ಮಡಿಕೇರಿ: ಕೆಲ ರಾಜ್ಯಗಳಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ರದ್ದು ಮಾಡಿರುವಂತೆ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ರದ್ದು ಮಾಡುವುದಿಲ್ಲ ಎಂದು ಆರೋಗ್ಯ ಸಚಿವ ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ನಡೆದ ಕೊರೊನಾ ಪ್ರಗತಿ ಪರಿಶೀಲನಾ ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಆತಂಕ ಪಡುವ ಅಗತ್ಯವಿಲ್ಲ. ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳು ಒಂದು ಗಂಟೆ ಮುಂಚಿತವಾಗಿಯೇ ಬರಲು ವ್ಯವಸ್ಥೆ ಮಾಡಲಾಗುವುದು. ಎಲ್ಲ ವಿದ್ಯಾರ್ಥಿಗಳಿಗೆ ತಪ್ಪದೇ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುವುದು. ಅಲ್ಲದೆ ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗುವುದು. ಇದಕ್ಕಾಗಿ ಆರೋಗ್ಯ ಮತ್ತು ಶಿಕ್ಷಣ ಇಲಾಖೆಯಿಂದ ವಿಶೇಷ ಸಿದ್ಧತೆ ಮಾಡಿಕೊಳ್ಳಲಾಗಿದೆ. ಗ್ರಾಮೀಣ ಭಾಗಗಳಿಂದ ಬರುವ ವಿದ್ಯಾರ್ಥಿಗಳ ಸಂಚಾರಕ್ಕೆ ಸಮಸ್ಯೆಯಾದಲ್ಲಿ ಅಂತಹ ವಿದ್ಯಾರ್ಥಿಗಳಿಗೆ ಉಳಿದುಕೊಳ್ಳಲು ಹಾಸ್ಟೆಲ್ ವ್ಯವಸ್ಥೆ ಕೂಡ ಮಾಡಿದ್ದೇವೆ ಎಂದರು.
ಶಾಲೆಗಳನ್ನು ತೆರೆಯುವ ಕುರಿತು ಪ್ರತಿಕ್ರಿಯಿಸಿದ ಅವರು, ಇದಕ್ಕಾಗಿ ವಿಶೇಷ ತಜ್ಞರ ಸಮಿತಿಯನ್ನು ರಚಿಸಲಾಗಿದೆ. ಶಾಲೆ ತೆರೆದರೆ ಆಗುವ ಸಾಧಕ ಬಾಧಕಗಳ ಬಗ್ಗೆಯೂ ಚರ್ಚಿಸಲಾಗುತ್ತಿದೆ. ಸಮಿತಿ ನೀಡುವ ವರದಿಯನ್ನು ಪರಿಶೀಲಿಸಿದ ಬಳಿಕ ಶಾಲೆ ಆರಂಭಿಸುವ ಕುರಿತು ಚರ್ಚಿಸಲಾಗುವುದು ಎಂದರು.
ಕೊಡಗು ಜಿಲ್ಲೆಯಲ್ಲಿ ಕೊರೊನಾ ವೈರಸ್ ನಿಯಂತ್ರಿಸಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವ ಶ್ರೀರಾಮುಲು, ಜಿಲ್ಲೆಯ ಆರೋಗ್ಯ ಇಲಾಖೆಯಲ್ಲಿರುವ ಸಮಸ್ಯೆಗಳನ್ನು ಆಲಿಸಿದರು. ಈ ವೇಳೆ ಕೊಡಗು ಡಿಎಚ್‍ಓ ಮೋಹನ್ ಅವರು ಜಿಲ್ಲೆಯಲ್ಲಿ 53 ತಜ್ಞ ವೈದ್ಯರ ಕೊರತೆ ಇದ್ದು, 17 ಎಂಬಿಬಿಎಸ್ ವೈದ್ಯರ ಕೊರತೆ ಇದೆ. ಜಿಲ್ಲಾಧಿಕಾರಿಗಳು ವೈದ್ಯರನ್ನು ನೇಮಿಸಿಕೊಂಡರೂ ಕರ್ತವ್ಯಕ್ಕೆ ಹಾಜರಾಗುತ್ತಿಲ್ಲ ಎಂದು ಸಮಸ್ಯೆ ಹೇಳಿಕೊಂಡರು.