ಬೆಳಗಾವಿ: ಸೆಪ್ಟೆಂಬರ್ 17 ರಂದು ನಡೆದ ಮೆಗಾ ಲಸಿಕಾ ಮೇಳದಲ್ಲಿ ಇಡೀ ದೇಶದಲ್ಲಿಯೇ ಬೆಳಗಾವಿ ಜಿಲ್ಲೆಯು ಎರಡನೇ ಸ್ಥಾನ ಗಳಿಸುವ ಮೂಲಕ ಅತ್ಯುತ್ತಮ ಸಾಧನೆ ಮಾಡಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು 4,09,977 ಲಸಿಕೆ ನೀಡುವ ಮೂಲಕ ಪ್ರಥಮ ಸ್ಥಾನ ಪಡೆದಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಒಂದೇ ದಿನದಲ್ಲಿ 2,57,604 ಲಸಿಕೆ ನೀಡುವ ಮೂಲಕ ದ್ವಿತೀಯ ಸ್ಥಾನದಲ್ಲಿದೆ.
ಬೆಳಗಾವಿ ಜಿಲ್ಲೆಯು ಮೂರು ಲಕ್ಷ ಲಸಿಕೆಯ ಗುರಿಯನ್ನು ಹೊಂದಿತ್ತು. ನಿರೀಕ್ಷಿತ ಗುರಿ ಸಾಧನೆಯಾಗದಿದ್ದರೂ ಒಟ್ಟಾರೆ ಲಸಿಕೆ ಪ್ರಮಾಣದಲ್ಲಿ ಇಡೀ ದೇಶದಲ್ಲಿಯೇ ಅತೀ ಹೆಚ್ಚು ಲಸಿಕೆ ನೀಡುವುದರಲ್ಲಿ ದ್ವಿತೀಯ ಸ್ಥಾನ ಗಳಿಸಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ತಿಳಿಸಿದ್ದಾರೆ.
ಈ ಸಾಧನೆಗೆ ಶ್ರಮಿಸಿದ ಕಂದಾಯ, ಆರೋಗ್ಯ, ಗ್ರಾಮೀಣಾಭಿವೃದ್ಧಿ, ನಗರ ಸ್ಥಳೀಯ ಸಂಸ್ಥೆಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಈ ಸಂದರ್ಭದಲ್ಲಿ ಕೃತಜ್ಞತೆ ಸಲ್ಲಿಸುತ್ತೇನೆ. ಮೆಗಾ ಲಸಿಕಾಮೇಳ ಯಶಸ್ವಿಯಾಗಲು ಸಹಕರಿಸಿದ ಎಲ್ಲ ಜನಪ್ರತಿನಿಧಿಗಳು, ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರಿಗೆ ಧನ್ಯವಾದಗಳು ಎಂದು ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ಹೇಳಿದ್ದಾರೆ.
Laxmi News 24×7