ಹದಾಯಿ ವಿಚಾರವಾಗಿ ರಾಜ್ಯದ ಸಚಿವರು, ಶಾಸಕರು, ಹೋರಾಟಗಾರರ ಮನವಿಗೆ ಸ್ಪಂದಿಸಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿರುವುದು ಸಂತಸದ ವಿಚಾರ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಸರ್ಕಾರಕ್ಕೆ, ನಮ್ಮ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಟ್ರಿಬ್ಯೂನಲ್ ಆದೇಶದಂತೆ ಯೋಜನೆ ಜಾರಿ ಮಾಡುತ್ತೇವೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ರಮೇಶ್ ಜಾರಕಿಹೊಳಿ, ಸುಪ್ರೀಂ ಕೋರ್ಟ್ ಆದೇಶಕ್ಕೆ ಮೊದಲೇ ಮಹದಾಯಿಗೆ 200 ಕೋಟಿ ರೂಪಾಯಿ ಮೀಸಲಿಡಲು ಸಿಎಂ ಬಿಎಸ್ ಯಡಿಯೂರಪ್ಪನವರಿಗೆ ಮನವಿ ಮಾಡಿದ್ದೇವೆ. ಇನ್ನೂ ಹದಿನೈದು ದಿನಗಳ ಕಾಲ ಕೆಲವೊಂದು ವಿಷಯಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ಶೀಘ್ರವಾಗಿ ಕಾಮಗಾರಿ ಆರಂಭಿಸಲಾಗುವುದು ಎಂದರು.
ಕುಡಿಯುವ ನೀರಿಗೆ ಸಂಬಂಧಿಸಿದಂತೆ ಕೇಂದ್ರ ಪರಿಸರ ಇಲಾಖೆಯ ಅನುಮತಿ ಬೇಕಾಗಿಲ್ಲ. ಈ ಸಂದರ್ಭದಲ್ಲಿ ವಿಜಯೋತ್ಸವ ಬೇಡ. ಇನ್ನು ಮೇಕೆದಾಟು ಯೋಜನೆ ವಿಚಾರವಾಗಿಯೂ ಜಲಶಕ್ತಿ ಸಚಿವರೊಂದಿಗೆ ಚರ್ಚೆ ನಡೆಸಿದ್ದೇನೆ. ಈ ಬಗ್ಗೆ ಇನ್ನೊಮ್ಮೆ ದೆಹಲಿಗೆ ತೆರಳಿ ಈ ಬಗ್ಗೆ ಮನವಿ ಮಾಡುತ್ತೇನೆ ಎಂದು ಹೇಳಿದರು