Breaking News

ಸಕಲ ಸರ್ಕಾರಿ ಗೌರವಗಳೊಂದಿಗೆ ಹುಟ್ಟೂರಲ್ಲಿ ಶಾಸಕ ಬಿ.ಸತ್ಯನಾರಾಯಣ್ ಅಂತ್ಯಕ್ರಿಯೆ

Spread the love

ತುಮಕೂರು, ಆ.5-ನಿನ್ನೆ ನಿಧನರಾದ ಜೆಡಿಎಸ್ ಶಾಸಕ ಬಿ.ಸತ್ಯನಾರಾಯಣ್ ಅವರ ಅಂತ್ಯಕ್ರಿಯೆ ಅವರ ಹುಟ್ಟೂರಾದ ಭುವನಹಳ್ಳಿ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ನೆರವೇರಿತು.

ಪತ್ನಿ ಅಮ್ಮಾಜಮ್ಮ, ಪುತ್ರ ಎಸ್.ಪ್ರಕಾಶ್ ಹಾಗೂ ಐವರು ಹೆಣ್ಣುಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗದವರು ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಂಡು ಅಗಲಿದ ತಂದೆಗೆ ಅಂತಿಮ ವಿದಾಯ ಹೇಳಿದರು.

ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೇಗೌಡರು, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ, ರಾಜ್ಯ ಯುವಘಟಕದ ಅಧ್ಯಕ್ಷ ನಿಖಿಲ್‍ಕುಮಾರ್, ಶಾಸಕರಾದ ಡಿ.ಸಿ.ಗೌರಿಶಂಕರ್, ವೀರಭದ್ರಯ್ಯ, ಜಿಲ್ಲಾ ಜೆಡಿಎಸ್ ಪಕ್ಷದ ಆರ್.ಸಿ.ಆಂಜನಪ್ಪ, ಮಾಜಿ ಶಾಸಕರಾದ ತಿಮ್ಮರಾಯಪ್ಪ, ಎಂ.ಪಿ.ಕೃಷ್ಣಪ್ಪ, ಬಿ.ನಾಗರಾಜಯ್ಯ, ಜಿಪಂ ಅಧ್ಯಕ್ಷರಾದ ಲತಾ ರವಿಕುಮಾರ್, ಮಹಾನಗರ ಪಾಲಿಕೆ ಕಾರ್ಪೊರೇಟರ್ ಗಳು ಸೇರಿದಂತೆ ಹಲವು ಮುಖಂಡರು ಅಂತ್ಯ ಸಂಸ್ಕಾರದ ವೇಳೆ ಹಾಜರಿದ್ದು ಅಗಲಿದ ಮುಖಂಡನಿಗೆ ಕಂಬನಿ ಮಿಡಿದರು.

ಇದಕ್ಕೂ ಮುನ್ನ ತುಮಕೂರಿನ ಜೆಡಿಎಸ್ ಪಕ್ಷದ ಕಚೇರಿ ಆವರಣದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ನಂತರ ಕೃಷಿ ಮಾರುಕಟ್ಟೆ ಆವರಣದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರಿಗೆ ದರ್ಶನ ಮಾಡಲು ವ್ಯವಸ್ಥೆ ಕಲ್ಪಿಸಲಾಗಿತ್ತು.

ಅಪಾರ ಸಂಖ್ಯೆಯಲ್ಲಿ ಆಗಮಿಸಿದ ಅಭಿಮಾನಿಗಳು, ಬೆಂಬಲಿಗರು ಅಂತಿಮ ದರ್ಶನ ಪಡೆದು ಅಗಲಿದ ನಾಯಕನಿಗೆ ಅಂತಿಮ ವಿದಾಯ ಹೇಳಿದರು. ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಮಾಜಿ ಸಚಿವ ಟಿ.ಬಿ.ಜಯಚಂದ್ರ, ಮಾಜಿ ಶಾಸಕ ರಾಜಣ್ಣ ಸೇರಿದಂತೆ ಅನೇಕ ಗಣ್ಯರು ಸತ್ಯನಾರಾಯಣ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಸತ್ಯನಾರಾಯಣ್ ನಡೆದು ಬಂದ ಹಾದಿ: 1977ರಲ್ಲಿ ಜನತಾ ಪಕ್ಷದ ಕಾರ್ಯಕರ್ತರಾಗಿ ರಾಜಕೀಯ ಪ್ರವೇಶ ಮಾಡಿದರು. ತುಮಕೂರಿನ ಎಲ್‍ಎಲ್‍ಬಿ ಕಾಲೇಜಿನಲ್ಲಿ ನಡೆದ ಚುನಾವಣೆಯಲ್ಲಿ ಉಪಾಧ್ಯಕ್ಷರಾಗಿ ಆಯ್ಕೆಯಾದರು.

1982ರಲ್ಲಿ ಜನತಾ ಪಕ್ಷದ ತಾಲ್ಲೂಕು ಅಧ್ಯಕ್ಷರಾಗಿ ನೇಮಕವಾದರು. 1983 -89ರ ಅವಧಿಯಲ್ಲಿ ಶಿರಾ ಎಪಿಎಂಸಿ ಅಧ್ಯಕ್ಷರಾಗಿ ಆಯ್ಕೆಯಾದರು. 1984ರಲ್ಲಿ ಶಿರಾ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದರು. 1989ರಲ್ಲಿ ಜನತಾದಳ ಅಭ್ಯರ್ಥಿಯಾಗಿ ವಿಧಾಸಭಾ ಚುನಾವಣೆಗೆ ಸ್ಪರ್ಧಿಸಿ ಭರ್ಜರಿ ಜಯ ಸಾಧಿಸಿದರು.

1994ರಲ್ಲಿ ಗೆಲುವು ಸಾಧಿಸಿ ವಿಧಾನಸಭೆಗೆ ಪ್ರವೇಶಿಸಿದರು. 1996ರಲ್ಲಿ ಕಾರ್ಮಿಕ ಸಚಿವರಾಗಿ ಕೆಲಸ ಮಾಡಿದರು. 1999ರಲ್ಲಿ ಪರಾಭವಗೊಂಡರು. 2004ರಲ್ಲಿ ಮತ್ತೆ ಪುನರಾಯ್ಕೆಯಾದರು. 2018ರಲ್ಲಿ ನಡೆದ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಗೆಲುವು ಸಾಧಿಸಿದ್ದರು.

ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರದ ಅವಧಿಯಲ್ಲಿ ಕೆಎಸ್ ಆರ್‍ಟಿಸಿ ನಿಗಮದ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು


Spread the love

About Laxminews 24x7

Check Also

ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು!

Spread the love ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು! ಯಮಕನಮರಡಿ ವಿಧಾನಸಭಾ ಕ್ಷೇತ್ರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ