Breaking News

ಪ್ರೀತಿ ನಿರಾಕರಿಸಿದ್ದಕ್ಕೆ ಶಾಲೆಗೆ ನುಗ್ಗಿ ಮರ ಕಡಿಯುವ ಯಂತ್ರದಿಂದ ದಾಳಿ – 10ನೇ ತರಗತಿ ವಿದ್ಯಾರ್ಥಿನಿ ಸಾವು

Spread the love

ಅಮರಾವತಿ: ಪ್ರೀತಿಯನ್ನು ನಿರಾಕರಿಸಿದ ಕಾರಣಕ್ಕೆ 21 ವರ್ಷದ ಯುವಕನೊಬ್ಬ ಶಾಲೆಗೆ ನುಗ್ಗಿ 10ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಮರ ಕಡಿಯುವ ಯಂತ್ರದಿಂದ  ಭೀಕರವಾಗಿ ಹಲ್ಲೆ ನಡೆಸಿರುವ ಘಟನೆ ಆಂಧ್ರಪ್ರದೇಶದ  ಅನಂತಪುರ ಜಿಲ್ಲೆಯ ರಾಪ್ತಾಡು ಮಂಡಲದ  ಸರ್ಕಾರಿ ಶಾಲೆಯಲ್ಲಿ ನಡೆದಿದೆ.

ಗೋಪಿಕಾ ಮೃತ ವಿದ್ಯಾರ್ಥಿನಿ. ತರಗತಿಯಲ್ಲಿ ಪಾಠ ನಡೆಯುತ್ತಿದ್ದ ಸಂದರ್ಭದಲ್ಲಿ ಆರೋಪಿ ಯಂತ್ರದೊಂದಿಗೆ ಒಳನುಗ್ಗಿದ್ದಾನೆ. ತರಗತಿಯಲ್ಲಿದ್ದ ಇತರ ವಿದ್ಯಾರ್ಥಿಗಳು ನೋಡುತ್ತಿದ್ದಂತೆಯೇ ಆರೋಪಿ ಗೋಪಿಕಾಳ ಮುಖದ ಮೇಲೆ ಭೀಕರವಾಗಿ ಹಲ್ಲೆ ನಡೆಸಿದ್ದಾನೆ. ಅಷ್ಟೇ ಅಲ್ಲದೆ, ಆಕೆಯ ತಲೆ ಮತ್ತು ಬೆನ್ನಿನ ಭಾಗಕ್ಕೂ ಗಾಯಗಳಾಗಿವೆ. ಈ ವೇಳೆ ಹಲ್ಲೆಯನ್ನು ತಡೆಯಲು ಮಧ್ಯಪ್ರವೇಶಿಸಿದ ಲಕ್ಷ್ಮಿ ಎಂಬ ಮತ್ತೊಬ್ಬ ವಿದ್ಯಾರ್ಥಿನಿಗೂ ಗಾಯಗಳಾಗಿವೆ.

ದಾಳಿ ನಡೆಸಿದ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಇತ್ತ ಗೋಪಿಕಾ ತೀವ್ರ ರಕ್ತಸ್ರಾವದಿಂದ ತರಗತಿಯಲ್ಲೇ ಕುಸಿದು ಬಿದ್ದಿದ್ದಾಳೆ. ಘಟನೆಯನ್ನು ಕಣ್ಣಾರೆ ಕಂಡ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ತಕ್ಷಣವೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತೀವ್ರ ಗಾಯಗೊಂಡಿದ್ದ ಗೋಪಿಕಾಳನ್ನು ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೇ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ.

ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿ ಗೋಪಿಕಾಳ ದೂರದ ಸಂಬಂಧಿಯಾಗಿದ್ದ. ಆತ ಕಳೆದ ಕೆಲವು ಸಮಯದಿಂದ ಗೋಪಿಕಾಳಿಗೆ ತನ್ನನ್ನು ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದ ಎಂದು ತಿಳಿದುಬಂದಿದೆ. ಆದರೆ ಗೋಪಿಕಾ ಆತನ ಪ್ರೀತಿ ನಿರಾಕರಿಸಿದ್ದು, ತನ್ನನ್ನು ಹಿಂಬಾಲಿಸದಂತೆ ಹಾಗೂ ಆತನ ವರ್ತನೆಯ ಬಗ್ಗೆ ಪೋಷಕರಿಗೆ ದೂರು ನೀಡುವುದಾಗಿ ಎಚ್ಚರಿಕೆ ನೀಡಿದ್ದಳು ಎನ್ನಲಾಗಿದೆ. ಇದರಿಂದ ಆಕ್ರೋಶಗೊಂಡ ಆರೋಪಿ ಗೋಪಿಕಾಳ ಮೇಲೆ ದ್ವೇಷ ಬೆಳೆಸಿಕೊಂಡಿದ್ದ. ಇದೇ ಕಾರಣಕ್ಕೆ ಶಾಲೆಯ ತರಗತಿಯೊಳಗೆ ನುಗ್ಗಿ ಆಕೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಘಟನೆ ಕುರಿತು ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ತೀವ್ರ ಆಘಾತ ಮತ್ತು ದುಃಖ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿನಿಯ ಮೇಲೆ ನಡೆದ ದಾಳಿಯ ಬಗ್ಗೆ ಸಿಎಂ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಅಲ್ಲದೆ, ದಾಳಿ ನಡೆಸಿದ ಆರೋಪಿಯನ್ನು ಶೀಘ್ರವಾಗಿ ಪತ್ತೆಹಚ್ಚಿ ಬಂಧಿಸುವಂತೆ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಿದ್ದಾರೆ. ತಪ್ಪಿತಸ್ಥನಿಗೆ ಗರಿಷ್ಠ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಪರಾರಿಯಾಗಿರುವ ಆರೋಪಿಗಾಗಿ ಪೊಲೀಸರು ಶೋಧ ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ.


Spread the love

About Laxminews 24x7

Check Also

Special: ಕನ್ನಡವೇ ನಮ್ಮ ಉಸಿರು, ಕರ್ನಾಟಕವೇ ನಮ್ಮ ಹೆಮ್ಮೆ

Spread the loveನವೆಂಬರ್ 1, ಪ್ರತಿಯೊಬ್ಬ ಕನ್ನಡಿಗನ ಪಾಲಿಗೆ ಅತ್ಯಂತ ಹೆಮ್ಮೆಯ, ಅಭಿಮಾನದ ಹಾಗೂ ಸಂಭ್ರಮದ ದಿನ. ಕನ್ನಡ ನಾಡಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ