ಧಾರವಾಡ: ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಪ್ರಾಪ್ತೆ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಆರೋಪದಡಿ ಗರಗ ಸರ್ಕಲ್ ಸಿಪಿಐ ಶಿವಯೋಗಿ ಲೋಹಾರ್ ಅವರನ್ನು ಅಮಾನತು ಮಾಡಲಾಗಿದೆ.
ಈ ಕುರಿತು ಧಾರವಾಡ ಜಿಲ್ಲಾ ಪೊಲೀಸ್ ಎಸ್ಪಿ ಗುಂಜನ್ ಆರ್ಯ ಆದೇಶ ಹೊರಡಿಸಿದ್ದಾರೆ. ಅಪ್ರಾಪ್ತೆ ಲವ್ ಜಿಹಾದ್ ಪ್ರಕರಣದಲ್ಲಿ ಪೊಲೀಸರು ರಾಜಿ ಸಂಧಾನ ಮಾಡಲು ಮುಂದಾಗಿದ್ದರು ಎಂಬ ಆರೋಪ ಕೇಳಿಬಂದಿತ್ತು. ಅಲ್ಲದೆ, ಈ ಪ್ರಕರಣದ ಹಿನ್ನೆಲೆ ಅಪ್ರಾಪ್ತೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೋಷಕರು ಆರೋಪಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಪ್ರಕರಣದ ತನಿಖೆಯಲ್ಲಿ ಕರ್ತವ್ಯ ಲೋಪ ಎಸಗಿರುವ ಆರೋಪದ ಹಿನ್ನೆಲೆಯಲ್ಲಿ ಸಿಪಿಐ ಶಿವಯೋಗಿ ಲೋಹಾರ್ ವಿರುದ್ಧ ಇಲಾಖೆ ಕ್ರಮ ಕೈಗೊಂಡಿದೆ.
ನಿನ್ನೆ ಶುಕ್ರವಾರ ಬಜರಂಗ ದಳ ಕಾರ್ಯಕರ್ತರು ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು. ಅದರ ಬೆನ್ನಲ್ಲೇ ಇಂದು ಸಿಪಿಐ ಅಮಾನತು ಆದೇಶ ಹೊರಬಿದ್ದಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
Laxmi News 24×7