ಬೆಂಗಳೂರು: ಜೂನ್ 25ರಿಂದ ಜುಲೈ 3ರವರೆಗೆ ನಡೆದ 2019-20ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ವಿದ್ಯಾರ್ಥಿಗಳು, ಪೋಷಕರು, ವಿವಿಧ ಇಲಾಖೆಗಳು ಮತ್ತು ಜಿಲ್ಲಾಡಳಿತಗಳ ಸಹಕಾರದೊಂದಿಗೆ ಅತ್ಯಂತ ಯಶಸ್ವಿಯಾಗಿ ನಡೆದಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಆರನೇ ದಿನದ ಪರೀಕ್ಷೆಯ ನಂತರ ಶುಕ್ರವಾರ ಸಂಜೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಆರು ದಿನಗಳ ಅವಧಿಯ ಪರೀಕ್ಷೆಗಳಲ್ಲಿ ಪ್ರತಿದಿನ ಸರಾಸರಿ 7.5 ಲಕ್ಷ ವಿದ್ಯಾಥಿಗಳು ಯಾವುದೇ ಸಮಸ್ಯೆಯಿಲ್ಲದ ರೀತಿಯಲ್ಲಿ ಪರೀಕ್ಷೆಗಳನ್ನು ಧೈರ್ಯವಾಗಿ ಅತ್ಯಂತ ಸುರಕ್ಷಿತ ವಾತಾವರಣದಲ್ಲಿ ಎದುರಿಸಿದ್ದಾರೆ ಎಂದು ಹೇಳಿದರು.
ಈಗಾಗಲೇ ಹೇಳಿದಂತೆ ನಮಗೆ ಇಂತಹ ಸಂಕಷ್ಟದ ಸಂದರ್ಭದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳನ್ನು ನಡೆಸುವುದು ಬಹುದೊಡ್ಡ ಸವಾಲಾಗಿತ್ತು. ಅದು ನಮ್ಮ ಪ್ರತಿಷ್ಠೆಯ ಪ್ರಶ್ನೆಯಾಗದೇ ವಿದ್ಯಾರ್ಥಿಗಳ ಹಿತ ಹಾಗೂ ಸುರಕ್ಷತೆಯೇ ಮುಖ್ಯವಾಗಿತ್ತು. ಆ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ನಾವು ಸರ್ಕಾರದ ಪ್ರಯತ್ನವಾಗಿ ಬಹು ಯಶಸ್ವಿಯಾಗಿ ನಿರ್ವಹಿಸಿದ್ದೇವೆ. ಇದು ನನಗೆ ನಿಜಕ್ಕೂ ಹೆಮ್ಮೆ ಹಾಗೂ ಅಭಿಮಾನದ ಸಂಗತಿಯಾಗಿದೆ ಎಂದು ಅವರು ಹೇಳಿದರು.
ಕರ್ನಾಟಕ ಸರ್ಕಾರ ಈ ಪರೀಕ್ಷೆಗಳನ್ನು ನಡೆಸುವ ಮೂಲಕ ಒಂದು ಇತಿಹಾಸವನ್ನು ಸೃಷ್ಟಿಸಿದೆ. ನ್ಯಾಯಾಲಯಗಳಲ್ಲಿ ಪರೀಕ್ಷೆಗಳನ್ನು ರದ್ದುಪಡಿಸಬೇಕೆಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಸಲ್ಲಿಕೆಯಾದವು. ಆಗಲೇ ನಾನು ರಾಜ್ಯಾದ್ಯಂತ ಕೋವಿಡ್ ಸಮಯವೆಂದೂ ಲೆಕ್ಕಿಸದೇ ಸಂಚರಿಸಲು ಶುರು ಮಾಡಿದೆ. ನಾನು ಭೇಟಿ ಮಾಡಿದ ಅಸಂಖ್ಯ ವಿದ್ಯಾರ್ಥಿಗಳು ಮತ್ತು ಪೋಷಕರು ತಮ್ಮ ಮಕ್ಕಳ ಭವಿಷ್ಯಕ್ಕೆ ಪರೀಕ್ಷೆ ಬೇಕು ಎಂದು ನನ್ನನ್ನು ಆಗ್ರಹಿಸಿದರು. ನಮ್ಮ ಜಿಲ್ಲೆಗಳ ಅಧಿಕಾರಿಗಳು ಎಂತಹ ಸಂದರ್ಭದಲ್ಲಿಯೂ ತಾವು ದೃತಿಗೆಡದೇ ಈ ಪರೀಕ್ಷೆಗಳನ್ನು ನಡೆಸುತ್ತೇವೆ ಎಂದು ಆತ್ಮವಿಶ್ವಾಸವನ್ನು ತೋರಿದರು. ಪುನಃ ನಾನು ಬೆಂಗಳೂರಿಗೆ ವಾಪಾಸು ಬಂದು ಉಚ್ಛ ನ್ಯಾಯಾಲಯದಲ್ಲಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾ ಮಾಡುವ ನಿಟ್ಟಿನಲ್ಲಿ ಭರವಸೆಯ ಉತ್ತರಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲು ನಮ್ಮ ಅಧಿಕಾರಿಗಳಿಗೆ ಸೂಕ್ತ ಸೂಚನೆಗಳನ್ನು ನೀಡಿದೆ ಎಂದು ಸುರೇಶ್ ಕುಮಾರ್ ಪರೀಕ್ಷೆಗೆ ಸಂಬಂಧಿಸಿದ ವಿವಿಧ ಮಜಲುಗಳನ್ನು ವಿವರಿಸಿದರು.
ಆರೋಗ್ಯ ಇಲಾಖೆ ಕಟ್ಟುನಿಟ್ಟಾದ ಮಾರ್ಗದರ್ಶಿ ಸೂತ್ರಗಳನ್ನು ನಮಗಾಗಿ ರಚಿಸಿಕೊಟ್ಟಿತು. ಆ ಮಾರ್ಗದರ್ಶಿ ಸೂತ್ರಗಳ ಮೇಲೆ ನ್ಯಾಯಾಲಯವು ಭರವಸೆಯನ್ನಿಟ್ಟು, ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ತಿರಸ್ಕರಿಸಿ ಪರೀಕ್ಷೆಗಳನ್ನು ನಡೆಸಲು ಅವಕಾಶ ಕೊಟ್ಟಿತು. ಅದೇ ರೀತಿ ಮುಂದಿನ ದಿನಗಳಲ್ಲಿ ಸರ್ವೋಚ್ಛ ನ್ಯಾಯಾಲಯದಲ್ಲೂ ಸಹ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಯಿತು. ಅಲ್ಲಿಯೂ ಸಹ ಸೂಕ್ತ ಆಕ್ಷೇಪಣಾ ಹೇಳಿಕೆಗಳನ್ನು ಸಲ್ಲಿಸಿದ ಬಳಿಕ ಸರ್ವೋಚ್ಛ ನ್ಯಾಯಾಲಯ ಪರೀಕ್ಷೆಗಳನ್ನು ನಡೆಸಲು ತನ್ನ ಹಸಿರು ನಿಶಾನೆ ತೋರಿಸಿತು ಎಂದು ಅವರು ಹೇಳಿದರು.
ನಂತರ ನಮ್ಮಲ್ಲಿ ಘಟಿಸಿದ್ದು ಇತಿಹಾಸ. ಪ್ರತಿ ವಿದ್ಯಾರ್ಥಿಗೆ ಪರೀಕ್ಷೆ ಬರೆಯುವ ಸುರಕ್ಷಿತ ವಾತಾವರಣವನ್ನು ನಾವು ಕಲ್ಪಿಸಬೇಕಾಗಿತ್ತು. ಪ್ರತಿ ಪೋಷಕರಿಗೆ ತಮ್ಮ ಮಗು ತಮ್ಮ ಮನೆಯಲ್ಲಿನ ಸುರಕ್ಷಿತ ವಾತಾವರಣದಷ್ಟೇ ಪರೀಕ್ಷಾ ಕೊಠಡಿ ಸುರಕ್ಷಿತವಾಗಿರುತ್ತದೆ ಎಂಬ ಭರವಸೆ ನೀಡಬೇಕಾಗಿತ್ತು. ನಮ್ಮ ಅಧಿಕಾರಿಗಳು ಪ್ರತಿ ಸೂಕ್ಷ್ಮ ಅಂಶಗಳನ್ನೂ ಗಮನದಲ್ಲಿಟ್ಟುಕೊಂಡು ಆರೋಗ್ಯ ಇಲಾಖೆಯ ಮಾರ್ಗದರ್ಶಿ ಸೂತ್ರಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಯಾವುದೇ ಒಬ್ಬ ವಿದ್ಯಾರ್ಥಿಗೆ ತೊಂದರೆಯಾಗದ ರೀತಿಯಲ್ಲಿ ಪರೀಕ್ಷೆಗಳನ್ನು ನಡೆಸಬೇಕಿತ್ತು. ನನ್ನ ಭರವಸೆಯನ್ನು ಅವರಾರು ಹುಸಿಗೊಳಿಸಲಿಲ್ಲ ಎಂದು ಸಚಿವರು ತಿಳಿಸಿದರು.
ಪ್ರತಿ ಪರೀಕ್ಷೆಗೆ ಸರಾಸರಿ ಶೇ. 98 ವಿದ್ಯಾರ್ಥಿಗಳು ಹಾಜರಾಗಿ ವ್ಯವಸ್ಥೆಯ ಮೇಲಿನ ಭರವಸೆಯನ್ನು ತೋರಿದ್ದಾರೆ. ನೆರೆ ರಾಜ್ಯಗಳಾದ ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ, ಪುದುಚೇರಿ, ಮಹಾರಾಷ್ಟ್ರಗಳು ಸೇರಿದಂತೆ ಬಹುಪಾಲು ರಾಜ್ಯ ಸರ್ಕಾರಗಳು ತಮ್ಮ ಮಂಡಳಿಗಳ ಪರೀಕ್ಷೆಗಳನ್ನು ಮಾಡದೇ ಹಿಂದೆ ಸರಿದವು. ನಾಡಿನ ಮಕ್ಕಳ ಹಿತ ಮತ್ತು ಅವರ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಅವರ ಇಚ್ಛೆಯಂತೆ ನಾವು ಪರೀಕ್ಷೆಗಳನ್ನು ನಡೆಸಿದ್ದೇವೆ ಎಂದು ಸುರೇಶ್ ಕುಮಾರ್ ತಿಳಿಸಿದರು.
ಕೋವಿಡ್ ಕಾರಣಕ್ಕೆ ನಾವು ದೂರದರ್ಶನದ ಚಂದನ ವಾಹಿನಿಯಲ್ಲಿ ನಡೆಸಿದ ಪುನರ್‌ಮನನ ಕಾರ್ಯಕ್ರಮಗಳು ಆ ವಾಹಿನಿಯ ಸಾರ್ವಕಾಲೀಕ ಜನಪ್ರಿಯ ಕಾರ್ಯಕ್ರಮಗಳಲ್ಲಿ ಒಂದಾದವು. ಲಕ್ಷಾಂತರ ವಿದ್ಯಾರ್ಥಿಗಳು ಆ ಪ್ರಯತ್ನದ ಫಲವನ್ನು ಪಡೆದವು. ಅದೇ ರೀತಿ ಆಕಾಶವಾಣಿಯಲ್ಲಿ ಪರೀಕ್ಷಾ ಪೂರ್ವ ಸಿದ್ಧತಾ ತರಗತಿಗಳು ಬಿತ್ತರಗೊಂಡವು. ನಮ್ಮ ಮಕ್ಕಳವಾಣಿ ಯೂ-ಟ್ಯೂಬ್ ಚಾನೆಲ್‍ನಲ್ಲೂ ಸಹ ಪುನರ್‌ಮನನ ತರಗತಿಗಳು ಬಿತ್ತರಗೊಂಡು ಜನಪ್ರಿಯತೆ ಗಳಿಸಿದವು ಎಂದು ಅವರು ತಿಳಿಸಿದರು.