ಗದಗ: ಸಚಿವ ಬಸವರಾಜ ರಾಯರಡ್ಡಿ ನೇತೃತ್ವದಲ್ಲಿ ಗದಗ (Gadag) ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಎರಡು ದಿನಗಳ ಕಾಲ ನಡೆಯಲಿರುವ ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಮತ್ತು ಜನರಿಗೆ ಸಿಗುತ್ತಿರುವ ಸೌಲಭ್ಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆಯಲಾಯಿತು.
ಬರ ಪರಿಹಾರ, ಬೆಳೆ ವಿಮೆ ಕುರಿತು ಚರ್ಚೆ
ಕೃಷಿ, ತೋಟಗಾರಿಕೆ, ನೀರು ಸರಬರಾಜು ಹಾಗೂ ಗ್ರಾಮೀಣಾಭಿವೃದ್ಧಿ ಸೇರಿದಂತೆ ಹಲವು ಇಲಾಖೆಗಳ ಅಧಿಕಾರಿಗಳಿಂದ ಸಚಿವರು ಮಾಹಿತಿ ಪಡೆದುಕೊಂಡರು. ಬರ ಪರಿಹಾರ, ಬೆಳೆ ವಿಮೆ, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ವಿಬಿ-ಜಿ ರಾಮ್ ಜಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳ ಪ್ರಗತಿ ಕುರಿತು ಚರ್ಚಿಸಿದರು.
ಸಭೆಯಲ್ಲಿ ಕೆಲವು ಅಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ಸಮರ್ಪಕ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಸಚಿವ ಬಸವರಾಜ ರಾಯರಡ್ಡಿ ತರಾಟೆಗೆ ತೆಗೆದುಕೊಂಡರು. ಮುಂದಿನ ಸಭೆಗೆ ಸಂಪೂರ್ಣ ಮಾಹಿತಿ ಹಾಗೂ ಅಗತ್ಯ ದಾಖಲೆಗಳೊಂದಿಗೆ ಹಾಜರಾಗಬೇಕು. ಇಲ್ಲದಿದ್ದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮುಕುಲ್ ಜೈನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಎಚ್.ಎನ್., ಅಪರ ಜಿಲ್ಲಾಧಿಕಾರಿ ದುರ್ಗೇಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.
Laxmi News 24×7