Breaking News

2027ರಲ್ಲೇ ರಾಜ್ಯದಲ್ಲಿ ಮಧ್ಯಂತರ ಚುನಾವಣೆ: ಎಚ್.ಡಿ. ಕುಮಾರಸ್ವಾಮಿ ಹೊಸ ಬಾಂಬ್

Spread the love

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ ಹಾಗೂ ರಾಜಕೀಯ ಬೆಳವಣಿಗೆಗಳನ್ನು ಗಮನಿಸಿದರೆ, 2028ರಲ್ಲಿ ನಡೆಯಬೇಕಿರುವ ವಿಧಾನಸಭಾ ಚುನಾವಣೆ 2027ರಲ್ಲೇ ನಡೆಯುವ ಸಾಧ್ಯತೆ ಇದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.

ಹಾಸನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಕೂಟ ಅಧಿಕಾರಕ್ಕೆ ಬಂದು ಸರ್ಕಾರ ರಚಿಸುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್–ಬಿಜೆಪಿ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂಬ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೇಳಿಕೆಯನ್ನು ಕುಮಾರಸ್ವಾಮಿ ಸಮರ್ಥಿಸಿಕೊಂಡರು. ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು, ಭ್ರಷ್ಟಾಚಾರದ ಆರೋಪಗಳು ಹಾಗೂ ಆಡಳಿತ ವೈಫಲ್ಯಗಳನ್ನು ಗಮನಿಸಿಯೇ ಯಡಿಯೂರಪ್ಪ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅವರ ಹೇಳಿಕೆಯಲ್ಲಿ ಯಾವುದೇ ಅತಿಶಯೋಕ್ತಿ ಇಲ್ಲ ಎಂದು ಹೇಳಿದರು.

ರಾಜ್ಯ ಸರ್ಕಾರದ ಆಡಳಿತದ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ಸರ್ಕಾರದ ಕಾರ್ಯವೈಖರಿಯಿಂದ ಜನರು ಬೇಸತ್ತಿದ್ದಾರೆ. ಇದೇ ಪರಿಸ್ಥಿತಿ ಮುಂದುವರಿದರೆ ಜನರೇ ಈ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುವ ಸಂದರ್ಭ ಎದುರಾಗಲಿದೆ ಎಂದು ಅಭಿಪ್ರಾಯಪಟ್ಟರು.

ಮಾಜಿ ಸಚಿವ ಬಿ.ಸಿ. ಪಾಟೀಲ್ ಅವರು ಸರ್ಕಾರದ ಅಸ್ಥಿರತೆಯ ಕುರಿತು ನೀಡಿರುವ ಹೇಳಿಕೆಯನ್ನು ಉಲ್ಲೇಖಿಸಿದ ಅವರು, ರಾಜ್ಯದಲ್ಲಿ ಕೇಳಿಬರುತ್ತಿರುವ ವಿವಿಧ ಹಗರಣಗಳ ಆರೋಪಗಳು ಮತ್ತು ಆಡಳಿತಾತ್ಮಕ ವೈಫಲ್ಯಗಳು ಸರ್ಕಾರದ ಪತನಕ್ಕೆ ಕಾರಣವಾಗಬಹುದು ಎಂದು ಎಚ್ಚರಿಸಿದರು.

ಇದೇ ವೇಳೆ, ಕುಮಾರಸ್ವಾಮಿ ಅವರಿಗೆ ರಕ್ತ ಕುದಿಯುತ್ತಿದ್ದರೆ ಇಂಗ್ಲಿಷ್‌ನಲ್ಲಿ ಮಾತನಾಡಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ನೀಡಿದ್ದ ವ್ಯಂಗ್ಯದ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಪ್ರಿಯಾಂಕ್ ಖರ್ಗೆ ಅವರಂತಹವರ ಬಗ್ಗೆ ಮಾತನಾಡಿ ತಮ್ಮ ಅಮೂಲ್ಯ ಸಮಯವನ್ನು ವ್ಯರ್ಥ ಮಾಡಿಕೊಳ್ಳಲು ಇಷ್ಟಪಡುವುದಿಲ್ಲ ಎಂದರು.

ತಮಗೆ ಇಂಗ್ಲಿಷ್ ಬರುವುದಿಲ್ಲ ಅಥವಾ ಇಂಗ್ಲಿಷ್‌ನಲ್ಲಿ ಮಾತನಾಡುವುದಿಲ್ಲ ಎಂಬ ವಿಚಾರವನ್ನು ಪ್ರಸ್ತಾಪಿಸಿದ ಅವರು, ಪ್ರಿಯಾಂಕ್ ಖರ್ಗೆ ಅವರೇ ಉರ್ದು ಚಾನೆಲ್‌ಗಳಲ್ಲಿ ಹೋಗಿ ಸಂದರ್ಶನ ನೀಡಲಿ ಎಂದು ವ್ಯಂಗ್ಯವಾಡಿದರು.


Spread the love

About Laxminews 24x7

Check Also

ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ: ಚಾಲಕ ಸ್ಥಳದಲ್ಲೇ ಸಾವು

Spread the loveಬೆಳಗಾವಿ: ಬುಲೆರೋ ವಾಹನ ಹಾಗೂ ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬುಲೆರೋ ಚಾಲಕ ಸ್ಥಳದಲ್ಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ