೇಮಿಸಿ, ಆಕ್ಸಿಜನ್ ಪೂರೈಸಬೇಕು ಎಂದು ಹೇಳಿದರು.
ರಾಜ್ಯ ಸರ್ಕಾರ ಬೆಂಗಳೂರು ನಗರಕ್ಕೆ ಮಾತ್ರ ಸೀಮಿತವಾಗಿದೆ. ಗ್ರಾಮೀಣ ಭಾಗದಲ್ಲಿ ಕೋವಿಡ್ ಸೋಂಕು ಹೆಚ್ಚಾಗುತ್ತಿದೆ. ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಸರ್ಕಾರಕ್ಕೆ ಸೋಂಕು ತಡೆಗಟ್ಟುವ ಇಚ್ಛಾಶಕ್ತಿಯೇ ಇಲ್ಲ. ಸರ್ಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಹಾಗೂ ಆಕ್ಸಿಜನ್ ನೀಡದೆ ಹೊರತು. ಯಾವುದೇ ರೀತಿ ಸೌಲಭ್ಯಗಳನ್ನು ಪಡೆಯಲು ಆಗುವುದಿಲ್ಲ. ಆದ ಕಾರಣ ತಕ್ಷಣ ಸಿಬ್ಬಂದಿ ಹಾಗೂ ಆಕ್ಸಿಜನ್ ಒದಗಿಸಬೇಕು ಎಂದು ಹೇಳಿದರು.
ಕೋವಿಡ್ ಎರಡನೇ ಅಲೆ ನಗರ ಪ್ರದೇಶಕ್ಕಿಂತ ಗ್ರಾಮೀಣ ಪ್ರದೇಶದಲ್ಲಿ ವ್ಯಾಪಕವಾಗಿ ಹರಡುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿನ ಜನರ ಜಾಗೃತಿ ಮೂಡಿಸದೇ ಇರುವುದು, ಮದುವೆ, ಜಾತ್ರೆ, ಅಂತ್ಯಕ್ರಿಯೆ ಅಂತಹ ಕಾರ್ಯಗಳಲ್ಲಿ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಇರುವುದು ಕಾರಣವಾಗಿದೆ. ಆದ ಕಾರಣ ಸರ್ಕಾರ ಇವುಗಳನ್ನು ತಡೆಯುವ ನಿಟ್ಟಿನಲ್ಲಿಯೂ ಕ್ರಮ ತೆಗೆದುಕೊಳ್ಳಬೇಕು. ತಜ್ಞರು ಕೋವಿಡ್ ಮೂರನೇ ಅಲೇ ಇದೆ ಎಂದು ಸರ್ಕಾರಕ್ಕೆ ಮಾಹಿತಿ ನೀಡಿದ್ದಾರೆ. ಆದ ಕಾರಣ ಈ ಅಲೆ ತಡೆಯಲು ಸರ್ಕಾರ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು ಎಂದು ಈ ಹಿನ್ನೆಲೆಯಲ್ಲಿ ಹೇಳಿದರು.
ಸರ್ಕಾರ ಎಲ್ಲ ಕೆಲಸಗಳನ್ನು ಬಿಟ್ಟು ಕೋವಿಡ್ ನಿಯಂತ್ರಣಕ್ಕೆ ಹೆಚ್ಚು ಒತ್ತು ಕೋಡಬೇಕು. ಜಿಲ್ಲಾಸ್ಪತ್ರೆಗಳ ಜೊತೆಗೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳಲ್ಲಿ ಬೆಡ್ ಗಳನ್ನು ಹೆಚ್ಚಿಸಿ, ಆಕ್ಸಿಜನ್ ಪೂರೈಕೆ ಮಾಡಬೇಕು ಎಂದು ಸರ್ಕಾರಕ್ಕೆ ಸಲಹೆ ನೀಡಿದರು.
ಜಿಲ್ಲಾ ಉಸ್ತುವಾರಿ ಸಚಿವರು ಕೂಡಲೇ ಜಿಲ್ಲೆಯ ವಿರೋಧ ಪಕ್ಷದ ಶಾಸಕರು , ಮಾಜಿ ಶಾಸಕರು ಹಾಗೂ ಇನ್ನಿತರ ಚುನಾಯಿತ ಜನಪ್ರತಿನಿಧಿಗಳ ಸಭೆ ಕರೆದು, ಕೊರೊನಾ ನಿಯಂತ್ರಣಕ್ಕೆ ಪರಿಹಾರ ಕಂಡುಕೊಳ್ಳಬೇಕು. ನಾವು ಸಹ ಎಲ್ಲ ರೀತಿಯ ಸಹಕಾರ ನೀಡಲಿದ್ದೇವೆ. ಕೇವಲ ಅಧಿಕಾರಿಗಳೊಂದಿಗೆ ಸಭೆ ಮಾಡುವುದರಿಂದ ಪ್ರಯೋಜನ ಇಲ್ಲ ಎಂದು ಹೇಳಿದರು.