ಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ ಕಡಿಮೆ ಆಗಲಿದ್ದು, ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಡಿಸಿ-ಸಿಇಓಗಳಿಗೆ ಸೂಚನೆ ಕೊಟ್ದಿದ್ದಾರೆ.
ವಿಧಾನಸೌಧದಲ್ಲಿ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿನ ಕುಡಿಯುವ ನೀರು ಪೂರೈಕೆ ಕುರಿತಾಗಿ ಜಿಲ್ಲಾ ಉಸ್ತುವಾರಿ ಸಚಿವರು, ಡಿಸಿ, ಸಿಇಓಗಳ ಜೊತೆ ಸಭೆ ನಡೆಸಿದರು. ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್ ತಿಂಗಳಲ್ಲಿ ವಾಡಿಕೆ ಮಳೆಯಾಗುವ ಸಾಧ್ಯತೆಯಿದ್ದು, ಸೆಪ್ಟೆಂಬರ್ ತಿಂಗಳಲ್ಲಿ ಮಳೆ ಕಡಿಮೆ ನಿರೀಕ್ಷಿಸಲಾಗಿದೆ. ಕುಡಿಯುವ ನೀರಿಗೆ ತೊಂದರೆಯಾದರೆ ಆಯಾ ಜಿಲ್ಲಾಧಿಕಾರಿಗಳೇ ಇದಕ್ಕೆ ಹೊಣೆಯಾಗುತ್ತಾರೆ. ಕಂದಾಯ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಹಾಗೂ ನಗರಾಭಿವೃದ್ಧಿ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಬೇಕು ಎಂದು ಸೂಚನೆ ಕೊಟ್ಟರು.
ಸಾರ್ವಜನಿಕರಿಗೆ ನೆರಳಿನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಕುಡಿಯುವ ನೀರು ಪೂರೈಕೆಯನ್ನು ಖಾತ್ರಿಪಡಿಸಲು ಯಾವುದೇ ಅನುದಾನದ ಕೊರತೆಯಿಲ್ಲ. ಜಿಲ್ಲಾಧಿಕಾರಿಗಳ ವರದಿ ಆಧಾರದಲ್ಲಿ ಅಗತ್ಯ ಅನುದಾನವನ್ನು ಒದಗಿಸಲು ಹಣಕಾಸು ಇಲಾಖೆಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಸಿಎಂ ತಿಳಿಸಿದರು.
ಇನ್ನು ಅನಿವಾರ್ಯ ಸಂದರ್ಭಗಳಲ್ಲಿ ಮಾತ್ರ ಟ್ಯಾಂಕರ್ ನೀರು ಪೂರೈಕೆ ಮಾಡಬೇಕು. ಖಾಸಗಿ ಬೋರ್ವೆಲ್ಗಳನ್ನು ಬಾಡಿಗೆ ಪಡೆಯುವುದಕ್ಕೆ ಆದ್ಯತೆ ನೀಡಬೇಕು. ರಾಜ್ಯದ ಪ್ರಮುಖ 14 ಜಲಾಶಯಗಳಲ್ಲಿ ಪ್ರಸ್ತುತ 321.93 ಟಿಎಂಸಿ ನೀರು ಲಭ್ಯವಿದ್ದು, ಇದು ಒಟ್ಟು ಸಾಮರ್ಥ್ಯದ ಶೇ.36ರಷ್ಟಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 330.35 ಟಿಎಂಸಿ ನೀರು ಲಭ್ಯವಿತ್ತು. ಪ್ರಸುತ ಕುಡಿಯುವ ನೀರಿಗೆ ಸಾಕಷ್ಟು ನೀರು ಜಲಾಶಯಗಳಲ್ಲಿ ಲಭ್ಯವಿದೆ. ಮಳೆಗಾಲ ವಿಳಂಬವಾಗಿ ಆರಂಭವಾಗುವ ಸಾಧ್ಯತೆಯಿರುವುದರಿಂದ ಜುಲೈ ಮಧ್ಯದವರೆಗೂ ಕುಡಿಯುವ ನೀರಿಗಾಗಿ ಜಲಾಶಯಗಳಲ್ಲಿ ನೀರಿನ ಲಭ್ಯತೆಯನ್ನು ಖಾತ್ರಿಪಡಿಸಬೇಕು. ನೀರಾವರಿಗಿಂತ ಕುಡಿಯುವ ನೀರಿನ ಪೂರೈಕೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಜಲಾಶಯಗಳಲ್ಲಿ ನೀರಿನ ಸೋರಿಕೆಯನ್ನು ಗುರುತಿಸಿ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
Laxmi News 24×7