Breaking News
Home / ಜಿಲ್ಲೆ / ಬೆಂಗಳೂರು / ರಾಜ್ಯದಲ್ಲಿ ಇನ್ನೂ 3 ದಿನ ಮಳೆ ಹೆಚ್ಚು: 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ!

ರಾಜ್ಯದಲ್ಲಿ ಇನ್ನೂ 3 ದಿನ ಮಳೆ ಹೆಚ್ಚು: 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ!

Spread the love

ಬೆಂಗಳೂರು, ಜು. 23: ರಾಜ್ಯದಲ್ಲಿ ಮಳೆ ಅಬ್ಬರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಂದಾಯ ಸಚಿವ ಆರ್. ಅಶೋಕ್ ಅವರು ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಕುರಿತು ಮಾಹಿತಿ ಕೊಟ್ಟಿದ್ದಾರೆ. ಜೊತೆಗೆ ಮಹಾರಾಷ್ಟ್ರದಲ್ಲಿ ಮಳೆ ಹೆಚ್ಚಾಗುತ್ತಿರುವುದರ ಪರಿಣಾಮ ಕರ್ನಾಟಕ ರಾಜ್ಯದಲ್ಲಿ ಆಗುತ್ತಿದೆ. 10 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದೆ ಎಂದು ವರದಿಯಾಗಿದೆ.

ಮಳೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೂಡ ಸಂಬಂಧಿಸಿದ ಸಚಿವರುಗಳಿಗೆ ದೂವರಾಣಿ ಕರೆ ಮಾಡಿ ಸೂಚನೆ ಕೊಟ್ಟಿದ್ದಾರೆ. ಬೆಂಗಳೂರು ನಗರ ಪ್ರದಕ್ಷಿಣೆ ನಡೆಸಿ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸುವ ಸಂದರ್ಭದಲ್ಲಿಯೇ ಸಂಬಂಧಿಸಿದ ಸಚಿವರಿಗೆ ಸಿಎಂ ಸೂಚನೆ ಕೊಟ್ಟಿದ್ದರು. ಇದೇ ವೇಳೆಯಲ್ಲಿ ರಾಜ್ಯದಲ್ಲಿ ಜೊತೆಗೆ ಮಳೆಯ ಆರ್ಭಟ ಕಡಿಮೆಯಾಗುವ ಲಕ್ಷಣಗಳು ಕಂಡು ಬರುತ್ತಿಲ್ಲ.

ರಾಜ್ಯದ 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್‌ ಘೋಷಣೆ ಮಾಡಲಾಗಿದೆ. ಜೊತೆಗೆ ಉಳಿದ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ. ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆಯ ಆರ್ಭಟ ಮುಂದುವರೆಯಲಿದೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಕಂದಾಯ ಸಚಿವ ಆರ್. ಅಶೋಕ್ ಎಚ್ಚರಿಸಿದ್ದಾರೆ.

ಕೃಷ್ಣಾ ನದಿಯಲ್ಲಿ ಹೊರ ಹರಿವು ಹೆಚ್ಚಳ

“ಮಹಾರಾಷ್ಟ್ರದಲ್ಲಿಯೂ ಮಳೆ ಹೆಚ್ಚಾಗಿರುವುದರಿಂದ ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಲಿದೆ. ಆಲಮಟ್ಟಿ ಡ್ಯಾಂನಿಂದಲೂ ಹೆಚ್ಚಿನ ನೀರು ಹರಿಬಿಡಲಾಗುತ್ತಿದೆ. ಹೀಗಾಗಿ ಕೃಷ್ಣಾ ನದಿಯಯಲ್ಲಿ ನೀರಿನ ಹೊರ ಹರಿವು ಜಾಸ್ತಿ ಆಗುವ ಸಾಧ್ಯತೆ ಇದೆ” ಎಂದು ಕಂದಾಯ ಸಚಿವ ಆರ್. ಅಶೋಕ್ ಅವರು ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿರುವ ಅವರು, “ಈಗಾಗಲೇ ನಾಲ್ಕು ಎನ್‌ಡಿಆರ್‌ಎಫ್ ತಂಡಗಳನ್ನು ನಾಲ್ಕೂ ವಲಯಗಳಿಗೆ ಕಳುಹಿಸಿದ್ದೇವೆ. ಈ ಮಧ್ಯೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಇಬ್ಬರು ನದಿ ನೀರಲ್ಲಿ ಮುಳುಗಿ ಕಾಣೆಯಾಗಿದ್ದಾರೆ ಎಂಬ ಮಾಹಿತಿ ಬಂದಿದೆ” ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ಜಿಲ್ಲೆಗಳಲ್ಲಿ ಅಲರ್ಟ್‌ ಘೋಷಣೆ

ಮಳೆಯಿಂದಾಗಿ ಒಟ್ಟು 18 ತಾಲೂಕುಗಳಲ್ಲಿ ಸಮಸ್ಯೆ ಎದುರಾಗಿದೆ. ಸಂಕಷ್ಟದಲ್ಲಿರುವ ಜನರನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರ ಮಾಡುವ ಕೆಲಸ ಮಾಡಿದ್ದೇವೆ. ಜಿಲ್ಲಾಧಿಕಾರಿಗಳಿಂದ ಹಾನಿಯಾಗಿರುವ ಮಾಹಿತಿ ಪಡೆದುಕೊಳ್ಳುತ್ತಿದ್ದೇವೆ. ಜೊತೆಗೆ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗ ಅಲರ್ಟ್ ಘೋಷಣೆ ಮಾಡಿದ್ದೇವೆ. ಕಾಳಜಿ ಕೇಂದ್ರಗಳನ್ನು ತೆರೆದು ವ್ಯವಸ್ಥೆ ಮಾಡುತ್ತಿದ್ದೇವೆ. ವಾಡಿಕೆ ಮಳೆಗಿಂತ 10 ಜಿಲ್ಲೆಗಳಲ್ಲಿ ಹೆಚ್ಚು ಮಳೆ ಆಗುತ್ತಿದೆ. ಕಾಣೆಯಾದವರನ್ನು ಪತ್ತೆ ಹಚ್ಚುವುದಕ್ಕೆ ತಂಡಗಳನ್ನು ಕಳುಹಿಸಲಾಗಿದೆ” ಎಂದು ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಕಂದಾಯ ಸಚಿವ ಆರ್. ಅಶೋಕ್ ವಿವರಿಸಿದ್ದಾರೆ.

 

ಇನ್ನೂ ಮೂರು ದಿನ ಹೆಚ್ಚು ಮಳೆ

“ಇನ್ನೂ ಮೂರು ದಿನಗಳು ಹೆಚ್ಚು ಮಳೆಯಾಗಬಹುದು” ಎಂದು ಕಂದಾಯ ಸಚಿವ ಆರ್. ಅಶೋಕ್ ಅವರು ತಿಳಿಸಿದ್ದಾರೆ. ಮಳೆ ಹೆಚ್ಚಾಗುವ ಜಿಲ್ಲೆಗಳ ಜನರ ರಕ್ಷಣೆಗೆ ಈಗಾಗಲೇ ಸರ್ಕಾರ ಮುಂಜಾಗ್ರತೆ ವಹಿಸಿದೆ ಎಂದು ತಿಳಿಸಿದ್ದಾರೆ.

ಇವತ್ತು ಜುಲೈ 23ರಂದು ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಬಳಗಾವಿ, ಹಾವೇರಿ, ಚಿಕ್ಕಮಗಳೂರು, ಧಾರವಾಡ, ಹಾಸನ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಭಾರಿ ಪ್ರಮಾಣದ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಹಲವು ಭಾಗಗಳಲ್ಲಿ ಕಳೆದ 24 ಗಂಟೆಗಳಲ್ಲಿ 300 ಮಿಲಿ ಮಿಟರ್‌ಗಿಂತಲೂ ಹೆಚ್ಚು ಮಳೆಯಾಗಿದೆ. ಅಂಕೋಲ ತಾಲೂಕಿನ ಡೋಗ್ರಿ ಪಂಚಾಯಿತಿ ವ್ಯಾಪ್ತಿಯಲ್ಲಿ 541 ಮಿ.ಮೀ. ದಾಖಲೆಯ ಮಳೆಯಾಗಿದೆ. ಶಿರಸಿ ತಾಲೂಕಿನ ಹಲವು ಭಾಗಗಳಲ್ಲಿ 400 ಮಿ.ಮೀ. ಗೂ ಆಧಿಕ ಮಳೆಯಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.

 

24 ಗಂಟೆಯಲ್ಲಿ 42 ಟಿ.ಎಂ.ಸಿ. ನೀರು ಸಂಗ್ರಹ

“ರಾಜ್ಯದ ಒಟ್ಟು ಜಲಾಶಯಗಳಲ್ಲಿನ ಒಟ್ಟು ನೀರು ಸಂಗ್ರಹಣ 860 ಟಿ.ಎಂ.ಸಿ. ಪೈಕಿ ಈಗಾಗಲೇ 561.42. ಟಿ.ಎಂ.ಸಿ. ನೀರು ಅಂಗ್ರಹವಾಗಿದೆ. ಒಟ್ಟಾರೆಯಾಗಿ ಜಲಾಶಯಗಳ ನೀರು ಸಂಗ್ರಹಣೆ ಶೇಕಡಾ 65ರಷ್ಟಾಗಿದೆ. ಕಳೆದ ವರ್ಷ ಈ ವೇಳೆಗೆ ಜಲಾಶಯಗಳ ನೀರು ಸಂಗ್ರಹಣೆ ಕೇವಲ ಶೇಕಡಾ 46ರಷ್ಟಾಗಿತ್ತು. ಕಳೆದ 24 ಗಂಟೆಗಳಲ್ಲಿ ಜಲಾಶಯಗಳಿಗೆ 42 ಟಿಎಂಸಿ ನೀರು ಹರಿದು ಬಂದಿದೆ” ಎಂದು ಕಂದಾಯ ಸಚಿವ ಆರ್. ಅಶೋಕ್ ಮಾಹಿತಿ ಕೊಟ್ಟಿದ್ದಾರೆ.

ಕಳೆದ 3 ದಿನಗಳಿಂದ ಮಹಾರಾಷ್ಟ್ರದ ಕೃಷ್ಣಾ ನದಿ ಪಾತ್ರದಲ್ಲಿ ಭಾರಿ ಮಳೆ ಸುರಿಯುತ್ತಿದೆ. ಭಾರಿ ಮಳೆಯಿಂದ ಮಹಾರಾಷ್ಟ್ರ ರಾಜ್ಯದ ಎಲ್ಲಾ ಜಲಾಶಯಗಳು ಪೂರ್ಣ ಮಟ್ಟ ತಲುಪಿವೆ. ಅಧಿಕ ಪ್ರಮಾಣದ ನೀರನ್ನು ನದಿಗಳಿಗೆ ಹರಿ ಬಿಡಲಾಗುತ್ತಿದೆ. ಹೀಗಾಗಿ ನಮ್ಮ ರಾಜ್ಯದ ಜಲಾಶಯಗಳಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ ಎಂದು ಆರ್. ಅಶೋಕ್ ತಿಳಿಸಿದ್ದಾರೆ.

ಎರಡು ವರ್ಷಗಳ ಹಿಂದೆ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವಾಗಲೂ ರಾಜ್ಯಾದ್ಯಂತ ಮಳೆ ಹಾಗೂ ಪ್ರವಾಹದ ಸ್ಥಿತಿ ಊಂಟಾಗಿತ್ತು. ಇದೀಗ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಾವಣೆ ಮಾಡಲಾಗುತ್ತಿದೆ ಎನ್ನುವಾಗಲೂ ಮಳೆಯ ಆರ್ಭಟ ಹೆಚ್ಚಾಗಿರುವುದು ಕಾಕತಾಳೀಯ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ