Breaking News

11 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಬಂಗಾಳ ಪೊಲೀಸರ ಎನ್‌ಕೌಂಟರ್‌ಗೆ ಆರೋಪಿ ಬಲಿ

Spread the love

ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ  ನಡೆದಿದ್ದ 11 ವರ್ಷದ ಅಪ್ರಾಪ್ತ ಬಾಲಕಿಯ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಎನ್‌ಕೌಂಟರ್‌ ಮಾಡಿ ಹತ್ಯೆ ಮಾಡಿದ್ದಾರೆ.

ರಾಜ್ಯಾದ್ಯಂತ ಭಾರಿ ಆಕ್ರೋಶ ಮೂಡಿಸಿದ್ದ ಈ ಘಟನೆಯ ಪ್ರಮುಖ ಆರೋಪಿಯ ಪ್ರವಾಶ್‌ ಮೊಂಡಲ್‌ನನ್ನು ತನಿಖೆಯ ಭಾಗವಾಗಿ ಸ್ಥಳ ಮಹಜರಿಗೆ  ಕರೆದೊಯ್ದಾಗ, ಆತ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ನಡೆಸಿದ ಗುಂಡಿನ ದಾಳಿಗೆ ಆರೋಪಿ ಬಲಿಯಾಗಿದ್ದಾನೆ.

ಕಳೆದ ಕೆಲವು ದಿನಗಳ ಹಿಂದೆ ಬಾರುಯಿಪುರದಲ್ಲಿ 11 ವರ್ಷದ ಶಾಲಾ ಬಾಲಕಿಯೊಬ್ಬಳ ಮೇಲೆ ಅತ್ಯಂತ ಕ್ರೂರವಾಗಿ ಅತ್ಯಾಚಾರ ನಡೆಸಿ, ಬಳಿಕ ಆಕೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಲಾಗಿತ್ತು. ಬಾಲಕಿಯ ಮೃತದೇಹ ಪತ್ತೆಯಾದ ಬಳಿಕ ಪಶ್ಚಿಮ ಬಂಗಾಳದಲ್ಲಿ ಸಾರ್ವಜನಿಕರು ಮತ್ತು ವಿದ್ಯಾರ್ಥಿ ಸಂಘಟನೆಗಳು ಬೀದಿಗಿಳಿದು ಭಾರಿ ಪ್ರತಿಭಟನೆ ನಡೆಸಿದ್ದವು. ಮಹಿಳೆಯರ ಸುರಕ್ಷತೆಯ ಕುರಿತು ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ತನಿಖೆಯನ್ನು ತೀವ್ರಗೊಳಿಸಿದ್ದ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದರು. ಸಾಕ್ಷ್ಯ ಸಂಗ್ರಹಕ್ಕಾಗಿ ಪೊಲೀಸರ ತಂಡವು ಆರೋಪಿಯನ್ನು ತಡರಾತ್ರಿ ಘಟನಾ ಸ್ಥಳಕ್ಕೆ ಕರೆದೊಯ್ದಿತ್ತು. ಈ ಸಂದರ್ಭದಲ್ಲಿ ಪೊಲೀಸರ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳಲು ಆರೋಪಿ ಯತ್ನಿಸಿದ್ದಾನೆ.

ಆರೋಪಿ ಹಲ್ಲೆ ಮಾಡಿ ಓಡಿ ಹೋಗಲು ಯತ್ನಿಸಿದಾಗ ಪೊಲೀಸರು ಹಾರಿಸಿದ ಗುಂಡು ಆತನಿಗೆ ತಗುಲಿದೆ. ತಕ್ಷಣವೇ ಆತನನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಬಾಲಕಿಯ ಮೇಲಿನ ಈ ಘೋರ ದೌರ್ಜನ್ಯದ ವಿರುದ್ಧ ಇಡೀ ರಾಜ್ಯವೇ ಕುದಿಯುತ್ತಿತ್ತು. ಆರೋಪಿಗೆ ಕಠಿಣ ಶಿಕ್ಷೆಯಾಗಬೇಕೆಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದ ಬೆನ್ನಲ್ಲೇ ಈ ಎನ್‌ಕೌಂಟರ್ ನಡೆದಿದೆ. ಘಟನೆಯಲ್ಲಿ ಕೆಲವು ಪೊಲೀಸ್ ಸಿಬ್ಬಂದಿಗೂ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದೆ.

ಬಾರುಯಿಪುರದ ಕೊಳವೊಂದರಲ್ಲಿ ಹುಡುಗಿಯ ಶವ ಚೀಲದಲ್ಲಿ ತುಂಬಿ ಪತ್ತೆಯಾದ ನಂತರ ಬಂಧಿಸಲಾದ ನಾಲ್ವರಲ್ಲಿ ಮೊಂಡಲ್ ಕೂಡ ಸೇರಿದ್ದ. ಇನ್ನಿಬ್ಬರನ್ನು ಆನಂದ ಸರ್ದಾರ್ ಮತ್ತು ದಿಬಾಕರ್ ಸರ್ದಾರ್ ಎಂದು ಗುರುತಿಸಲಾಗಿದೆ. ಇವರು ತಮ್ಮ ಅಪರಾಧವನ್ನು ಒಪ್ಪಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

Spread the love

About Laxminews 24x7

Check Also

ವಸತಿ ಶಾಲೆಯಲ್ಲಿ 6ನೇ ತರಗತಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು; ಪೋಷಕರಿಂದ ವಾರ್ಡನ್‌ಗೆ ಥಳಿತ

Spread the loveಚಿಕ್ಕಬಳ್ಳಾಪುರ: ಉತ್ತರ ತಾಲೂಕಿನ ಕಾಡಯರಪ್ಪನಹಳ್ಳಿ ಬಳಿಯ ಖಾಸಗಿ ವಸತಿ ಶಾಲೆಯಲ್ಲಿ 12 ವರ್ಷದ ವಿದ್ಯಾರ್ಥಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ