ಬೆಳಗಾವಿ:ಜನರು ತಮ್ಮ ಕೆಲಸಗಳಿಗಾಗಿ ಸರ್ಕಾರಿ ಕಚೇರಿಗಳ ಸುತ್ತ ಅಲೆದಾಡುವ ಪರಿಸ್ಥಿತಿ ಇನ್ನು ಮುಂದೆ ನಿರ್ಮಾಣವಾಗಬಾರದು. ಸಾರ್ವಜನಿಕರ ಸಮಸ್ಯೆಗಳಿಗೆ ಅಧಿಕಾರಿಗಳು ನಿಗದಿತ ಅವಧಿಯಲ್ಲಿ ಸ್ಪಂದಿಸಿ, ಸ್ಥಳೀಯವಾಗಿಯೇ ಪರಿಹಾರ ಕಲ್ಪಿಸಬೇಕು ಎಂದು ಶಾಸಕ ಹಾಗೂ ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ಧರ್ಮಟ್ಟಿ ಗ್ರಾಮದಲ್ಲಿ ಶನಿವಾರ ತಾಲೂಕು ಆಡಳಿತ ಆಯೋಜಿಸಿದ್ದ ಪ್ರಜಾಸೇವೆ ಆಂದೋಲನದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರದ ಹೊಸ ಪ್ರಜಾಸೇವೆ ವ್ಯವಸ್ಥೆ ಕೇವಲ ಅರ್ಜಿ ಸ್ವೀಕರಿಸುವ ಕಾರ್ಯಕ್ರಮವಾಗದೆ, ಜನರ ಸಮಸ್ಯೆಗಳಿಗೆ ಪರಿಹಾರ ನೀಡುವ ಪರಿಣಾಮಕಾರಿ ವೇದಿಕೆಯಾಗಬೇಕು ಎಂದರು.
“ಒಂದು ಕಚೇರಿಯಿಂದ ಮತ್ತೊಂದು ಕಚೇರಿಗೆ ಜನರನ್ನು ಅಲೆದಾಡಿಸಬೇಡಿ. ಅವರ ಅರ್ಜಿಗಳನ್ನು ಪರಿಶೀಲಿಸಿ, ಸಾಧ್ಯವಾದಷ್ಟು ಬೇಗ ಕ್ರಮ ಕೈಗೊಳ್ಳಿ” ಎಂದು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.
ತಾಲೂಕಿನ ವಿವಿಧ ಗ್ರಾಮಗಳಲ್ಲಿ ಬಾಕಿ ಉಳಿದಿರುವ ನೀರು, ರಸ್ತೆ ಸೇರಿದಂತೆ ಮೂಲಭೂತ ಸೌಕರ್ಯಗಳ ಕಾಮಗಾರಿಗಳಿಗೆ ಆದ್ಯತೆ ನೀಡಬೇಕು. ಗ್ರಾಮಸ್ಥರ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ಹಂತ ಹಂತವಾಗಿ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ನೀರಿನ ಸಮಸ್ಯೆ ಎದುರಾಗಿರುವ ಪ್ರದೇಶಗಳಲ್ಲಿ ಲಭ್ಯವಿರುವ ನೀರನ್ನು ಸಮರ್ಪಕವಾಗಿ ಬಳಸಿಕೊಂಡು ರೈತರು ಹಾಗೂ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು. ಭವಿಷ್ಯದಲ್ಲಿ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಯೋಜನೆಗಳನ್ನು ರೂಪಿಸಿ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಜಾರಕಿಹೊಳಿ ಹೇಳಿದರು.
86 ಅರ್ಜಿಗಳು ಸ್ವೀಕಾರ
ಪ್ರಜಾಸೇವೆ ಆಂದೋಲನದಲ್ಲಿ ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಮುಂದಿಟ್ಟರು. ವಿವಿಧ ಇಲಾಖೆಗೆ ಸಂಬಂಧಿಸಿದಂತೆ ಒಟ್ಟು 86 ಅರ್ಜಿಗಳು ಸ್ವೀಕೃತವಾಗಿದ್ದು, ಅವುಗಳನ್ನು ಸಂಬಂಧಿಸಿದ ಇಲಾಖೆಗೆ ರವಾನಿಸಿ ತ್ವರಿತವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ ಶ್ರೀಶೈಲ ಗುಡುಮೆ ತಿಳಿಸಿದರು.
ತಹಶೀಲ್ದಾರ ಶ್ರೀಶೈಲ ಗುಡುಮೆ, ತಾ.ಪಂ. ಇಒ ಪ್ರಸನ್ನ ನೆರಳೇಕರ, ಅರಭಾವಿ ಸಿಡಿಪಿಓ ಯಲ್ಲಪ್ಪ ಗದಾಡಿ, ಹೆಸ್ಕಾಂ ಅಧಿಕಾರಿ ಎಂ.ಎಸ್. ನಾಗನ್ನವರ, ಸಿಪಿಐ ಶ್ರೀಶೈಲ ಬ್ಯಾಕೂಡ, ಮೂಡಲಗಿ ಪುರಸಭೆ ಮುಖ್ಯಾಧಿಕಾರಿ(ಪ್ರ) ಸಿ.ಬಿ. ಪಾಟೀಲ ಉಪಸ್ಥಿತರಿದ್ದರು.
Laxmi News 24×7