ಬೆಂಗಳೂರು: ಕೊರೊನಾ ಭೀತಿಯಿಂದ ಇಡೀ ದೇಶವೇ ಲಾಕ್‍ಡೌನ್ ಆಗಿದೆ. ಈ ಮಧ್ಯೆ ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕುರಿ ಮೇಯಿಸಲು ಅವಕಾಶ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿಗಳ ಬಳಿ ಆಗ್ರಹಿಸಿದ್ದಾರೆ.
ಸಿದ್ದರಾಮಯ್ಯ ಅವರು ಟ್ವೀಟ್ ಮಾಡುವ ಮೂಲಕ ಕುರಿ ಮೇಯಿಸಲು ಅವಕಾಶ ಮಾಡಿಕೊಡಿ ಎಂದು ಕೇಳಿಕೊಂಡಿದ್ದಾರೆ. “ಕುರಿಗಳಿಂದ ಕೊರೊನಾ ಸೋಂಕು ತಗಲಲಿದೆ ಎಂಬ ತಪ್ಪು ಕಲ್ಪನೆಯಿಂದ ಸಿರಾ, ಚಿಕ್ಕನಾಯ್ಕನಹಳ್ಳಿ, ಹಿರಿಯೂರು, ಮಧುಗಿರಿ, ಹೊಸದುರ್ಗ ಕಡೆ ಜನ ಕುರಿಗಳನ್ನು ಹೊಡೆಯುತ್ತಿದ್ದಾರೆ. ಅಲ್ಲದೇ ಕುರಿಗಾಹಿಗಳನ್ನು ಓಡಿಸುವ ಕೆಲಸ ಮಾಡುತ್ತಿದ್ದಾರೆ. ಜಿಲ್ಲಾಧಿಕಾರಿಗಳು ಮಧ್ಯಪ್ರವೇಶಿಸಿ ಕುರಿಗಾಹಿಗಳಿಗೆ ರಕ್ಷಣೆ ಕೊಟ್ಟು ಕುರಿ ಮೇಯಿಸಲು ಅವಕಾಶ ಕಲ್ಪಿಸಬೇಕು” ಎಂದು ಆಗ್ರಹಿಸಿದ್ದಾರೆ.ಮತ್ತೊಂದು ಟ್ವೀಟ್ ಮಾಡಿರುವ ಸಿದ್ದರಾಮಯ್ಯ “ಲಾಕ್‍ಡೌನ್‍ನಿಂದಾಗಿ ತರಕಾರಿ, ಹಣ್ಣು, ಹೂ ಮಾರಾಟಕ್ಕೆ ಅವಕಾಶ ಇಲ್ಲದೆ ಇವುಗಳನ್ನು ಬೆಳೆದ ರೈತರು ಸಂಕಷ್ಟದಲ್ಲಿದ್ದಾರೆ. ಇನ್ನೊಂದೆಡೆ ಈ ಉತ್ಪನ್ನಗಳ ಅಲಭ್ಯತೆಯಿಂದಾಗಿ ಬಳಕೆದಾರರು ಕಂಗಾಲಾಗಿದ್ದಾರೆ. ರಾಜ್ಯಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ರೈತರ ಉತ್ಪನ್ನಗಳನ್ನು ಖರೀದಿಸಿ ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಬೇಕು” ಎಂದು ಹೇಳಿದ್ದಾರೆ.