ಬೆಂಗಳೂರು: ಕೊರೊನಾ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ ದಿನೇ ದಿನೇ ಹೆಚ್ಚಾಗುತ್ತಿದೆ. ಹೀಗಾಗಿ ಇಡೀ ದೇಶವನ್ನೇ ಪ್ರಧಾನಿ ಮೋದಿ ಅವರು ಲಾಕ್‍ಡೌನ್ ಮಾಡಿದ್ದರು. ಆದರೆ ಕರ್ನಾಟಕದಲ್ಲಿ ಲಾಕ್‍ಡೌನ್ ಸಡಿಲ ಆಗುತ್ತಿದೆ ಎಂದು ಪ್ರಧಾನಿ ಮೋದಿ ಅವರು ಅಸಮಾಧಾನಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಕರ್ನಾಟಕದಲ್ಲಿ ಲಾಕ್‍ಡೌನ್ ಇದ್ದರೂ ಜನರ ಓಡಾಟ ಹೆಚ್ಚಾಗುತ್ತಿದೆ. ಇದರಿಂದ ರಾಜ್ಯದಲ್ಲಿ ಸೋಂಕು ಕಡಿಮೆ ಆಗುತ್ತಿಲ್ಲ. ಆದ್ದರಿಂದ ಕೊರೊನಾ ವೈರಸ್ ಸೋಂಕು ಹರಡುವುದನ್ನು ನಿಯಂತ್ರಿಸಬೇಕು. ಹೀಗಾಗಿ ಇನ್ನಷ್ಟು ಕಠಿಣ ಕ್ರಮ ತೆಗೆದುಕೊಳ್ಳಲೇಬೇಕು ಎಂದು ಸಿಎಂ ಯಡಿಯೂರಪ್ಪ ಅವರಿಗೆ ಪ್ರಧಾನಿ ಮೋದಿ ಸೂಚನೆ ಕೊಟ್ಟಿದ್ದಾರೆ ಎನ್ನಲಾಗಿದೆ.
ಇಂದು ಸಿಎಂ ಯಡಿಯೂರಪ್ಪ ಅವರಿಗೆ ಪ್ರಧಾನಿ ಮೋದಿ ಫೋನ್ ಮಾಡುವ ಮೂಲಕ ಸೂಚನೆ ಕೊಟ್ಟಿದ್ದಾರೆ. ತಕ್ಷಣ ಸಿಎಂ ಯಡಿಯೂರಪ್ಪ ಸಚಿವ ಸಂಪುಟದಲ್ಲಿ ಕೊರೊನಾ ಸಮಸ್ಯೆ ಬಗ್ಗೆ ಗಂಭೀರವಾಗಿ ಚರ್ಚೆ ಮಾಡಿದ್ದಾರೆ. ಲಾಕ್‍ಡೌನ್ ಆದರೂ ರಾಜ್ಯದಲ್ಲಿ ಸೋಂಕು ಕಡಿಮೆ ಆಗುತ್ತಿಲ್ಲ. ಹೀಗಾಗಿ ಇಂದು ಸಂಜೆಯಿಂದಲೇ ಲಾಕ್‍ಡೌನ್ ಬಗ್ಗೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಸಿಎಂ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಸಭೆಯಲ್ಲಿ ಸೋಂಕು ತಡೆಗಟ್ಟಲು ಪ್ರತಿ ಜಿಲ್ಲೆಗಳಲ್ಲಿಯೂ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆ ಮತ್ತು ಕೇಂದ್ರ ಸರ್ಕಾರ ಘೋಷಣೆ ಮಾಡಿರುವ ವಿಶೇಷ ಪ್ಯಾಕೇಜ್ ಅನ್ನು ರಾಜ್ಯದಲ್ಲಿ ಅನುಷ್ಠಾನ ಮಾಡುವ ಬಗ್ಗೆ ಚರ್ಚೆ ಮಾಡಲಾಗಿದೆ. ಸಂಪುಟ ಸಭೆಯಲ್ಲೂ ಪ್ರಧಾನಿ ಮೋದಿ ಅಸಮಾಧಾನದ ಬಗ್ಗೆ ಸಿಎಂ ವಿವರಿಸಿದ್ದು, ಜನರ ಅನುಕೂಲಕ್ಕಾಗಿ ಸ್ವಲ್ಪ ಸಡಿಲಗೊಳಿಸಿದರೆ ಅದನ್ನೇ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಸಿಎಂ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.