ಬಾಗಲಕೋಟೆ: ತರಗತಿಯಲ್ಲಿ ಪಾಠ ಕೇಳುತ್ತಿದ್ದ ವೇಳೆಯಲ್ಲೇ ಕೊಠಡಿಯ ಮೇಲ್ಛಾವಣಿಯ ಕಾಂಕ್ರೀಟ್ ಕುಸಿದು ಬಿದ್ದು ವಿದ್ಯಾರ್ಥಿಗಳು ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ, ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಹಾಗೂ ಇಬ್ಬರು ಇಂಜಿನಿಯರ್ಗಳನ್ನುಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಬಾಗಲಕೋಟೆ ತಾಲೂಕಿನ ಮುಗಳೊಳ್ಳಿ ತಾಂಡಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೆ.2 ರಂದು ದಿನನಿತ್ಯದಂತೆ ತರಗತಿ ನಡೆಯುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಮೇಲ್ಛಾವಣಿಯ ಪ್ಲಾಸ್ಟರಿಂಗ್ ಹಾಗೂ ಕಾಂಕ್ರೀಟ್ ಚೂರುಗಳು ಮಕ್ಕಳ ಮೇಲೆ ಬಿದ್ದಿವೆ. ಈ ದುರ್ಘಟನೆಯಲ್ಲಿ ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದರು.
ಗಾಯಗೊಂಡ ಮಕ್ಕಳನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಕಟ್ಟಡ ದುಸ್ಥಿತಿಯಲ್ಲಿದ್ದರೂ ದುರಸ್ತಿಗೆ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸ್ಥಳೀಯರು ಮತ್ತು ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.
ಶಾಲಾ ಕಟ್ಟಡದ ಫಿಟ್ನೆಸ್ ಪ್ರಮಾಣಪತ್ರ ನೀಡುವಲ್ಲಿ ವಿಫಲರಾದ ಕಾರಣ ಪಿ.ಆರ್.ಇ.ಡಿ. (PRED) ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಎಸ್.ಎಂ. ರೇವಡಿ ಹಾಗೂ ಜೂನಿಯರ್ ಇಂಜಿನಿಯರ್ ಎಸ್.ಎಂ. ಸಂಗನಾಳ ಅವರನ್ನು ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಸಿಇಒ ಗಜಾನನ ಬಾಲೆ ಅವರು ಅಮಾನತುಗೊಳಿಸಿ ಆದೇಶಿಸಿದ್ದಾರೆ.
Laxmi News 24×7