ಬೆಂಗಳೂರು, ಜುಲೈ 27: ಕರ್ನಾಟಕದ ನೂತನ ಮುಖ್ಯಮಂತ್ರಿ ಆಗಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿಗೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಟ್ವೀಟ್ ಮೂಲಕ ಶುಭಾಷಯ ಕೋರಿದ್ದಾರೆ.
“ಪ್ರಸ್ತುತ ಸಮಸ್ಯೆಗಳ ಸುಳಿಯಲ್ಲಿ ಸಿಲುಕಿರುವ ರಾಜ್ಯಕ್ಕೆ ಪರಿಹಾರಾತ್ಮಕವಾಗಿ ಕೆಲಸ ಮಾಡುವಿರೆಂದು ನಿರೀಕ್ಷಿಸುವೆ. ನೀರಾವರಿ ವಿಚಾರಗಳಲ್ಲಿ ತಮಗೆ ಜ್ಞಾನವುಂಟು. ಅಣೆಕಟ್ಟು ನಿರ್ಮಾಣದಂಥ ವಿಷಯದಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯಗಳತ್ತ ತಾವು ಗಮನಹರಿಸುವಿರೆಂದು ಭಾವಿಸುವೆ,” ಎಂದು ಟ್ವೀಟ್ ಮಾಡಿದ್ದಾರೆ.
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಭಾರತೀಯ ಜನತಾ ಪಕ್ಷದ ಶಾಸಕಾಂಗ ಸಭೆಯಲ್ಲಿ ಬಸವರಾಯ ಬೊಮ್ಮಾಯಿರನ್ನು ರಾಜ್ಯದ ಮುಂದಿನ ಸಿಎಂ ಆಗಿ ಆಯ್ಕೆ ಮಾಡಲಾಗಿಯಿತು. ಸಿಎಂ ಆಯ್ಕೆ ದಿನವೇ ರಾಜ್ಯದಲ್ಲಿ ಮೂವರು ಉಪ ಮುಖ್ಯಮಂತ್ರಿಗಳನ್ನು ಆಯ್ಕೆ ಮಾಡಲಾಗಿದೆ. ಗೋವಿಂದ ಕಾರಜೋಳ, ಆರ್ ಅಶೋಕ್ ಹಾಗೂ ಶ್ರೀರಾಮುಲುರಿಗೆ ಉಪ ಮುಖ್ಯಮಂತ್ರಿ ಸ್ಥಾನವನ್ನು ನೀಡಲಾಗಿದೆ.
ಬುಧವಾರ ಬೆಳಗ್ಗೆ 11 ಗಂಟೆಗೆ ಪ್ರಮಾಣವಚನ:
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ರಾಜ್ಯದ ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಬಸವರಾಜ ಬೊಮ್ಮಾಯಿರನ್ನು ಪ್ರಮಾಣವಚನ ಸ್ವೀಕರಿಸಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆಹ್ವಾನಿಸಿದ್ದಾರೆ. ಕರ್ನಾಟಕ ರಾಜ್ಯದ 20ನೇ ಮುಖ್ಯಮಂತ್ರಿ ಆಗಿ ಬಸವರಾಜ ಬೊಮ್ಮಾಯಿ ಜುಲೈ 28ರ ಬೆಳಗ್ಗೆ 11 ಗಂಟೆಗೆ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
Laxmi News 24×7