ಹೈದರಾಬಾದ್: ಇತ್ತೀಚೆಗಷ್ಟೆ ಕೊರೊನಾ ಲಾಕ್‍ಡೌನ್‍ನಿಂದಾಗಿ ಮಹಾರಾಷ್ಟ್ರದಲ್ಲಿ ಸಿಲುಕಿದ್ದ ಕರ್ನಾಟಕದ ನೂರಾರು ವಲಸೆ ಕಾರ್ಮಿಕರಿಗೆ ಅವರ ಊರುಗಳಿಗೆ ತೆರಳಲು ಬಾಲಿವುಡ್ ನಟ ಸೋನು ಸೂದ್ ಬಸ್ ವ್ಯವಸ್ಥೆ ಕಲ್ಪಿಸಿ ಮಾನವೀಯತೆ ಮೆರೆದಿದ್ದರು. ಇದೀಗ ನೂರಾರು ಯುವತಿಯರನ್ನು ಅವರ ತವರು ರಾಜ್ಯ ಒಡಿಶಾಕ್ಕೆ ಕಳುಹಿಸಲು ಸಹಾಯ ಮಾಡಿದ್ದಾರೆ.
ಕೊರೊನಾ ಹಿನ್ನೆಲೆಯಲ್ಲಿ ಲಾಕ್‍ಡೌನ್ ಶುರುವಾದಾಗಿನಿಂದ ಸುಮಾರು ಒಡಿಶಾದ 177 ಯುವತಿಯರು ಕೇರಳದಲ್ಲಿ ಸಿಲುಕಿಕೊಂಡಿದ್ದರು. ಅಂದಿನಿಂದ ಯುವತಿಯರು ತಮ್ಮ ಊರಿಗೆ ಹೋಗಲು ಯಾವುದೇ ವ್ಯವಸ್ಥೆ ಇಲ್ಲದೆ ಪರದಾಡುತ್ತಿದ್ದರು. ಈ ಯುವತಿಯ ಬಗ್ಗೆ ಭುವನೇಶ್ವರದಲ್ಲಿರುವ ಸ್ನೇಹಿತರೊಬ್ಬರ ಮೂಲಕ ಸೋನು ಸೂದ್ ತಿಳಿದುಕೊಂಡಿದ್ದರು.
ತಕ್ಷಣ ಯುವತಿಗೆ ಸಹಾಯ ಮಾಡಲು ಮುಂದಾಗಿದ್ದು, ನಂತರ ವಿಮಾನ ನಿಲ್ದಾಣಗಳನ್ನು ತೆರೆಯಲು ಕೇರಳ ಮತ್ತು ಒಡಿಶಾ ಸರ್ಕಾರಗಳಿಂದ ಅನೇಕ ಅನುಮತಿಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ಸೋನು ಸೂದ್ ಯುವತಿಯರ ರಕ್ಷಣೆ ಮಾಡಿದ್ದು, ಅಲ್ಲಿಂದ ಅವರನ್ನು ವೈಮಾನಿಕ ಮಾರ್ಗದ ಮೂಲಕ ಒಡಿಶಾಕ್ಕೆ ಕಳುಹಿಸಲಾಗಿದೆ.
ಮೊದಲಿಗೆ ಸೋನಗ ಸೂದ್ ಕೇರಳದ ಕೊಚ್ಚಿ ಮತ್ತು ಒಡಿಶಾದ ಭುವನೇಶ್ವರ ವಿಮಾನ ನಿಲ್ದಾಣಗಳನ್ನು ತೆರೆಯುವಂತೆ ಆಯಾ ಸರ್ಕಾರಗಳಿಗೆ ಮನವಿ ಮಾಡಿಕೊಂಡಿದ್ದಾರೆ. ನಂತರ ಅಲ್ಲಿಂದ ಅನೇಕ ಬಗೆಯ ಅನುಮತಿಗಳನ್ನು ಪಡೆದುಕೊಂಡಿದ್ದಾರೆ. ನಂತರ ಬೆಂಗಳೂರಿನಿಂದ ಕೊಚ್ಚಿಗೆ ವಿಶೇಷ ವಿಮಾನ ರವಾನಿಸಲು ವ್ಯವಸ್ಥೆ ಮಾಡಿದ್ದಾರೆ. ಈ ವಿಮಾನದ ಮೂಲಕ 177 ಯುವತಿಯರನ್ನು ಒಡಿಶಾಕ್ಕೆ ಕಳುಹಿಸಿದ್ದಾರೆ. ಈ ಮೂಲಕ ಯುವತಿಯರು ಅವರ ಕುಟುಂಬವನ್ನು ಸೇರಲು ಸೋನು ಸೂದ್ ನೆರವಾಗಿದ್ದಾರೆ.
ಈ ಹಿಂದೆ ಸೋನು ಸೂದ್ ಅವರು ಕರ್ನಾಟಕ ಮತ್ತು ಮಹಾರಾಷ್ಟ್ರ ಸರ್ಕಾರಗಳ ಜೊತೆಗೆ ಚರ್ಚಿಸಿ ಕಲಬುರಗಿಯಿಂದ ಮಹಾರಾಷ್ಟ್ರದ ಥಾಣೆಗೆ ಬಂದಿದ್ದ ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ಕಳುಹಿಸಲು ಅನುಮತಿ ಪಡೆದಿದ್ದರು. ಈ ಮೂಲಕ ತಮ್ಮ ಸ್ವಂತ ಖರ್ಚಿನಲ್ಲಿ ಒಟ್ಟು ಹತ್ತು ಬಸ್‍ಗಳ ವ್ಯವಸ್ಥೆ ಮಾಡಿ ಥಾಣೆಯಿಂದ ಕಲಬುರಗಿಗೆ ತಾವೇ ಮುಂದೆ ನಿಂತು ಕಳುಹಿಸಿಕೊಟ್ಟಿದ್ದಾರೆ. ಅಷ್ಟೇ ಅಲ್ಲದೆ ವಲಸೆ ಕಾರ್ಮಿಕರಿಗೆ ಊಟದ ಕಿಟ್‍ಗಳನ್ನು ನೀಡಿ ಕನ್ನಡಿಗರ ಬಗ್ಗೆ ಕಾಳಜಿ ತೋರಿದ್ದಾರೆ.