Breaking News

ಗ್ರಾಮಗಳಿಗೆ ಕುಡಿಯುವ ನೀರಿನ ಸಮರ್ಪಕ ಪೂರೈಕೆಗೆ ಆದ್ಯತೆ : ರಾಹುಲ್ ಶಿಂಧೆ

Spread the love

ಬೆಳಗಾವಿ: ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಹಾಗೂ ಎಲ್ಲ ಗ್ರಾಮಗಳಿಗೂ ಸಮರ್ಪಕವಾಗಿ ಕುಡಿಯುವ ನೀರಿನ ಪೂರೈಕೆ ಮಾಡಬೇಕು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಸೂಚನೆ ನೀಡಿದರು.

ಇಲ್ಲಿನ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಎಲ್ಲ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದಂತೆ  ಕುಂದುಕೊರತೆಗಳ ಮೇಲ್ವಿಚಾರಣೆಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಂಜಿನಿಯರ್ ಗಳನ್ನು ನಿಯೋಜಿಸಬೇಕು. ಗ್ರಾಮ ಪಂಚಾಯತ ಕಾರ್ಯಾಲಯದ ನಾಮಫಲಕ ಅಥವಾ ಗೋಡೆಯ ಮೇಲೆ ಸಂಬಂಧಪಟ್ಟ ಇಂಜಿನಿಯರ್ ಗಳ ಮೊಬೈಲ್ ಸಂಖ್ಯೆಯನ್ನು ಬರೆಯಿಸಬೇಕು ಎಂದು ನಿರ್ದೇಶನ ನೀಡಿದರು.

ಕುಡಿಯುವ ನೀರು ಹಾಗೂ ನೈರ್ಮಲ್ಯಕ್ಕೆ ಸಂಬಂಧಿಸಿದಂತೆ ದೂರುಗಳು ಬಂದರೇ ಸಂಬಂಧಪಟ್ಟ ಇಂಜಿನಿಯರ್ ಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಹೀಗಾಗಿ, ಇಂಜಿನಿಯರ್ ಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರಿಂದ ದೂರುಗಳು ಬಂದರೆ ಕೂಡಲೇ ಸ್ಪಂದಿಸಬೇಕು. ಸಂಬಂಧಪಟ್ಟ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.

ನೀರಿನ ಮಾದರಿ ಪರೀಕ್ಷೆ ನಡೆಸಿ

ಎಲ್ಲ ಗ್ರಾಮಗಳಲ್ಲಿ ನೀರಿನ ಮಾದರಿ ಪರೀಕ್ಷೆ ಕೈಗೊಳ್ಳಬೇಕು. ನೀರಿನ ಟ್ಯಾಂಕರ್ ಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸಬೇಕು. ಸ್ವಚ್ಛಗೊಳಿಸಿರುವ ಕುರಿತು ದಿನಾಂಕಗಳನ್ನು ಬರೆಯಿಸಬೇಕು. ನೀರು ಕಲುಷಿತವಾಗದಂತೆ ಕ್ರಮವಹಿಸಬೇಕು. ರೋಗ-ರುಜಿನಗಳು ಹರಡದಂತೆ ಎಚ್ಚರಿಕೆ ವಹಿಸಬೇಕು. ಗ್ರಾಪಂಮಟ್ಟದಲ್ಲಿ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಮತ್ತು ಇಂಜಿನಿಯರ್ ಗಳು ಹಾಗೂ ತಾಲೂಕಾ ಮಟ್ಟದಲ್ಲಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು  ಮತ್ತು ಸಹಾಯಕ ಕಾರ್ಯಪಾಲಕ ಅಭಿಯಂತರರು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.

ಗ್ರಾಮ ಪಂಚಾಯತಿಗಳಿಗೆ ಆರ್.ಓ. ಪ್ಲ್ಯಾಂಟ್ ಗಳ ಹಸ್ತಾಂತರ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಯಾವುದಾದರು ಗ್ರಾಮದಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ಸಮಸ್ಯೆಯಾದರೆ ಟ್ಯಾಂಕರ್ ಗಳ ಮೂಲಕ ನೀರು ಪೂರೈಸಬೇಕು. ಅಗತ್ಯಬಿದ್ದರೇ ಮಾತ್ರ ಬೋರವೆಲ್ ಗಳನ್ನು ಕೊರೆಯಿಸಲು ಕ್ರಮವಹಿಸಬೇಕು. ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಡ್ಯಾಮ್ ಗಳಲ್ಲಿ ನೀರಿನ ಮಟ್ಟ ಎಷ್ಟಿದೆ ಎಂಬುದರ ಕುರಿತು ಪ್ರತಿದಿನ ಮಾಹಿತಿ ಪಡೆಯಬೇಕು ಎಂದು ಸೂಚಿಸಿದರು.

ಶ್ರಮದಾನ ಕೈಗೊಳ್ಳಿ

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಕುಡಿಯುವ ನೀರಿನ ಸಮರ್ಪಕ ಬಳಕೆ ಹಾಗೂ ಸ್ವಚ್ಛತೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪ್ರತಿ ಶನಿವಾರ ತಮ್ಮ ವ್ಯಾಪ್ತಿಯ ಗ್ರಾಮಗಳಲ್ಲಿ ಶ್ರಮದಾನ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ನಿರ್ದೇಶನ ನೀಡಿದರು.

ಸಮರ್ಪಕ ಕಸ ವಿಲೇವಾರಿ ಮಾಡಿ

ಎಲ್ಲ ಗ್ರಾಮಗಳಲ್ಲಿ ಸಮರ್ಪಕವಾಗಿ ಕಸ ವಿಲೇವಾರಿ ಮಾಡಬೇಕು. ಕಸ ವಿಲೇವಾರಿಯಿಂದ ಸಾರ್ವಜನಿಕರಿಗೆ ಯಾವುದೇ ಸಮಸ್ಯೆಯಾಗದಂತೆ ಕ್ರಮವಹಿಸಬೇಕು. ನೀರಿನ ಮೂಲಗಳ ಸುತ್ತಮುತ್ತ ಹಾಗೂ ಗ್ರಾಮದ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಚತೆ ಕಾಪಾಡಲು ಅಗತ್ಯ ಕ್ರಮಕೈಗೊಳ್ಳಬೇಕು. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ಮಾಡಬೇಕು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕ ರವಿ ಬಂಗಾರೆಪ್ಪನವರ್, ಜಿಪಂ ಉಪಕಾರ್ಯದರ್ಶಿ (ಆಡಳಿತ) ಬಸವರಾಜ ಹೆಗ್ಗನಾಯಕ್, ಮುಖ್ಯ ಯೋಜನಾ ನಿರ್ದೇಶಕ ಗಂಗಾಧರ ದಿವಟರ್, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಳಗಾವಿ ವಿಭಾಗದ ಕಾರ್ಯಪಾಲಕ ಅಭಿಯಂತರ ಕಿರಣ ಘೋರ್ಪಡೆ, ಚಿಕ್ಕೋಡಿ ವಿಭಾಗದ ಕಾರ್ಯಪಾಲಕ ಅಭಿಯಂತರ ಪಾಂಡುರಂಗರಾವ್, ಎಲ್ಲ ತಾಲೂಕುಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಗೂ ಸಿಬ್ಬಂದಿ ಹಾಜರಿದ್ದರು.


Spread the love

About Laxminews 24x7

Check Also

ಅಪಘಾತ ಬ್ಲಾೃಕ್‌ಸ್ಪಾಟ್ ಕುರಿತು ಸುಧಾರಣಾ ಕ್ರಮ ಕೈಗೊಳ್ಳಲು ಸತೀಶ ಜಾರಕಿಹೊಳಿ ಸೂಚನೆ

Spread the loveಬೆಳಗಾವಿ: ವಾಕರಸಾ ಸಂಸ್ಥೆ ವ್ಯಾಪ್ತಿಯ 6 ಕಂದಾಯ ಜಿಲ್ಲೆಗಳ ಒಟ್ಟು 118 ಅಪಘಾತ ಕಪ್ಪು ಸ್ಥಳಗಳ(ಬ್ಲಾೃಕ್‌ಸ್ಪಾಟ್) ಕುರಿತು ಅಲ್ಪಾವಧಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ