Breaking News
Home / ಜಿಲ್ಲೆ / ಬೆಳಗಾವಿ / ಬೆಳಗಾವಿಯಲ್ಲಿ ಸದ್ಯಕ್ಕಿಲ್ಲ ಪ್ರವಾಹ ಭೀತಿ ಎಂದ ಜಿಲ್ಲಾಧಿಕಾರಿ,ವಿವಿಧ ಜಿಲ್ಲೆಗಳ ಜೊತೆ ಸಂವಾದ ನಡೆಸಿದ B.S.Y.

ಬೆಳಗಾವಿಯಲ್ಲಿ ಸದ್ಯಕ್ಕಿಲ್ಲ ಪ್ರವಾಹ ಭೀತಿ ಎಂದ ಜಿಲ್ಲಾಧಿಕಾರಿ,ವಿವಿಧ ಜಿಲ್ಲೆಗಳ ಜೊತೆ ಸಂವಾದ ನಡೆಸಿದ B.S.Y.

Spread the love

ಬೆಳಗಾವಿ : ಮಹಾರಾಷ್ಟ್ರದ ಜಲಾಶಯಗಳಿಂದ ನೀರು ಬಿಡುಗಡೆ ಮಾಡುವ ಕುರಿತು ಮುಂಚಿತವಾಗಿಯೇ ಮಾಹಿತಿ ನೀಡಲಾಗುವುದು ಎಂದು ನೆರೆಯ ಮಹಾರಾಷ್ಟ್ರದ ನೀರಾವರಿ ಇಲಾಖೆಯ ಸಚಿವರು ತಿಳಿಸಿದ್ದಾರೆ. ಇದರಿಂದ ಪ್ರವಾಹ ಸ್ಥಿತಿಯ ಸಮರ್ಪಕ ನಿರ್ವಹಣೆಗೆ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.
ಪ್ರವಾಹ ಸಿದ್ಧತೆ ಕುರಿತು ಬೆಳಗಾವಿ ಸೇರಿದಂತೆ ರಾಜ್ಯದ 20 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಶನಿವಾರ (ಜೂ.19) ನಡೆದ ವಿಡಿಯೋ ಸಂವಾದದಲ್ಲಿ ಅವರು ಮಾತನಾಡಿದರು.
ಜಲಾಶಯಗಳಿಂದ ನೀರು ಬಿಡುಗಡೆ ಕುರಿತ ಮಾಹಿತಿ ವಿನಿಮಯಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ನೀರಾವರಿ ಇಲಾಖೆಯ ಸಚಿವರ ಜತೆ ಮಾತುಕತೆ ನಡೆಸಲಾಗಿದೆ.
ನೀರು ಬಿಡುಗಡೆ ಕುರಿತು ಮುಂಚಿತವಾಗಿಯೇ ಮಾಹಿತಿ ನೀಡಲಾಗುವುದು ಎಂದು ಅವರು ತಿಳಿಸಿರುತ್ತಾರೆ.
ಮಹಾರಾಷ್ಟ್ರದಿಂದ ಬಿಡುಗಡೆಯಾದ ನೀರು ಬೆಳಗಾವಿ ಮತ್ತಿತರ ನದಿಪಾತ್ರದ ಜಿಲ್ಲೆಗಳಿಗೆ ತಲುಪಲು ಒಂದು ದಿನ ಬೇಕಾಗುವುದರಿಂದ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಲು ಸಮಯಾವಕಾಶ ದೊರಕಲಿದೆ.
ಆದ್ದರಿಂದ ಜಲಾಶಯಗಳಿಂದ ನೀರು ಬಿಡುಗಡೆ ಹಾಗೂ ನೀರಿನಮಟ್ಟದ ಕುರಿತು ನಿರಂತರ ನಿಗಾ ವಹಿಸಬೇಕು ಮತ್ತು ಪರಸ್ಪರ ಮಾಹಿತಿ ವಿನಿಮಯ ಮಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ‌.ಎಸ್.ಯಡಿಯೂರಪ್ಪ ಅವರು ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
ಬೆಳಗಾವಿ ಜಿಲ್ಲೆಯ ಪ್ರಸ್ತುತ ಸನ್ನಿವೇಶದ ಮಾಹಿತಿಯನ್ನು ಪಡೆದುಕೊಂಡ ಮುಖ್ಯಮಂತ್ರಿಗಳು, ಜನರು ಮತ್ತು ಜಾನುವಾರುಗಳ ರಕ್ಷಣೆ ಮತ್ತು ತಾತ್ಕಾಲಿಕ ಪುನರ್ವಸತಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.
ಪ್ರವಾಹ ಪರಿಸ್ಥಿತಿ ಇಲ್ಲ: ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ:
ಎರಡು ದಿನಗಳಿಂದ ಹೆಚ್ಚಿನ ಮಳೆಯಾಗಿದೆ. ಆದರೆ ಪ್ರವಾಹ ಸ್ಥಿತಿ ಉದ್ಭವಿಸಿಲ್ಲ. ವೇದಗಂಗಾ ನದಿ ಮಾತ್ರ ಸ್ವಲ್ಪಮಟ್ಟಿಗೆ ಹೆಚ್ಚಿನ ಪ್ರಮಾಣದಲ್ಲಿ ಭರ್ತಿಯಾಗಿದೆ. ನದಿಪಾತ್ರದ ನಾಲ್ಕು ಗ್ರಾಮಗಳ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು.
ಕಳೆದ ಎರಡು ವರ್ಷಗಳ ಅನುಭವದ ಆಧಾರದ ಮೇಲೆ 208 ಗ್ರಾಮ ಪಂಚಾಯತಿ ಮಟ್ಟದಲ್ಲಿ ರಚಿಸಲಾಗಿರುವ ಪ್ರವಾಹ ನಿರ್ವಹಣಾ ತಂಡಗಳ ಸದಸ್ಯರಿಗೆ ಈಗಾಗಲೇ ಅಗತ್ಯ ತರಬೇತಿ ನೀಡಲಾಗಿದೆ. ತಾಲ್ಲೂಕು ಮಟ್ಟದ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.
26 ಬೋಟ್ ಗಳು ಲಭ್ಯವಿದ್ದು, ನದಿತೀರದ ಗ್ರಾಮಗಳಲ್ಲಿ ತುರ್ತು ರಕ್ಷಣಾ ಕಾರ್ಯ ಕೈಗೊಳ್ಳಲು 2 ಎಸ್.ಡಿ.ಆರ್. ಎಫ್. ಹಾಗೂ ಒಂದು ಎನ್.ಡಿ.ಆರ್.ಎಫ್. ತಂಡಗಳು ಜಿಲ್ಲೆಯಲ್ಲಿ ಬೀಡು ಬಿಟ್ಟಿವೆ.
ಕಾಳಜಿ ಕೇಂದ್ರದ ಸಮೀಪದಲ್ಲಿ 230 ಜಾನುವಾರು ಶಿಬಿರಗಳನ್ನು ಗುರುತಿಸಲಾಗಿದೆ. ಸಾಕಷ್ಟು ಮೇವು ದಾಸ್ತಾನು ಕೂಡ ಇದೆ.
ಪಿಡಿ ಖಾತೆ 92 ಕೋಟಿ ರೂಪಾಯಿ ಲಭ್ಯವಿದ್ದು, ಪ್ರವಾಹ ಮತ್ತಿತರ ತುರ್ತು ಪರಿಸ್ಥಿತಿ ನಿರ್ವಹಣೆಗೆ ಯಾವುದೇ ರೀತಿಯ ಹಣಕಾಸಿನ ತೊಂದರೆಗಳು ಇಲ್ಲ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಮುಖ್ಯಮಂತ್ರಿಗಳಿಗೆ ವಿವರಿಸಿದರು.
ಮೂಲಸೌಕರ್ಯ ದುರಸ್ತಿಗೆ ಸಾವಿರ ಕೋಟಿ ನೀಡಲು ಮನವಿ:
ಕಳೆದ ಬಾರಿ ಪ್ರವಾಹದಿಂದ ಬೆಳಗಾವಿ ಸೇರಿದಂತೆ ರಾಜ್ಯದಾದ್ಯಂತ ರಸ್ತೆ, ಸೇತುವೆ ಮತ್ತಿತರ ಮೂಲಸೌಕರ್ಯಗಳಿಗೆ ಅಪಾರ ಪ್ರಮಾಣದ ಹಾನಿಯಾಗಿದೆ.
ರಾಜ್ಯದಾದ್ಯಂತ 2021-22 ಸಾಲಿನಲ್ಲಿ ಕೂಡ ಅನೇಕ ಮೂಲಸೌಕರ್ಯ ದುರಸ್ತಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಲೋಕೋಪಯೋಗಿ ಇಲಾಖೆಗೆ ಕನಿಷ್ಠ ಒಂದು ಸಾವಿರ ಕೋಟಿ ನೀಡಬೇಕು ಎಂದು ಉಪ ಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಇಲಾಖೆಯ ಸಚಿವ ಗೋವಿಂದ ಕಾರಜೋಳ ಮನವಿ ಮಾಡಿಕೊಂಡರು.
ಉಪ ಮುಖ್ಯಮಂತ್ರಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಕಂದಾಯ ಇಲಾಖೆಯ ಸಚಿವ ಆರ್.ಅಶೋಕ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೇರಿದಂತೆ ವಿವಿಧ ಇಲಾಖೆಗಳ ಸಚಿವರು ಉಪಸ್ಥಿತರಿದ್ದರು.
ಪ್ರಾದೇಶಿಕ ಆಯುಕ್ತರಾದ ಆಮ್ಲಾನ್ ಆದಿತ್ಯ ಬಿಸ್ವಾಸ್, ನಗರ ಪೊಲೀಸ್ ಆಯುಕ್ತರಾದ ಡಾ.ಕೆ.ತ್ಯಾಗರಾಜನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ದರ್ಶನ್ ಎಚ್.ವಿ., ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ವಿಡಿಯೋ ಸಂವಾದದಲ್ಲಿ ಭಾಗವಹಿಸಿದ್ದರು.
ರಾಜ್ಯದಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ವಾಡಿಕೆ ಮಳೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದೆ.
ಮಂಡ್ಯ ಹೊರತುಪಡಿಸಿ ಎಲ್ಲ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದೆ ಎಂದು ಅಧಿಕಾರಿಗಳು ಸಭೆಯ ಆರಂಭದಲ್ಲಿ ವಿವರಣೆ ನೀಡಿದರು.

Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ