Breaking News

ನೀರಿನ ಸಮಸ್ಯೆ ಬಗೆಹರಿಯದಿದ್ದರೆ ಇಂಡಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಿ: ಶಾಸಕ ಯಶವಂತರಾಯಗೌಡ ಪಾಟೀಲ ಮಾರ್ಮಿಕ ಹೇಳಿಕೆ

Spread the love

ವಿಜಯಪುರ: ಜಿಲ್ಲೆಯ ಇಂಡಿ ಮತಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಸಮಸ್ಯೆ ಬಗೆಹರಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಶಾಸಕ ಯಶವಂತರಾಯಗೌಡ ಪಾಟೀಲ, ಕುಡಿಯುವ ನೀರಿನ ಸಮಸ್ಯೆ ಬಗೆಹರಿಯದಿದ್ದರೆ ನಮ್ಮ ಇಂಡಿಯನ್ನು ಮಹಾರಾಷ್ಟ್ರ ರಾಜ್ಯಕ್ಕೆ ಸೇರಿಸುವಂತೆ ಒತ್ತಾಯಿಸ ಬೇಕಾಗುತ್ತದೆ ಎಂದು ಮಾರ್ಮಿಕವಾಗಿ ನುಡಿದರು.

ವಿಜಯಪುರ ನಗರದ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ನೇತೃತ್ವದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಮತಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಮಹಾರಾಷ್ಟ್ರ ರಾಜ್ಯದ ಮುಖ್ಯಮಂತ್ರಿಯವರನ್ನೇ ಭೇಟಿ ಮಾಡಿ ಬಂದಿದ್ದೇವೆ. ಮಹಾರಾಷ್ಟ್ರದಲ್ಲಿದ್ದರೆ ನೀರಿನ ಸಮಸ್ಯೆಯಾದರೂ ಪರಿಹಾರವಾಗಬಹುದೇನೋ ಎಂದು ಅಧಿಕಾರಿಗಳಿಗೆ ಚಾಟಿ ಬೀಸಿದರು. ಆಲಮಟ್ಟಿ ಜಲಾಶಯದಲ್ಲಿ ಸಂಗ್ರಹವಾಗುವ ನೀರನ್ನು ಸಮರ್ಪಕವಾಗಿ ನಿರ್ವಹಣೆ ಮಾಡಿ, ಜಿಲ್ಲೆಯ ಎಲ್ಲ ಭಾಗಗಳಿಗೂ ಸಮಾನವಾಗಿ ನೀರು ಹಂಚಿಕೆ ಮಾಡುತ್ತಿಲ್ಲ. ಕಳೆದ ಮಳೆಗಾಲದಲ್ಲಿ ಯಾವಾಗ ಮಳೆ ಆರಂಭವಾಯಿತು, ಆಲಮಟ್ಟಿ ಜಲಾಶಯಕ್ಕೆ ಎಷ್ಟು ಪ್ರಮಾಣದ ನೀರು ಹರಿದುಬಂದಿತು ಹಾಗೂ ಕೆರೆ ತುಂಬಿಸುವುದು ಸೇರಿದಂತೆ ವಿವಿಧ ಉದ್ದೇಶಗಳಿಗೆ ಯಾವ ನಿರ್ಧಾರದಂತೆ ನೀರು ಹರಿಸಲಾಗಿದೆ ಎಂಬುದರ ಕುರಿತು ಅಧಿಕಾರಿಗಳಿಂದ ಮಾಹಿತಿ ಕೇಳಿದರು. ಐಸಿಸಿ ಸಭೆಯಲ್ಲಿ ಕೈಗೊಂಡ ನಿರ್ಣಯಗಳು ಸಮರ್ಪಕವಾಗಿ ಜಾರಿಯಾಗುತ್ತಿಲ್ಲ. ನೀರಿನ ಹಂಚಿಕೆಯಲ್ಲಿ ಉಲ್ಲಂಘನೆಗಳಾಗುತ್ತಿದ್ದು, ಇದರ ಪರಿಣಾಮ ರೈತರು ಸಂಕಷ್ಟ ಅನುಭವಿಸುವಂತಾಗಿದೆ. ವಿಶೇಷವಾಗಿ ಕಾಲುವೆಗಳ ಕೊನೆಯ ಭಾಗದ ರೈತರಿಗೆ ಸಮರ್ಪಕವಾಗಿ ನೀರು ತಲುಪುತ್ತಿಲ್ಲ. ಪ್ರತಿಯೊಂದು ನೀರಾವರಿ ಯೋಜನೆಯಲ್ಲೂ ಟೇಲ್‌ಎಂಡ್ ಭಾಗದ ರೈತರೇ ನಿರಂತರವಾಗಿ ತೊಂದರೆ ಅನುಭವಿಸುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿಗಳು ಪ್ರತಿ ಮೂರು ತಿಂಗಳಿಗೊಮ್ಮೆ ಕಡ್ಡಾಯವಾಗಿ ಕೆಡಿಪಿ ಸಭೆ ನಡೆಸಬೇಕು. ಮಳೆಗಾಲದಲ್ಲಿ ನೀರು ಹಂಚಿಕೆ ಮಾಡಿದ ವಿವರ ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಲಿರುವ ಕ್ರಮಗಳ ಕುರಿತು ಅಧಿಕಾರಿಗಳು ಸಮಗ್ರ ಮಾಹಿತಿ ನೀಡಬೇಕು ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಆಗ್ರಹಿಸಿದರು.


Spread the love

About Laxminews 24x7

Check Also

KPSC ನೇಮಕಾತಿ ಹಗರಣ; ಶಿವಶಂಕರಪ್ಪ ಸಾಹುಕಾರ್‌, ಗೀತಾ ಜೈಲಿಗೆ

Spread the love ಬೆಂಗಳೂರು: ಕೆಪಿಎಸ್‌ಸಿ ನೇಮಕಾತಿ ಹಗರಣದಲ್ಲಿ ಪ್ರಮುಖ ಆರೋಪಿಗಳಾದ ಶಿವಶಂಕರಪ್ಪ ಸಾಹುಕಾರ್‌, ಗೀತಾ ಜೈಲುಪಾಲಾಗಿದ್ದಾರೆ. ಎಸ್‌ಐಟಿ ಅಧಿಕಾರಿಗಳಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ