ವಿಜಯಪುರ: ವಿಜಯಪುರ ವಿಮಾನ ನಿಲ್ದಾಣದ ಕಾರ್ಯಾರಂಭಕ್ಕೆ ಇದ್ದ ಪ್ರಮುಖ ಅಡೆತಡೆ ದೂರವಾಗಿದ್ದು, ಪರಿಸರ ಸಂಬಂಧಿತ ಅನುಮತಿ ಸಿಕ್ಕರೆ ಮುಂದಿನ ಮೂರು ತಿಂಗಳೊಳಗೆ ವಿಮಾನ ನಿಲ್ದಾಣವನ್ನು ಲೋಕಾರ್ಪಣೆ ಮಾಡಬಹುದು ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ವಿಜಯಪುರ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದ ಪರಿಸರ ಅನುಮತಿ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ಪೀಠ ಬುಧವಾರ ನೀಡಿರುವ ಅಂತಿಮ ತೀರ್ಪು ಸ್ವಾಗತಾರ್ಹವಾಗಿದೆ ಎಂದು ಹೇಳಿದರು. ಮುಖ್ಯ ನ್ಯಾ. ಸೂರ್ಯಕಾಂತ್, ನ್ಯಾ. ಜಯಮಾಲ್ಯ ಬಾಗ್ಚಿ ಹಾಗೂ ನ್ಯಾ. ವಿಪುಲ್ ಎಂ. ಪಾಂಚೋಲಿ ಅವರಿದ್ದ ಪೀಠ ಈ ತೀರ್ಪು ನೀಡಿದೆ.
ಈ ಪ್ರಕರಣದಲ್ಲಿ ರಾಜ್ಯದ ಪರವಾಗಿ ವಾದ ಮಂಡಿಸಿದ ಕೇಂದ್ರ ಸರ್ಕಾರದ ಸಾಲಿಸಿಟರ್ ಜನರಲ್ ತುಷಾರ್ ಮೆಹತಾ, ಹಿರಿಯ ವಕೀಲ ಕಪಿಲ್ ಸಿಬಲ್, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಹಾಗೂ ರಾಜ್ಯದ ಪರ ವಕೀಲ ನಿಶಾಂತ್ ಪಾಟೀಲ್ ಅವರಿಗೆ ಸಚಿವರು ಧನ್ಯವಾದ ತಿಳಿಸಿದ್ದಾರೆ.
2025ರ ಮೇ 16ರಂದು ಪರಿಸರ ಅನುಮತಿ ಪಡೆಯದ ಯೋಜನೆಗಳನ್ನು ರದ್ದುಪಡಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದ್ದರಿಂದ ವಿಜಯಪುರ ವಿಮಾನ ನಿಲ್ದಾಣ ಯೋಜನೆಗೂ ಅಡ್ಡಿಯಾಗಿತ್ತು. ಬಳಿಕ, ಈ ಸಮಸ್ಯೆ ಪರಿಹರಿಸಲು ಕಾನೂನು ತಜ್ಞರ ಸಹಕಾರ ಪಡೆಯಲಾಗಿತ್ತು ಎಂದು ಸಚಿವರು ಹೇಳಿದರು.
ಪರಿಸರ ಅನುಮತಿ ಕೋರಿ ಸಲ್ಲಿಸಿರುವ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡುವಂತೆ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಇದರಿಂದ ಅಗತ್ಯ ಅನುಮತಿ ಸಿಗುವ ಪ್ರಕ್ರಿಯೆ ವೇಗ ಪಡೆಯಲಿದೆ ಎಂದು ಅವರು ತಿಳಿಸಿದರು.
ಅನುಮತಿ ದೊರೆತ ಬಳಿಕ ನಾಗರಿಕ ವಿಮಾನಯಾನ ಮಹಾನಿರ್ದೇಶಕರು (DGCA) ವಿಜಯಪುರ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲಿಸಲಿದ್ದಾರೆ. ಆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ವಿಮಾನ ನಿಲ್ದಾಣ ಕಾರ್ಯಾರಂಭಕ್ಕೆ ದಾರಿ ಸುಗಮವಾಗಲಿದೆ ಎಂದು ಹೇಳಿದರು.
ಈ ವಿಮಾನ ನಿಲ್ದಾಣ ನಿರ್ಮಾಣಕ್ಕೆ 614 ಕೋಟಿ ರೂ.ಗಿಂತ ಹೆಚ್ಚು ವೆಚ್ಚ ಮಾಡಲಾಗಿದೆ. ವಿಮಾನ ನಿಲ್ದಾಣ ಆರಂಭವಾದರೆ ಕಿತ್ತೂರು ಕರ್ನಾಟಕ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳ ಅಭಿವೃದ್ಧಿಗೆ ಇದು ನೆರವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Laxmi News 24×7