ನವದೆಹಲಿ : ದೇಶದಲ್ಲಿ ಜನವರಿ 31ರಂದು ಪಲ್ಸ್‌ಪೋಲಿಯೋ ಕಾರ್ಯಕ್ರಮವನ್ನು ನಡೆಸಲು ನಿರ್ಧರಿಸಲಾಗಿದೆ.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಕುರಿತು ನಿರ್ಧಾರ ಪ್ರಕಟಿಸಿದೆ.
ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕುವ ಮೂಲಕ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಜನವರಿ 30ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಜನವರಿ 17ಕ್ಕೆ ನಿಗದಿಯಾಗಿದ್ದ ಪಲ್ಸ್ ಪೋಲಿಯಾ ಲಸಿಕೆ ಕಾರ್ಯಕ್ರಮವನ್ನು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಅನಿರ್ದಿಷ್ಟಾವಧಿಗೆ ಮುಂದೂಡಿತ್ತು.ಅನಿರೀಕ್ಷಿತ ಪರಿಸ್ಥಿತಿಗಳಿಂದಾಗಿ 2021ರ ಜನವರಿ 17ರಿಂದ ನಿಗದಿಪಡಿಸಲಾಗಿದ್ದ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲು ನಿರ್ಧರಿಸಲಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿತ್ತು.
ಕೆಲ ದಿನಗಳ ಹಿಂದಷ್ಟೇ ಹೇಳಿಕೆ ನೀಡಿದ್ದ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು, ದೇಶದಾದ್ಯಂದ ಜನವರಿ 17 ರಿಂದ 3 ದಿನಗಳ ಕಾಲ ಪಲ್ಸ್ ಪೋಲಿಯೋ ಲಸಿಕೆ ನೀಡಲಾಗುತ್ತದೆ ಎಂದು ಹೇಳಿದ್ದರು.
ಜನವರಿ 16 ರಂದು ದೇಶಾದ್ಯಂತ ಕೊವಿಡ್ ಲಸಿಕೆ ವಿತರಣಾ ಕಾರ್ಯಕ್ರಮ ನಡೆಯಲಿದ್ದು, ಇದರಲ್ಲಿ ಆರೋಗ್ಯ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು ಭಾಗಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಪೋಲಿಯೋ ಲಸಿಕೆ ಕಾರ್ಯಕ್ರಮವನ್ನು ಸ್ವಲ್ಪ ದಿನಗಳ ಕಾಲ ಮುಂದೂಡಲಾಗಿದೆ.