ಶಿವಮೊಗ್ಗ: ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಯ ಮಕ್ಕಳ ವಾರ್ಡಿನಲ್ಲಿ ಕಾಣಿಸಿಕೊಂಡ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿ ಅವರಿಗೆ ಸೂಚಿಸಿರುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದ್ದಾರೆ.
ಸರ್ಜಿ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳು ಹಾಗೂ ತಾಯಂದಿರ ಆರೋಗ್ಯ ವಿಚಾರಿಸಿದ ಬಳಿಕ ಮಾತನಾಡಿದ ಸಚಿವರು, ಭಾನುವಾರ ಅನಾಮಿಕ ವ್ಯಕ್ತಿಯೊಬ್ಬರು ನನಗೆ ದೂರವಾಣಿ ಕರೆ ಮಾಡಿದ್ದರು. ಮೆಗ್ಗಾನ್ ಆಸ್ಪತ್ರೆಯಲ್ಲಿ ಈ ಹಿಂದೆಯೇ ಎಲೆಕ್ಟ್ರಿಕ್ ಸಮಸ್ಯೆ ಇದೆ ಸರಿಪಡಿಸಿ ಎಂದು ಅಧಿಕಾರಿಗಳಿಗೆ ತಿಳಿಸಿದ್ದೇವು. ಆದರೆ ಈ ಬಗ್ಗೆ ಯಾವೊಬ್ಬ ಅಧಿಕಾರಿಗಳು ಕ್ರಮ ತೆಗೆದುಕೊಳ್ಳದೇ ಇಂತಹ ಅವಘಡ ಸಂಭವಿಸಲು ಕಾರಣವಾಗಿದೆ ಎಂದು ದೂರು ನೀಡಿದ್ದರು ಎಂದು ಹೇಳಿದರು.
ಹೀಗಾಗಿ ಆಸ್ಪತ್ರೆಯಲ್ಲಿ ವಿದ್ಯುತ್‍ಗೆ ಸಂಬಂಧಿಸಿದಂತೆ ಏನು ಸಮಸ್ಯೆ ಇತ್ತು? ಸಮಸ್ಯೆ ಇದ್ದರೂ ಅಧಿಕಾರಿಗಳು ಯಾಕೆ ದುರಸ್ಥಿಗೊಳಿಸಲು ಕ್ರಮ ಕೈಗೊಳ್ಳಲಿಲ್ಲ? ಭಾನುವಾರ ಏನಾದರೂ ದೊಡ್ಡ ಅವಘಡ ಸಂಭವಿಸಿದ್ದರೇ ಯಾರು ಹೊಣೆ ಆಗುತ್ತಿದ್ದರು ಎಂದು ಕಿಡಿಕಾರಿದರು. ಹೀಗಾಗಿ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿರುವುದಾಗಿ ಈಶ್ವರಪ್ಪ ತಿಳಿಸಿದರು.
ಏನಿದು ಪ್ರಕರಣ?
ಶಿವಮೊಗ್ಗದಲ್ಲಿ ಭಾನುವಾರ ಸಂಜೆ ಗುಡುಗು ಸಿಡಿಲು ಸಹಿತ ಭಾರೀ ಗಾಳಿ ಮಳೆಯಾಗಿತ್ತು. ವರುಣನ ಅಬ್ಬರದಿಂದಾಗಿ ಮೆಗ್ಗಾನ್ ಬೋಧನಾ ಆಸ್ಪತ್ರೆಯ ಮಕ್ಕಳ ವಾರ್ಡ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಅವಘಡ ಸಂಭವಿಸಿತ್ತು.
ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಅವಘಡ ಸಂಭವಿಸಿಲ್ಲ. ಎಲ್ಲಾ 33 ಕಂದಮ್ಮಗಳು ಸುರಕ್ಷಿತವಾಗಿದ್ದು, ಮಹಿಳೆಯ ಆರ್ಭಟಕ ಕಡಿಮೆಯಾಗುತ್ತಿದ್ದಂತೆ ಮಕ್ಕಳು ಹಾಗೂ ಬಾಣಂತಿಯರನ್ನು ನಗರದ ಸರ್ಜಿ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಯಿತು.
ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ಯಶಸ್ವಿಯಾಗಿದ್ದರು. ಅದೃಷ್ಟವಶಾತ್ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಅವರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.